ಮಂಡ್ಯ : ಶಾಂತಿ ನೆಮ್ಮದಿಗೆ ಹೆಸರಾಗಿದ್ದ ಮಂಡ್ಯ ಜಿಲ್ಲೆಗೆ ಕೋಮುಬೆಂಕಿ ಹಚ್ಚುವ ಕೆಲಸವಾಗುತ್ತಿದೆ. ಹಿಂದೆಂದೂ ಈ ಜಿಲ್ಲೆಯಲ್ಲಿ ಇಂಥ ಘಟನೆಗಳು ಜರುಗಿಲ್ಲ. ನಾಗಮಂಗಲದಲ್ಲಿ ಕೆಲ ದುಷ್ಟಶಕ್ತಿಗಳು ಬೆಂಕಿ ಹಾಕುವ ಕೆಲಸ ಮಾಡಿದವು. ಈಗ ಮದ್ದೂರಿನಲ್ಲಿಯೂ ಅಂಥ ಶಕ್ತಿಗಳೇ ಜನರ ನೆಮ್ಮದಿ ಕೆಡಿಸುವ ಹುನ್ನಾರ ನಡೆಸಿವೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದರು.
ಘಟನೆಯ ವಿಷಯ ತಿಳಿಯುತ್ತಿದ್ದಂತೆಯೇ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳ ಜತೆ ಮಾತನಾಡಿ ಮಾಹಿತಿ ಪಡೆದುಕೊಂಡು ಮಾಧ್ಯಮಗಳಿಗೆ ಪ್ರಕಟಣೆ ಬಿಡುಗಡೆಗೊಳಿಸಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಕೆಟ್ಟ ಆಡಳಿತ, ನಡವಳಿಕೆಯಿಂದಲೇ ಮದ್ದೂರಿನಲ್ಲಿ ಗಣಪತಿ ಮೆರವಣಿಗೆ ಮೇಲೆ ಕಲ್ಲು ಎಸೆಯುವಂಥ ಪರಿಸ್ಥಿತಿ ಸೃಷ್ಟಿಯಾಗಿದೆ. ಜಿಲ್ಲೆಯಲ್ಲಿ ಇಷ್ಟು ದೊಡ್ಡಮಟ್ಟದಲ್ಲಿ ಇಂಥ ಕೆಟ್ಟ ಘಟನೆಗಳು ನಡೆಯಲು ಕಾಂಗ್ರೆಸ್ ಸರ್ಕಾರವೇ ಕಾರಣ ಎಂದು ದೂರಿದ್ದಾರೆ.
ಮಂಡ್ಯ ಜಿಲ್ಲೆ ಯಾವಾಗಲೂ ಶಾಂತಿ ಸೌಹಾರ್ದತೆಗೆ ಹೆಸರಾಗಿದೆ. ಜನರು ಕಷ್ಟಪಟ್ಟು ಕೆಲಸ ಮಾಡುತ್ತಾ ನೆಮ್ಮದಿ ಜೀವನ ಮಾಡುತ್ತಿದ್ದಾರೆ. ಆದರೆ ಕೆಲ ಶಕ್ತಿಗಳು ವ್ಯವಸ್ಥಿತವಾಗಿ ಜನರ ನೆಮ್ಮದಿ ಹಾಳು ಮಾಡುವ ಕೆಲಸ ಮಾಡುತ್ತಿವೆ. ಕಾಂಗ್ರೆಸ್‌ನ ಓಲೈಕೆ ರಾಜಕಾರಣದಿಂದ ಇಂಥ ಕೆಟ್ಟ ಪರಿಸ್ಥಿತಿ ರಾಜ್ಯದ ಉದ್ದಗಲಕ್ಕೂ ಸೃಷ್ಟಿಯಾಗಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.
ಹಿಂದೂಗಳು ಅಸಮಾಧಾನವಾಗುವ ರೀತಿಯಲ್ಲಿ ಕಾಂಗ್ರೆಸ್ ಕೆಲಸ ಮಾಡುತ್ತಿದೆ. ಇದನ್ನು ನಾನು ರಾಜಕೀಯ ಉದ್ದೇಶದಿಂದ ಹೇಳುತ್ತಿಲ್ಲ. ರಾಜ್ಯದ ಹಲವೆಡೆ ಗಲಾಟೆಗಳು ನಡೆಯಲು ಕಾಂಗ್ರೆಸ್ ಪಕ್ಷವೇ ಕಾರಣ. ಈ ಮೂಲಕ ಕಾಂಗ್ರೆಸ್ ಪಕ್ಷವು ತನ್ನ ಅವನತಿಯನ್ನು ತಾನೇ ತಂದುಕೊಳ್ಳುತ್ತಿದೆ. ಇದೆಲ್ಲವನ್ನೂ ಕಾಂಗ್ರೆಸ್ ಅರ್ಥ ಮಾಡಿಕೊಳ್ಳದಿದ್ದರೆ ಇದು ಸೆಲ್ಪ್ ಸು*ಡ್ (ಆತ್ಮ*ತ್ಯೆ) ಆಗಲಿದೆ. ಸಾರ್ವಜನಿಕ ಆಸ್ತಿ-ಪಾಸ್ತಿ ಹಾನಿ ಆಗಬಾರದು. ಕಟ್ಟುನಿಟ್ಟಿನ ಕ್ರಮ ಕೈಗೊಂಡು ಕಿಡಿಗೇಡಿಗಳ ಹೆಡೆಮುರಿ ಕಟ್ಟುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.