ಕಾಂತರಾಜು, ಸದಾಶಿವ ಆಯೋಗ ವರದಿ ಜಾರಿಗೆ ಆಗ್ರಹ

KannadaprabhaNewsNetwork | Published : Nov 22, 2023 1:00 AM

ಸಾರಾಂಶ

ಸಾಮಾಜಿಕ ನ್ಯಾಯ ಎತ್ತಿಹಿಡಿಯುವ ಕಾಂತರಾಜು ಮತ್ತು ಸದಾಶಿವ ಆಯೋಗದ ವರದಿಯನ್ನು ವಿಧಾನಸಭೆಯಲ್ಲಿ ಮಂಡಿಸಿ, ಚರ್ಚಿಸಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕೆಂದು ಆಗ್ರಹಿಸಿ ಬಹುಜನ ಸಮಾಜ ಪಾರ್ಟಿ (ಬಿಎಸ್ಪಿ) ಕಾರ್ಯಕರ್ತರು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು. ನಗರದ ಜಿಲ್ಲಾ ಕಚೇರಿಗಳ ಸಂಕೀರ್ಣದ ಆವರಣದಲ್ಲಿ ಕಾಂತರಾಜು ಮತ್ತು ಸದಾಶಿವ ಆಯೋಗದ ವರದಿ ಜಾರಿ ಮಾಡಿ ಇಲ್ಲದಿದ್ದರೆ ಕುರ್ಚಿ ಖಾಲಿ ಮಾಡಿ ಎಂದು ಘೋಷಣೆ ಕೂಗಿದ ಪ್ರತಿಭಟನಾಕಾರರು ಅಪರ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಬಿಎಸ್ಪಿಯಿಂದ ಪ್ರತಿಭಟನೆ । ಅಪರ ಜಿಲ್ಲಾಧಿಕಾರಿಗಳ ಮೂಲಕ ಸಿಎಂಗೆ ಮನವಿಕನ್ನಡಪ್ರಭ ವಾರ್ತೆ ರಾಮನಗರ

ಸಾಮಾಜಿಕ ನ್ಯಾಯ ಎತ್ತಿಹಿಡಿಯುವ ಕಾಂತರಾಜು ಮತ್ತು ಸದಾಶಿವ ಆಯೋಗದ ವರದಿಯನ್ನು ವಿಧಾನಸಭೆಯಲ್ಲಿ ಮಂಡಿಸಿ, ಚರ್ಚಿಸಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕೆಂದು ಆಗ್ರಹಿಸಿ ಬಹುಜನ ಸಮಾಜ ಪಾರ್ಟಿ (ಬಿಎಸ್ಪಿ) ಕಾರ್ಯಕರ್ತರು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.

ನಗರದ ಜಿಲ್ಲಾ ಕಚೇರಿಗಳ ಸಂಕೀರ್ಣದ ಆವರಣದಲ್ಲಿ ಕಾಂತರಾಜು ಮತ್ತು ಸದಾಶಿವ ಆಯೋಗದ ವರದಿ ಜಾರಿ ಮಾಡಿ ಇಲ್ಲದಿದ್ದರೆ ಕುರ್ಚಿ ಖಾಲಿ ಮಾಡಿ ಎಂದು ಘೋಷಣೆ ಕೂಗಿದ ಪ್ರತಿಭಟನಾಕಾರರು ಅಪರ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಮುಸ್ಲಿಮರೂ ಸೇರಿದಂತೆ, ಶೇ.50ಕ್ಕಿಂತ ಹೆಚ್ಚಿರುವ ಓ.ಬಿ.ಸಿ.ಗಳಿಗೆ ಶೇ.24 ರಷ್ಟು ಮೀಸಲಾತಿ ನೀಡಲಾಗಿದೆ. ಇದು ಇನ್ನು ಮುಂದೆ ಇನ್ನಷ್ಟು ಕಡಿಮೆಯಾಗಲಿದೆ. ಜೊತೆಗೆ ಹಿಂದುಳಿದ ವರ್ಗಗಳ ಕೋಟಾ 2ಬಿ ಅಡಿಯಲ್ಲಿ ಮುಸ್ಲಿಂ ಸಮಾಜಕ್ಕೆ ಲಭ್ಯವಿದ್ದ ಶೇ.4 ಮೀಸಲಾತಿಯನ್ನು ಕಸಿದು ಶೇ.2 ಒಕ್ಕಲಿಗರಿಗೆ , ಶೇ.2 ಲಿಂಗಾಯಿತರಿಗೆ ಹಿಂದಿನ ಬಿಜೆಪಿ ಸರ್ಕಾರ ನೀಡಿದ್ದು, ಸಾಮಾಜಿಕ ನ್ಯಾಯದ ವಿರುದ್ಧವಾಗಿದೆ ಎಂದು ಕಿಡಿಕಾರಿದರು.

ಕೇಂದ್ರ ಸರ್ಕಾರ ಶೇ.15ರಷ್ಟಿರುವ ಬ್ರಾಹ್ಮಣ, ಕ್ಷತ್ರಿಯ ಮತ್ತು ವೈಶ್ಯ ಮೇಲ್ಜಾತಿಯವರಿಗೆ ಇತರೆ ಹೆಸರಿನಲ್ಲಿ ಸಂವಿಧಾನ ಬಾಹಿರವಾಗಿ ಶೇ.10ರಷ್ಟು ಮೀಸಲಾತಿ ನೀಡಿದೆ. ರಾಜ್ಯದಲ್ಲಿ ಕೇವಲ ಶೇ.25.5ರಷ್ಟಿರುವ ಮೇಲ್ಜಾತಿಗಳು (ಲಿಂಗಾಯತ 12%, ಒಕ್ಕಲಿಗ 10% ಮತ್ತು ಬ್ರಾಹ್ಮಣರು 3.5%) ಮಾತ್ರವೇ ನಮ್ಮ ರಾಜ್ಯದ ಮುಖ್ಯಮಂತ್ರಿಗಳಾಗಿದ್ದಾರೆ. ದೇವರಾಜ ಅರಸು, ಬಂಗಾರಪ್ಪ, ವೀರಪ್ಪ ಮೊಯ್ಲಿ ಮತ್ತು ಸಿದ್ದರಾಮಯ್ಯ ನಂತಹ ಕೆಲವು ಓಬಿಸಿಗಳೂ ಮುಖ್ಯಮಂತ್ರಿಗಳಾಗಿದ್ದಾರೆ. ಆದರೆ ರಾಜ್ಯದಲ್ಲಿ ಅತಿ ದೊಡ್ಡ ಸಂಖ್ಯೆಯಲ್ಲಿರುವ ಎಸ್ಸಿ/ಎಸ್ಟಿಗಳಾಗಲೀ , ಮುಸ್ಲಿಮರಾಗಲೀ ಇಲ್ಲಿವರೆಗೆ ಮುಖ್ಯಮಂತ್ರಿ ಸ್ಥಾನ ಅಲಂಕರಿಸಲು ಸಾಧ್ಯವಾಗಿಲ್ಲ ಎಂದು ಪ್ರತಿಭಟನಾಕಾರರು ಬೇಸರ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಬಿಎಸ್ಪಿ ಪ್ರಧಾನ ಕಾರ್ಯದರ್ಶಿ ಬಿ.ಅನ್ನದಾನಪ್ಪ , ರಾಜ್ಯ ಕಾರ್ಯದರ್ಶಿ ಎಂ.ನಾಗೇಶ್ , ಜಿಲ್ಲಾಧ್ಯಕ್ಷ ಎಂ.ಕೃಷ್ಣಪ್ಪ, ಉಪಾದ್ಯಕ್ಷ ಮಹದೇವ್ , ಪ್ರಧಾನ ಕಾರ್ಯದರ್ಶಿ ಮುರುಗೇಶ್ , ಕಾರ್ಯದರ್ಶಿ ಆರ್ .ರಮೇಶ್ , ಟಿ.ಕೃಷ್ಣಮೂರ್ತಿ, ಖಜಾಂಚಿ ಕಿರಣ್ , ಮಹಿಳಾ ಘಟಕ ಜಿಲ್ಲಾಧ್ಯಕ್ಷೆ ಗೌರಮ್ಮ, ಉಪಾಧ್ಯಕ್ಷೆ ಪಾರ್ವತಮ್ಮ, ಮುಖಂಡರಾದ ಅಶ್ವತ್ಥ್ , ಧನಂಜಯ್ಯ, ಕಾಂತರಾಜು, ಬೈರಾಜು ಮತ್ತಿತರರು ಭಾಗವಹಿಸಿದ್ದರು.

--

ಬಾಕ್ಸ್

ವರದಿ ಜಾರಿಯ ಆಶ್ವಾಸನೆ ನೀಡಿದ್ದ ಕಾಂಗ್ರೆಸ್ ಪಕ್ಷ ಮೌನವಿಧಾನಸಭಾ ಚುನಾವಣಾ ಪ್ರಣಾಳಿಕೆಯಲ್ಲಿ ಕಾಂತರಾಜ್ ಮತ್ತು ಸದಾಶಿವ ಆಯೋಗದ ವರದಿ ಜಾರಿ ಮಾಡುವುದಾಗಿ ಆಶ್ವಾಸನೆ ನೀಡಿದ್ದ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದು 6 ತಿಂಗಳು ಕಳೆದರೂ ಮೌನವಹಿಸಿದೆ ಎಂದು ಬಹುಜನ ಸಮಾಜ ಪಾರ್ಟಿ ರಾಜ್ಯ ಕಾರ್ಯದರ್ಶಿ ಎಂ. ನಾಗೇಶ್ ಕಿಡಿಕಾರಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇಲ್ಜಾತಿ ಸರ್ಕಾರಗಳು ಆಯೋಗಗಳ ಮೇಲೆ ಆಯೋಗಗಳನ್ನು ರಚಿಸುತ್ತಾ, ಸಾರ್ವಜನಿಕರ ಹಣವನ್ನು ಪೋಲು ಮಾಡುತ್ತಾ ಅತಿ ಹಿಂದುಳಿದ ನೂರಾರು ಜಾತಿಗಳನ್ನು ಕಳೆದ 75 ವರ್ಷಗಳಿಂದ ವಂಚಿಸಿ ಮಂಗ ಮಾಡುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರ ಮತ್ತೆ ಅದನ್ನೇ ಮುಂದುವರೆಸಿದೆ ಎಂದರು. ಲಿಂಗಾಯತ-ಒಕ್ಕಲಿಗ ಸ್ವಾಮೀಜಿಗಳು ಮತ್ತು ರಾಜಕಾರಣಿಗಳು ಕಾಂತರಾಜ್ ವರದಿಯನ್ನು ಜಾರಿ ಮಾಡದಿರುವಂತೆ ಸರ್ಕಾರದ ಮೇಲೆ ಒತ್ತಡ ಹಾಕುತ್ತಿದ್ದಾರೆ. ಕೆಲವು ಐತಿಹಾಸಿಕ ಕಾರಣಗಳಿಂದ ನಮ್ಮ ಸಮಾಜಕ್ಕೆ ಶಿಕ್ಷಣ, ಸರ್ಕಾರಿ ಸೇವೆ ಮತ್ತು ರಾಜಕೀಯ ಮತ್ತಿತರರ ಎಲ್ಲಾ ರಂಗಗಳಲ್ಲಿ ಸೂಕ್ತ ಪ್ರಾತಿನಿಧ್ಯ ಇಲ್ಲದೆ ತೀರ ಹಿಂದುಳಿದಿವೆ. ಇದೂವರೆಗೂ ಸದಾಶಿವ ಆಯೋಗದ ವರದಿಯನ್ನು ಸರ್ಕಾರಗಳು ಗಂಭೀರವಾಗಿ ಪರಿಗಣಿಸಲೇ ಇಲ್ಲ ಎಂದು ನಾಗೇಶ್ ಟೀಕಿಸಿದರು.

--------------------------

21ಕೆಆರ್ ಎಂಎನ್‌ 2.ಜೆಪಿಜಿ

ರಾಮನಗರ ಜಿಲ್ಲಾ ಕಚೇರಿಗಳ ಸಂಕೀರ್ಣದ ಆವರಣದಲ್ಲಿ ಬಹುಜನ ಸಮಾಜ ಪಾರ್ಟಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

Share this article