ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದಿಂದ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಅವರಿಗೆ ಕಾಂಗ್ರೆಸ್ ಟಿಕೆಟ್ ದೊರೆತಿದೆ. ದಕ್ಷಿಣ ಶಿಕ್ಷಕರು ಹಾಗೂ ಪದವೀಧರ ಕ್ಷೇತ್ರದಿಂದ ಒಟ್ಟು ಮೂರು ಬಾರಿ ಪಕ್ಷೇತರ, ಕಾಂಗ್ರೆಸ್ ಅಭ್ಯರ್ಥಿಯಾಗಿ ಸೋತಿದ್ದಾರೆ.
ಕನ್ನಡಪ್ರಭ ವಾರ್ತೆ ಮೈಸೂರು
ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದಿಂದ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಅವರಿಗೆ ಕಾಂಗ್ರೆಸ್ ಟಿಕೆಟ್ ದೊರೆತಿದೆ.ವೃತ್ತಿಯಲ್ಲಿ ಎಂಜಿನಿಯರ್ ಆದ ಅವರು 2008 ರಲ್ಲಿ ಚಾಮರಾಜ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ, ದಕ್ಷಿಣ ಶಿಕ್ಷಕರು ಹಾಗೂ ಪದವೀಧರ ಕ್ಷೇತ್ರದಿಂದ ಒಟ್ಟು ಮೂರು ಬಾರಿ ಪಕ್ಷೇತರ, ಕಾಂಗ್ರೆಸ್ ಅಭ್ಯರ್ಥಿಯಾಗಿ ಸೋತಿದ್ದಾರೆ.
ಕಾಂಗ್ರೆಸ್ ಟಿಕೆಟ್‌ಗೆ ಒಕ್ಕಲಿಗರ ಕೋಟಾದಲ್ಲಿ ಎಂ. ಲಕ್ಷ್ಮಣ್, ಜಿಲ್ಲಾಧ್ಯಕ್ಷ ಡಾ.ಬಿ.ಜೆ. ವಿಜಯಕುಮಾರ್, ಭಾರತ್ ಜೋಡೋ ಯಾತ್ರೆಯ ಕಾಲಕ್ಕೆ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರೊಂದಿಗೆ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಹೆಜ್ಜೆ ಹಾಕಿದ್ದ ಗೋಪಾಲಗೌಡ ಶಾಂತವೇರಿ ಆಸ್ಪತ್ರೆಯ ಡಾ. ಶುಶ್ರೂತ್ ಗೌಡ, ಎಂಡಿಎ ಮಾಜಿ ಅಧ್ಯಕ್ಷ ಸಿ. ಬಸವೇಗೌಡ ಆಕಾಂಕ್ಷಿಯಾಗಿದ್ದರು.
ವೀರಶೈವ ಕೋಟಾದಲ್ಲಿ ಗುರುಪಾದಸ್ವಾಮಿ ಹಾಗೂ ಗುರುಮಲ್ಲೇಶ್, ಕುರುಬರ ಕೋಟಾದಲ್ಲಿ ಮಾಜಿ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ, ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್, ಜೆ.ಜೆ. ಆನಂದ್ ಅವರ ಹೆಸರುಗಳು ಕೇಳಿ ಬಂದಿದ್ದವು.
ಮೊದ ಮೊದಲು ಡಾ. ಯತೀಂದ್ರ ಅವರಿಗೆ ಕಾಂಗ್ರೆಸ್ ಟಿಕೆಟ್ ಎಂದು ಹೇಳಲಾಗುತ್ತಿತ್ತು. ಆದರೆ ಬಿಜೆಪಿ- ಜೆಡಿಎಸ್ ಮೈತ್ರಿ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಲಹೆ ಮೇರೆಗೆ ಅವರು ಹಿಂದೆ ಸರಿದರು. ಒಕ್ಕಲಿಗರಿಗೆ ಟಿಕೆಟ್ ನೀಡುವುದು. ಆ ಮೂಲಕ ಒಕ್ಕಲಿಗರ ಮತಗಳನ್ನು ವಿಭಜಿಸಿ, ಕಾಂಗ್ರೆಸ್ ಸಾಂಪ್ರದಾಯಿಕ ಮತಗಳ ಜೊತೆಗೆ ಗೆಲ್ಲುವುದು ಅವರ ಉದ್ದೇಶವಾಗಿತ್ತು.
ಆದರೆ ಬಿಜೆಪಿಯಲ್ಲಿ ಹಾಲಿ ಸಂಸದ ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ನಿರಾಕರಿಸಿ, ರಾಜವಂಶಸ್ಥ ಯದುವೀರ್ ಅವರಿಗೆ ಅವಕಾಶ ನೀಡಿದ ನಂತರ ಮತ್ತೊಮ್ಮೆ ತಂತ್ರಗಾರಿಕೆ ಬದಲಾಗಬಹುದು ಎಂದು ಹೇಳಲಾಗುತ್ತಿತ್ತು.
ಪ್ರತಾಪ್ ಸಿಂಹ ಕಾಂಗ್ರೆಸ್ಗೆ ಬರುತ್ತಾರೆ, ಮಾಜಿ ಶಾಸಕ ದಿ.ವಾಸು ಅವರ ಪುತ್ರ ವಿ. ಕವೀಶ್ ಗೌಡ ಅವರನ್ನು ಕರೆತರಲಾಗುತ್ತದೆ ಎಂದು ಹೇಳಲಾಗುತ್ತಿತ್ತು. ಅದ್ಯಾವುದು ಕಾರ್ಯಗತವಾಗಿಲ್ಲ.
ಕೊನೆಗೆ ಕಳೆದ ಒಂಭತ್ತು ವರ್ಷಗಳಿಂದಲೂ ಜಿಲ್ಲೆಯಲ್ಲಿ ಪಕ್ಷವನ್ನು ಸಂಘಟಿಸುತ್ತಿರುವ ಜಿಲ್ಲಾಧ್ಯಕ್ಷ ವಿಜಯಕುಮಾರ್ ಅವರಿಗೆ ಟಿಕೆಟ್ ನೀಡಿದರೆ ಯುವಕ, ವಿದ್ಯಾವಂತ, ಒಕ್ಕಲಿಗ ಜನಾಂಗಕ್ಕೆ ಸೇರಿದವರು ಎಂಬುದು ಪ್ಲಸ್ ಪಾಯಿಂಟ್ ಆಗುತ್ತದೆ ಎಂಬ ಲೆಕ್ಕಾಚಾರವೂ ನಡೆದಿತ್ತು.
ಅಂತಿಮವಾಗಿ ಸಿಎಂ ಸಿದ್ದರಾಮಯ್ಯ ಅವರು ಈ ಹಿಂದೆ ನೀಡಿದ್ದ ಭರವಸೆಯಂತೆ ಒಕ್ಕಲಿಗರೇ ಆದ ಲಕ್ಷ್ಮಣ್ ಅವರಿಗೆ ಟಿಕೆಟ್ ಕೊಡಿಸಿದ್ದಾರೆ.