ಹೊಳೆನರಸೀಪುರ/ಹಿರಿಯೂರು : ಮಹಿಳೆ ಮೇಲಿನ ಅತ್ಯಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಅವರನ್ನು ಹೊಳೆನರಸೀಪುರ ಪೊಲೀಸರು ಶನಿವಾರ ಬಂಧಿಸಿದ್ದು, ಸ್ಥಳೀಯ ಜೆಎಂಎಫ್‌ಸಿ ನ್ಯಾಯಾಧೀಶರ ಎದುರು ಹಾಜರುಪಡಿಸಿದ್ದಾರೆ.
ನ್ಯಾಯಾಧೀಶರು ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳಿರುವ ಪೆನ್‌ಡ್ರೈವ್ ಬಹಿರಂಗಪಡಿಸಿದ ಆರೋಪ ಎದುರಿಸುತ್ತಿರುವ ದೇವರಾಜೇಗೌಡರ ವಿರುದ್ಧ ಸಂತ್ರಸ್ತ ಮಹಿಳೆಯೊಬ್ಬಳು ಏ.1ರಂದು ಲೈಂಗಿಕ ಕಿರುಕುಳದ ಆರೋಪ ಹೊರಿಸಿ, ಹೊಳೆನರಸೀಪುರ ನಗರ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಳೆನರಸೀಪುರ ಪೊಲೀಸರ ಸೂಚನೆ ಮೇರೆಗೆ ಶುಕ್ರವಾರ ರಾತ್ರಿ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಕೆಆರ್ ಹಳ್ಳಿ ಗೇಟ್ ಬಳಿ ಹಿರಿಯೂರು ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದರು.
ಬಳಿಕ, ಅವರನ್ನು ಹೊಳೆನರಸೀಪುರಕ್ಕೆ ಕರೆತರಲಾಗಿತ್ತು. ಶನಿವಾರ ಬೆಳಗ್ಗೆ ಹೊಳೆನರಸೀಪುರ ಗ್ರಾಮಾಂತರ ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಸತತ 4 ಗಂಟೆ ಅವರ ವಿಚಾರಣೆ ನಡೆಸಲಾಯಿತು. ವಿಚಾರಣೆ ವೇಳೆ ಪ್ರಶ್ನೆಗೆ ಮರುಪ್ರಶ್ನೆ ಹಾಕಿದ ದೇವರಾಜೇಗೌಡ, ‘ನಾನು ಈ ಮೊದಲೇ ನನ್ನ ಮೇಲೆ ಹನಿಟ್ರಾಪ್ ಮಾಡಲಾಗಿದೆ ಎಂದು ಬೆಂಗಳೂರಿನಲ್ಲಿ ದೂರು ನೀಡಿದ್ದೇನೆ’ ಎಂದು ಸಮರ್ಥಿಸಿಕೊಂಡರು ಎಂದು ಮೂಲಗಳು ತಿಳಿಸಿವೆ.
ಕಾರಿನಲ್ಲೂ ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದರು ಎಂದು ಸಂತ್ರಸ್ತ ಮಹಿಳೆ ದೂರು ದಾಖಲಿಸಿದ್ದ ಹಿನ್ನೆಲೆಯಲ್ಲಿ ಪೊಲೀಸರು ದೇವರಾಜೇಗೌಡರ ಕಾರಿನ ಪಂಚನಾಮೆ ನಡೆಸಿ, ಕಾರು, ಕಾರಿನಲ್ಲಿದ್ದ ಬ್ಯಾಗ್ ಮತ್ತು ಮೊಬೈಲ್ ಗಳನ್ನು ವಶಪಡಿಸಿಕೊಂಡರು. ಈ ಮಧ್ಯೆ, ಸಂತ್ರಸ್ತ ಮಹಿಳೆಯ ಮರು ಹೇಳಿಕೆ ಪಡೆದು, ದೇವರಾಜೇಗೌಡರ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿ, ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಿ, ಜೆಎಂಎಫ್‌ಸಿ ನ್ಯಾಯಾಧೀಶರ ಎದುರು ಹಾಜರುಪಡಿಸಲಾಯಿತು. ನ್ಯಾಯಾಧೀಶರು ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಮೊಬೈಲ್‌ನಲ್ಲಿ ಆಡಿಯೋ ಅಪ್‌ಲೋಡ್ ಮಾಡಿ ಲಾಕ್ ಆದ ದೇವರಾಜೇಗೌಡ ಬಿಜೆಪಿ ಮುಖಂಡ ಶಿವರಾಮೇಗೌಡ, ಸಂತ್ರಸ್ತೆಯ ಪತಿ ಜೊತೆ ಮಾತಾಡಿದ ಆಡಿಯೋವನ್ನು ದೇವರಾಜೇಗೌಡ ಅವರು ಸಾಮಾಜಿಕ ಜಾಲತಾಣಗಳಲ್ಲಿ ಅಪ್‌ಲೋಡ್ ಮಾಡಿದ್ದರು. ಇದರ ಆಧಾರದ ಮೇಲೆ ಅವರ ಮೊಬೈಲ್ ಲೊಕೇಷನ್ ಟ್ರ್ಯಾಕ್ ಮಾಡುತ್ತಿದ್ದ ಹೊಳೆನರಸೀಪುರ ಪೊಲೀಸರು ಅವರ ಚಲನವಲನಗಳ ಮೇಲೆ ನಿಗಾ ಇಟ್ಟಿದ್ದರು. ಈ ಮಧ್ಯೆ, ಶುಕ್ರವಾರ ಅವರು ಬೆಂಗಳೂರಿನಿಂದ ಗೋವಾಕ್ಕೆ ಹೊರಟಿದ್ದಾಗ, ಹಿರಿಯೂರು ಬಳಿ ಅವರನ್ನು ವಶಕ್ಕೆ ಪಡೆಯಲಾಯಿತು ಎಂದು ಪೊಲೀಸ್ ಮೂಲಗಳು ತಿಳಿಸಿವೆ.