ಬೆಂಗಳೂರು : ಮತದಾರರ ಪಟ್ಟಿ ಅಕ್ರಮದ ವಿಚಾರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮುಜುಗರ ಆಗುವಂತೆ ಹೇಳಿಕೆ ನೀಡಿರುವ ಸಚಿವ ಕೆ.ಎನ್.ರಾಜಣ್ಣ ಅವರನ್ನು ಪಕ್ಷದಿಂದ ಅಮಾನತುಗೊಳಿಸಬೇಕು ಎಂದು ಬೆಂಗಳೂರು ನಗರ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್‌ಸಿಂಗ್ ಸುರ್ಜೇವಾಲಾ ಅವರಿಗೆ ಪತ್ರ ಬರೆದಿದ್ದಾರೆ.
ಮತಗಳ್ಳತನ ಹಾಗೂ ಮತಪಟ್ಟಿ ಅಕ್ರಮದ ವಿರುದ್ಧ ಪಕ್ಷಕ್ಕೆ ಮುಜುಗರ ಆಗುವಂತೆ ಕೆ.ಎನ್.ರಾಜಣ್ಣ ಹೇಳಿಕೆ ಹೇಳಿದ್ದಾರೆ. ಹೀಗಾಗಿ ಪಕ್ಷದಿಂದ ಅಮಾನತು ಮಾಡಬೇಕು ಎಂದು ಪತ್ರದಲ್ಲಿ ಆಗ್ರಹಿಸಿದ್ದು, ಕೆಲ ಕಾರ್ಯಕರ್ತರೂ ಪತ್ರಕ್ಕೆ ಸಹಿ ಹಾಕಿದ್ದಾರೆ.
ಮತದಾರರ ಪಟ್ಟಿ ಸಿದ್ಧವಾಗಿದ್ದು ನಮ್ಮ ಸರ್ಕಾರದ ಅವಧಿಯಲ್ಲೇ. ಆಗ ಯಾಕೆ ಸುಮ್ಮನಿದ್ದರು ಎಂದು ಸಚಿವ ರಾಜಣ್ಣ ಹೇಳಿದ್ದರು.
ಈ ಬಗ್ಗೆ ಸುರ್ಜೇವಾಲಾ ಅವರಿಗೆ ಪತ್ರ ಬರೆದಿರುವ ಸಮಿತಿ, ಸಚಿವರ ಹೇಳಿಕೆಯಿಂದ ಕಾಂಗ್ರೆಸ್ ಪಕ್ಷಕ್ಕೆ ಹಾಗೂ ನಾಯಕರಿಗೆ ಮುಜುಗರ ಉಂಟಾಗಿದೆ. ರಾಹುಲ್ ಗಾಂಧಿ ಅವರು ಬೆಂಗಳೂರಿಗೆ ಬಂದು ಮತಗಳ್ಳತನದ ವಿರುದ್ಧ ಧ್ವನಿ ಎತ್ತಿದ್ದರು. ಸಿದ್ದರಾಮಯ್ಯ. ಡಿ.ಕೆ.ಶಿವಕುಮಾರ್, ಸಚಿವರು ಸೇರಿ ಸಾವಿರಾರು ಕಾರ್ಯಕರ್ತರು ಪ್ರತಿಭಟಿಸಿದ್ದರು. ಆದರೆ ರಾಜಣ್ಣ ಅವರು ಪ್ರತಿಭಟನೆ ಹಾಗೂ ಮತಗಳ್ಳತನದ ಬಗ್ಗೆಯೇ ಪ್ರಶ್ನೆ ಮಾಡಿದ್ದಾರೆ. ಹೀಗಾಗಿ ಅವರ ವಿರುದ್ಧ ಕ್ರಮ ಆಗಬೇಕು ಎಂದು ದೂರಿನಲ್ಲಿ ತಿಳಿಸಿದ್ದಾರೆ.