ಬೆಂಗಳೂರು : ‘ಚಾಮುಂಡಿ ಬೆಟ್ಟ ಹಿಂದೂಗಳ ಆಸ್ತಿಯಲ್ಲ’ ಎನ್ನುವ ಮೂಲಕ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹಿಂದೂಗಳಿಗೆ ಅಪಮಾನ ಮಾಡಿದ್ದಾರೆ. ಹೀಗಾಗಿ ಶಿವಕುಮಾರ್ ತಮ್ಮ ಹೇಳಿಕೆಯನ್ನು ತಕ್ಷಣ ಹಿಂಪಡೆಯಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಒತ್ತಾಯಿಸಿದ್ದಾರೆ.
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಶಿವಕುಮಾರ್ ಅವರು ಯಾರನ್ನೋ ಸಂತಸಪಡಿಸಲು ಹಾಗೂ ಗಾಂಧಿ ಕುಟುಂಬವನ್ನು ಖುಷಿಪಡಿಸಲು ಈ ರೀತಿ ಹಿಂದೂಗಳಿಗೆ ಅಪಮಾನ ಮಾಡಿರುವುದನ್ನು ಹಿಂದೂ ಸಮಾಜ ಒಪ್ಪಲು ಸಾಧ್ಯವಿಲ್ಲ ಎಂದು ಎಚ್ಚರಿಸಿದರು.
ದಸರಾ ಉತ್ಸವ, ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮೀಯರೂ ಭೇಟಿ ಕೊಡುತ್ತಾರೆ ಎಂಬುದು ನಮಗೂ ಗೊತ್ತಿದೆ. ಆದರೆ, ಇವು ಹಿಂದೂಗಳಿಗೆ ಸಂಬಂಧಿಸಿದ್ದಲ್ಲ ಎಂಬ ಹೇಳಿಕೆ ಹಿಂದೂಗಳಿಗೆ ಮಾಡಿದ ಅಪಮಾನ; ಇದು ಅಕ್ಷಮ್ಯ ಎಂದರು.
ಕಾಂಗ್ರೆಸ್ ಹೈಕಮಾಂಡಿನದು ಒಡೆದಾಳುವ ನೀತಿಯ ಸಂಸ್ಕೃತಿ. ಹಾಗಾಗಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗ ಪದೇ ಪದೇ ಹಿಂದುಗಳಿಗೆ ಅಪಮಾನ, ಹಿಂದು ಕಾರ್ಯಕರ್ತರಿಗೆ ಅವಮಾನ ಆಗುತ್ತದೆ. ಅವರು ನಮ್ಮ ಪರಂಪರೆಗೆ ಧಕ್ಕೆ ಬರುವಂತೆ ನಡೆದುಕೊಳ್ಳುತ್ತಿದ್ದಾರೆ. ಶ್ರೀ ಕ್ಷೇತ್ರ ಧರ್ಮಸ್ಥಳದ ವಿಷಯದಲ್ಲಿ ಅಷ್ಟೆಲ್ಲ ಅಪಪ್ರಚಾರ ನಡೆಯುತ್ತಿದ್ದರೂ ಬಾಯ್ಮುಚ್ಚಿಸುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ ಮಾಡಲಿಲ್ಲ ಎಂದು ಆಕ್ಷೇಪಿಸಿದರು.
ಶಿವಕುಮಾರ್ ಅವರು ಮುಖ್ಯಮಂತ್ರಿ ಆಗುವ ಕನಸು ಕಾಣುತ್ತಿದ್ದು, ಆ ಕನಸು ನನಸಾಗಲಿ ಎಂಬ ದೃಷ್ಟಿಯಿಂದ ಗಾಂಧಿ ಕುಟುಂಬವನ್ನು ಖುಷಿಪಡಿಸಲು ಇಂಥ ಹೇಳಿಕೆ ನೀಡುತ್ತಿದ್ದಾರೆ. ಇದೇ ಶಿವಕುಮಾರ್ ಅವರು ಗಾಂಧಿ ಕುಟುಂಬವನ್ನು ಖುಷಿಪಡಿಸಲು ರಾಮನಗರದಲ್ಲಿ ಏಸುಕ್ರಿಸ್ತನ 115 ಅಡಿ ಪ್ರತಿಮೆ ಸ್ಥಾಪಿಸಲು ಮುಂದಾಗಿದ್ದರು. ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಏನು ಬೇಕಾದರೂ ಹೇಳುತ್ತೇವೆ; ಏನು ಬೇಕಾದರೂ ಮಾತನಾಡುತ್ತೇವೆ ಎಂಬ ನಿಮ್ಮ ಧೋರಣೆ ಸರಿಯಲ್ಲ. ಭಗವಂತನೂ ಖಂಡಿತವಾಗಿ ನಿಮ್ಮನ್ನು ಕ್ಷಮಿಸುವುದಿಲ್ಲ ಎಂದು ವಿಜಯೇಂದ್ರ ತೀಕ್ಷ್ಣವಾಗಿ ಹೇಳಿದರು.