ಚನ್ನಪಟ್ಟಣ ಉಪಚುನಾವಣೆ - ನಿಖಿಲ್‌ ಕಣಕ್ಕಿಳಿಸಲು ಎಚ್‌ಡಿಕೆ ಮೀನ ಮೇಷ - ಮತ್ತ್ಯಾರಿಗೆ ಮಣೆ..?

Published : Oct 18, 2024, 11:25 AM IST
HD Kumaraswamy

ಸಾರಾಂಶ

ಚನ್ನಪಟ್ಟಣವು ತೀವ್ರ ಕುತೂಹಲ ಮೂಡಿಸಿದ್ದು, ಜೆಡಿಎಸ್‌ ಅಭ್ಯರ್ಥಿಯನ್ನಾಗಿ ತಮ್ಮ ಪುತ್ರ ನಿಖಿಲ್‌ ಕುಮಾರಸ್ವಾಮಿ ಅವರನ್ನು ಕಣಕ್ಕಿಳಿಸುವ ಬಗ್ಗೆ ಪಕ್ಷದ ರಾಜ್ಯಾಧ್ಯಕ್ಷ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮೀನಮೇಷ ಎಣಿಸುತ್ತಿದ್ದಾರೆ.

ಬೆಂಗಳೂರು : ರಾಜ್ಯದಲ್ಲಿ ಉಪಚುನಾವಣೆ ಘೋಷಣೆಯಾಗಿರುವ ಮೂರು ವಿಧಾನಸಭಾ ಕ್ಷೇತ್ರಗಳ ಪೈಕಿ ಚನ್ನಪಟ್ಟಣವು ತೀವ್ರ ಕುತೂಹಲ ಮೂಡಿಸಿದ್ದು, ಜೆಡಿಎಸ್‌ ಅಭ್ಯರ್ಥಿಯನ್ನಾಗಿ ತಮ್ಮ ಪುತ್ರ ನಿಖಿಲ್‌ ಕುಮಾರಸ್ವಾಮಿ ಅವರನ್ನು ಕಣಕ್ಕಿಳಿಸುವ ಬಗ್ಗೆ ಪಕ್ಷದ ರಾಜ್ಯಾಧ್ಯಕ್ಷ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮೀನಮೇಷ ಎಣಿಸುತ್ತಿದ್ದಾರೆ.

ನಿಖಿಲ್ ಬದಲು ಮಾಜಿ ಶಾಸಕಿಯೂ ಆಗಿರುವ ತಮ್ಮ ಪತ್ನಿ ಅನಿತಾ ಅಥವಾ ಪಕ್ಷದ ಸ್ಥಳೀಯ ಮುಖಂಡ ಜಯಮುತ್ತು ಅವರನ್ನು ಕಣಕ್ಕಿಳಿಸುವ ಬಗ್ಗೆ ಕುಮಾರಸ್ವಾಮಿ ಅವರು ಚಿಂತನೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕ್ಷೇತ್ರವನ್ನು BJPಗೆ ಬಿಟ್ಟು ಕೊಡದಿದ್ದರೆ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಮುಂದಾಗಿರುವುದರಿಂದ ನಿಖಿಲ್ ಕುಮಾರಸ್ವಾಮಿ ಅವರು ಸ್ಪರ್ಧಿಸಿದರೆ ಕಷ್ಟವಾಗಬಹುದು. ಈಗಾಗಲೇ ಎರಡು ಚುನಾವಣೆಗಳಲ್ಲಿ ಸೋಲು ಅನುಭವಿಸಿರುವುದರಿಂದ ಪರಿಸ್ಥಿತಿ ನೋಡಿ ಹೆಜ್ಜೆ ಇಡುವುದು ಸೂಕ್ತ ಎಂಬ ಲೆಕ್ಕಾಚಾರ ಜೆಡಿಎಸ್ ಪಾಳೆಯದಲ್ಲಿ ನಡೆದಿದೆ ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ.

ಶಿಗ್ಗಾವಿ, ಸಂಡೂರು ಕ್ಷೇತ್ರದಲ್ಲಿ ಮಿತ್ರಪಕ್ಷ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ. ಆದರೆ, ಚನ್ನಪಟ್ಟಣ ಕ್ಷೇತ್ರದ ಅಭ್ಯರ್ಥಿ ಆಯ್ಕೆಯೇ ಬಿಜೆಪಿ-ಜೆಡಿಎಸ್‌ಗೆ ಕಗ್ಗಂಟಾಗಿದೆ. ಚನ್ನಪಟ್ಟಣ ಕ್ಷೇತ್ರದಲ್ಲಿ ಜೆಡಿಎಸ್‌ ಅಭ್ಯರ್ಥಿಯನ್ನೇ ಕಣಕ್ಕಿಳಿಸುವ ಬಗ್ಗೆ ಪಕ್ಷದ ನಾಯಕರು ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

ನಿಖಿಲ್‌ ಕುಮಾರಸ್ವಾಮಿ ಅವರು ತಾವು ಉಪಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟವಾಗಿ ತಿಳಿಸಿರುವುದರಿಂದ ಅವರ ಸ್ಪರ್ಧೆ ಅನುಮಾನವಾಗಿದೆ. ಜೆಡಿಎಸ್‌ ಪಕ್ಷದ ಸ್ಥಳೀಯ ನಾಯಕರಿಗೆ ಟಿಕೆಟ್‌ ನೀಡಲು ಜೆಡಿಎಸ್‌ ಮುಖಂಡರು ಮುಂದಾಗಿದ್ದಾರೆ. ಒಂದು ವೇಳೆ ಸ್ಥಳೀಯ ನಾಯಕರಿಗೆ ಟಿಕೆಟ್‌ ತಪ್ಪಿದರೆ ಅನಿತಾ ಕುಮಾರಸ್ವಾಮಿ ಅವರನ್ನು ಕಣಕ್ಕಿಳಿಸುವ ಬಗ್ಗೆ ಚಿಂತನೆ ನಡೆದಿದೆ ಎನ್ನಲಾಗಿದೆ.

ಹಿಂದೆ 2013ರಲ್ಲಿ ಚನ್ನಪಟ್ಟಣ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಅನಿತಾ ಕುಮಾರಸ್ವಾಮಿ ಅವರು ಕಣಕ್ಕಿಳಿದು, ಸಮಾಜವಾದಿ ಪಕ್ಷದ ಅಭ್ಯರ್ಥಿಯಾಗಿದ್ದ ಸಿ.ಪಿ.ಯೋಗೇಶ್ವರ್‌ ವಿರುದ್ಧ ಸೋಲನುಭವಿಸಿದ್ದರು. ಇದೀಗ ಮತ್ತೊಮ್ಮೆ ಅನಿತಾ ಕುಮಾರಸ್ವಾಮಿ ಹೆಸರು ಕೇಳಿ ಬರುತ್ತಿದೆ. ಎನ್‌ಡಿಎ ಅಭ್ಯರ್ಥಿಯಾಗಿ ಟಿಕೆಟ್‌ ಸಿಗದಿದ್ದರೆ ಯೋಗೇಶ್ವರ್‌ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಾಧ್ಯತೆ ಇದೆ.

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.

Recommended Stories

ಯಾವ ದೇವ್ರಿಗೆ ಪೂಜೆ ಮಾಡಿಸಿದ್ದೀರಿ? : ಮಧುಗೆ ರವಿ!
ಉತ್ತರ ಕರ್ನಾಟಕಕ್ಕೆ ₹15,000 ಕೋಟಿ : ಅಜಯ್‌