ಮುಸ್ಲಿಮರಿಗಷ್ಟೇ ಗುತ್ತಿಗೆ ಮೀಸಲು ಕೊಟ್ಟಿಲ್ಲ - ಅಲ್ಪಸಂಖ್ಯಾತರು, ಹಿಂದುಳಿದವರಿಗೂ ಮೀಸಲಿದೆ : ಡಿಕೆಶಿ

ಸಾರಾಂಶ

ಗುತ್ತಿಗೆಯಲ್ಲಿ ಮೀಸಲಾತಿ ಕೇವಲ ಮುಸ್ಲಿಂ ಸಮುದಾಯಕ್ಕಷ್ಟೇ ಸೀಮಿತವಾಗಿಲ್ಲ. ಅಲ್ಪಸಂಖ್ಯಾತ ಮತ್ತು ಹಿಂದುಳಿದವರಿಗೂ ಮೀಸಲಾತಿ ನೀಡಲು ಸರ್ಕಾರ ನಿರ್ಧಾರ ತೆಗೆದುಕೊಂಡಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸ್ಪಷ್ಟಪಡಿಸಿದರು.

 ಬೆಂಗಳೂರು : ಗುತ್ತಿಗೆಯಲ್ಲಿ ಮೀಸಲಾತಿ ಕೇವಲ ಮುಸ್ಲಿಂ ಸಮುದಾಯಕ್ಕಷ್ಟೇ ಸೀಮಿತವಾಗಿಲ್ಲ. ಅಲ್ಪಸಂಖ್ಯಾತ ಮತ್ತು ಹಿಂದುಳಿದವರಿಗೂ ಮೀಸಲಾತಿ ನೀಡಲು ಸರ್ಕಾರ ನಿರ್ಧಾರ ತೆಗೆದುಕೊಂಡಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸ್ಪಷ್ಟಪಡಿಸಿದರು. ಈ ಮೂಲಕ ವಿವಾದಕ್ಕೆ ಕಾರಣವಾಗಿರುವ ಸರ್ಕಾರದ ಕ್ರಮವನ್ನು ಸಮರ್ಥಿಸಿಕೊಂಡರು.

ಕೆಪಿಸಿಸಿ ಕಚೇರಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಮುಸ್ಲಿಂ ಸಮುದಾಯದವರಿಗೆ ಮಾತ್ರ ಶೇ.4ರಷ್ಟು ಮೀಸಲಾತಿ ನೀಡಲಾಗುತ್ತಿದೆ ಎಂದು ಹೇಳಿದವರು ಯಾರು? ಅಲ್ಪಸಂಖ್ಯಾತರು ಹಾಗೂ ಹಿಂದುಳಿದವರಿಗೂ ಮೀಸಲಾತಿ ನೀಡಲಾಗುತ್ತಿದೆ. ಅದರಲ್ಲಿ ಅಲ್ಪಸಂಖ್ಯಾತರು ಎಂದರೆ ಕೇವಲ ಮುಸ್ಲಿಂ ಸಮುದಾಯದವರಲ್ಲ. ಕ್ರಿಶ್ಚಿಯನ್‌, ಜೈನ, ಪಾರ್ಸಿ, ಸಿಖ್‌ ಹೀಗೆ ಹಲವು ಧರ್ಮಗಳೂ ಬರುತ್ತವೆ. ಈ ಹಿಂದೆ ಪರಿಶಿಷ್ಟ ಜಾತಿ/ಪಂಗಡದವರಿಗೆ ಗುತ್ತಿಗೆ ಮೀಸಲಾತಿ ನೀಡಲು ತಿದ್ದುಪಡಿ ಮಾಡಲಾಗಿತ್ತು. ಈಗ ಅದಕ್ಕೆ ಅಲ್ಪಸಂಖ್ಯಾತರು, ಹಿಂದುಳಿದವರನ್ನು ಸೇರಿಸಲಾಗುತ್ತಿದೆ ಎಂದರು.

ಅಲ್ಪಸಂಖ್ಯಾತರಿಗೆ 2 ಕೋಟಿ ರು. ಗುತ್ತಿಗೆ ಮೊತ್ತದಲ್ಲಿ ಮಾತ್ರ ಶೇ.4ರಷ್ಟು ಮೀಸಲಾತಿ ನೀಡಲು ನಿರ್ಧರಿಸಲಾಗಿದೆ. ಅದಕ್ಕಿಂತ ಹೆಚ್ಚಿನ ಮೊತ್ತದ ಕಾಮಗಾರಿಗಳಲ್ಲಿ ಮೀಸಲಾತಿ ನೀಡಲು ಸಾಧ್ಯವಿಲ್ಲ. ಈ ಕ್ರಮದಿಂದ ಬೇರೆ ಸಮುದಾಯದ ಹಕ್ಕು ಕಸಿಯುತ್ತಿಲ್ಲ. ಅಲ್ಪಸಂಖ್ಯಾತರೂ ಬದುಕಲು ನಾವು ಅನುಕೂಲ ಮಾಡಿಕೊಡಬೇಕಲ್ಲವೇ? ಈ ವಿಚಾರದಲ್ಲಿ ವಿರೋಧ ವ್ಯಕ್ತಪಡಿಸುತ್ತಿರುವ ಬಿಜೆಪಿಯವರಿಗೆ ನಮ್ಮನ್ನು ನೆನಪು ಮಾಡಿಕೊಳ್ಳದಿದ್ದರೆ ಆಗುವುದಿಲ್ಲ ಎಂದು ಹೇಳಿದರು.

Share this article