ಅಭಿವೃದ್ಧಿಗೆ ದೆಹಲಿ ಜೈ ಅಂದಿದೆ : ವಿಧಾನಸಭಾ ಚುನಾವಣೆ ಗೆಲುವಿಗೆ ರಾಜ್ಯ ಬಿಜೆಪಿಗರ ಹರ್ಷ

ಸಾರಾಂಶ

ದೆಹಲಿ ವಿಧಾನಸಭಾ ಚುನಾವಣೆಯ ಫಲಿತಾಂಶದಲ್ಲಿ ಬಿಜೆಪಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ನಾಯಕರು ಹರ್ಷ ವ್ಯಕ್ತಪಡಿಸಿದ್ದು, ಚುನಾವಣೆಯಲ್ಲಿ ಆಮ್‌ ಆದ್ಮಿ ಪಕ್ಷದ ಬಣ್ಣ ಬಯಲಾಗಿದೆ ಎಂದು ಟೀಕಿಸಿದ್ದಾರೆ.

ಬೆಂಗಳೂರು : ದೆಹಲಿ ವಿಧಾನಸಭಾ ಚುನಾವಣೆಯ ಫಲಿತಾಂಶದಲ್ಲಿ ಬಿಜೆಪಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ನಾಯಕರು ಹರ್ಷ ವ್ಯಕ್ತಪಡಿಸಿದ್ದು, ಚುನಾವಣೆಯಲ್ಲಿ ಆಮ್‌ ಆದ್ಮಿ ಪಕ್ಷದ ಬಣ್ಣ ಬಯಲಾಗಿದೆ ಎಂದು ಟೀಕಿಸಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನಸಭಾ ಪ್ರತಿಪಕ್ಷ ನಾಯಕ ಆರ್‌.ಅಶೋಕ್‌, ಸಂಸದ ಬಸವರಾಜ ಬೊಮ್ಮಾಯಿ, ರಾಜ್ಯ ಬಿಜೆಪಿ ಸಹ ಉಸ್ತುವಾರಿ ಸುಧಾಕರ ರೆಡ್ಡಿ ಸೇರಿ ಇತರರು ಸಂತಸ ವ್ಯಕ್ತಪಡಿಸಿದ್ದಾರೆ. ಈ ನಡುವೆ, ರಾಜ್ಯ ಬಿಜೆಪಿ ಕಚೇರಿಯಲ್ಲಿ ವಿಜಯೋತ್ಸವ ಆಚರಿಸಲಾಯಿತು.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾತನಾಡಿ, ಪ್ರಬುದ್ಧ ಮತದಾರರು ದೆಹಲಿ ಅಭಿವೃದ್ಧಿಯ ದೃಷ್ಟಿಯಿಂದ ಬಿಜೆಪಿ ಗೆಲ್ಲಿಸಿದ್ದಾರೆ. ಪ್ರಧಾನಿ ಮೋದಿ ಕೈ ಬಲಪಡಿಸಲು ಮತದಾರರು ಆಶೀರ್ವಾದ ಮಾಡಿದ್ದಾರೆ. ದೆಹಲಿಯಲ್ಲಿ 27 ವರ್ಷಗಳ ನಂತರ ಬಿಜೆಪಿಗೆ ಅಭೂತಪೂರ್ವ ಗೆಲುವು ಲಭಿಸಿದೆ ಎಂದು ಹರ್ಷ ವ್ಯಕ್ತಪಡಿಸಿದರು.

ಭ್ರಷ್ಟಾಚಾರ ವಿರುದ್ಧ ಆಂದೋಲನ ಮಾಡಿ ದೆಹಲಿಯಲ್ಲಿ ಅಧಿಕಾರಕ್ಕೆ ಬಂದಿದ್ದ ಆಮ್ ಆದ್ಮಿ ಪಕ್ಷದ ಅರವಿಂದ ಕೇಜ್ರಿವಾಲ್ ಮುಖವಾಡ ಕಳಚಿಬಿದ್ದಿದೆ. ಲಿಕ್ಕರ್ ಗೇಟ್, ಶೀಷ್ ಮಹಲ್ ಹಗರಣದಿಂದ ದೆಹಲಿಯಲ್ಲಿ ಎಎಪಿ ಬಣ್ಣ ಬಯಲಾಗಿದೆ. ದೆಹಲಿಯಲ್ಲಿ ಕಾಂಗ್ರೆಸ್ ಪಕ್ಷ ಸತತ 3ನೇ ಬಾರಿಗೆ ಶೂನ್ಯ ಸಂಪಾದನೆ ಮಾಡಿದೆ ಎಂದು ಟೀಕಾಪ್ರಹಾರ ನಡೆಸಿದರು.

ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಮಾತನಾಡಿ, 27 ವರ್ಷದ ಬಳಿಕ ರಾಷ್ಟ್ರದ ರಾಜಧಾನಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಪ್ರಧಾನಿ ಮೋದಿಯವರ ವರ್ಚಸ್ಸು ಹೆಚ್ಚಿದೆ. ಚುನಾವಣಾ ಫಲಿತಾಂಶ ಮುಂದಿನ ಕರ್ನಾಟಕ, ತೆಲಂಗಾಣ ಚುನಾವಣೆಗೆ ದಾರಿದೀಪ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಗ್ಯಾರಂಟಿ ದೆಹಲಿಯಲ್ಲಿ ಠುಸ್ ಪಟಾಕಿ ಆಗಿದೆ ಎಂದು ವ್ಯಂಗ್ಯವಾಡಿದರು.

ವಿಧಾನಪರಿಷತ್‌ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮಾತನಾಡಿ, ಅರವಿಂದ ಕೇಜ್ರಿವಾಲ್ ನೇತೃತ್ವದ ದೆಹಲಿ ಸರ್ಕಾರ ಭ್ರಷ್ಟಾಚಾರಕ್ಕೆ ಬಲಿಯಾಗಿದೆ. ಇಡೀ ದೇಶದಲ್ಲಿ ಭ್ರಷ್ಟಾಚಾರದ ವಿಚಾರದಲ್ಲಿ ಬಿಜೆಪಿ ಒಂದೇ ಒಂದು ಆಪಾದನೆಯನ್ನೂ ಹೊತ್ತಿಲ್ಲ. ಕಾಂಗ್ರೆಸ್‌ ದೆಹಲಿಯಲ್ಲಿ ಶೂನ್ಯ ಸಂಪಾದನೆ ಮಾಡಿದೆ. ಖಾತೆ ತೆರೆದಿಲ್ಲದಿದ್ದರೂ ಕ್ಯಾತೆ ತೆಗೆಯುವುದನ್ನು ಬಿಡುವುದಿಲ್ಲ ಎಂದು ಲೇವಡಿ ಮಾಡಿದರು.

ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಮಾತನಾಡಿ, 27 ವರ್ಷಗಳ ನಂತರ ದೆಹಲಿ ವಿಧಾನಸಭೆಯಲ್ಲಿ ಬಿಜೆಪಿಗೆ ಅಭೂತಪೂರ್ವ ಜಯ ಸಿಕ್ಕಿದೆ. ಮತದಾರರಿಗೆ ಮಾತ್ರವಲ್ಲದೆ, ಕಾರ್ಯಕರ್ತರ ಪಡೆಗೆ ಸ್ಫೂರ್ತಿ ನೀಡಿದಾಗ ಮಾತ್ರ ಇಂಥ ಗೆಲುವು ಸಾಧ್ಯ ಎಂದು ಅಭಿಪ್ರಾಯಪಟ್ಟರು.

ಸಂಸದ ಬಸವರಾಜ ಬೊಮ್ಮಾಯಿ ಮಾತನಾಡಿ, ಅಣ್ಣಾ ಹಜಾರೆ ನೇತೃತ್ವದ ಭ್ರಷ್ಟಾಚಾರ ವಿರೋಧಿ ಆಂದೋಲನ ಬೆಂಬಲಿಸಿ ದೆಹಲಿ ಜನ ಆಪ್‌ಗೆ ಬೆಂಬಲಿಸಿದ್ದರು. ಆದರೆ, ಅವರ ಆಡಳಿತ ವೈಖರಿ ಭ್ರಷ್ಟಾಚಾರ ನೋಡಿ ಜನ ರೋಸಿ ಹೋಗಿದ್ದಾರೆ. ಇನ್ನೊಂದೆಡೆ ದೇಶದೆಲ್ಲೆಡೆ ಪ್ರಧಾನಿ ಮೋದಿಯವರ ಅಭಿವೃದ್ಧಿ ಆಡಳಿತ ನೋಡಿ ಜನ ಬಿಜೆಪಿಗೆ ದೊಡ್ಡ ಪ್ರಮಾಣದ ಬೆಂಬಲ ನೀಡಿದ್ದಾರೆ‌. ರಾಷ್ಟ್ರೀಯತೆ ನಂಬಿರುವ ಅಲ್ಪಸಂಖ್ಯಾತರು ಬಿಜೆಪಿಗೆ ಬೆಂಬಲ ಸೂಚಿಸಿದ್ದಾರೆ ಎಂದು ಹೇಳಿದರು.

ವಿಧಾನಪರಿಷತ್‌ ಸದಸ್ಯ ರವಿಕುಮಾರ್ ಮಾತನಾಡಿ, ಭ್ರಷ್ಟಾಚಾರದ ವಿರುದ್ಧ ಹೋರಾಟ ಮಾಡುತ್ತಿದ್ದ ಅಣ್ಣಾ ಹಜಾರೆ ಆಂದೋಲನದ ಸಂಪೂರ್ಣ ಸದುಪಯೋಗ ಪಡೆದು ಕೇಜ್ರಿವಾಲ್ ಅಧಿಕಾರದ ಗದ್ದುಗೆ ಏರಿದ್ದರು. ಅವರ ಗೋಡೆ ಇದೀಗ ಬಿದ್ದು ಹೋಗಿದೆ. ಕೇಜ್ರಿವಾಲ್ ಭ್ರಷ್ಟಾಚಾರವನ್ನು ವಿರೋಧಿಸಿ ಅಧಿಕಾರಕ್ಕೆ ಬಂದಿದ್ದರು. ಆದರೆ, ಈಗ ಲಿಕ್ಕರ್ ಗೇಟ್‌ ಹಗರಣದಲ್ಲಿ ಅವರ ಪಕ್ಷ ಸೋಲನುಭವಿಸಿದೆ ಎಂದು ಹೇಳಿದರು.

ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಚಿಂತನೆಯನ್ನೇ ಧ್ಯೇಯವಾಗಿಸಿಕೊಂಡ ಪ್ರಧಾನಿ ಮೋದಿ ನಾಯಕತ್ವವನ್ನು ದೇಶ ಒಪ್ಪಿಕೊಂಡಿದೆ. ಎಎಪಿ ಪ್ರತಿ ಸಂದರ್ಭದಲ್ಲೂ ಸುಳ್ಳು ಹೇಳುತ್ತಿತ್ತು. ಮುಂದಿನ ದಿನಗಳಲ್ಲಿ ದೆಹಲಿ ಜನತೆಗೆ ಒಳಿತಾಗಲಿದೆ.

-ಸುಧಾಕರ್‌ ರೆಡ್ಡಿ, ರಾಜ್ಯ ಬಿಜೆಪಿ ಸಹ ಉಸ್ತುವಾರಿ

Share this article