ಒತ್ತುವರಿ : ನೋಟಿಸ್‌ ಪ್ರಶ್ನಿಸಿ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೈಕೋರ್ಟ್‌ಗೆ ಅರ್ಜಿ

Published : Mar 25, 2025, 11:04 AM IST
HD Kumaraswamy

ಸಾರಾಂಶ

ರಾಮನಗರ ಜಿಲ್ಲೆಯ ಕೇತಗಾನಹಳ್ಳಿ ಬಳಿ ಆರು ಎಕರೆ ಸರ್ಕಾರಿ ಜಮೀನು ಒತ್ತುವರಿ ಆರೋಪ ಸಂಬಂಧ ಸ್ಥಳೀಯ ತಹಶೀಲ್ದಾರ್‌ ನೀಡಿರುವ ನೋಟಿಸ್‌ ಪ್ರಶ್ನಿಸಿ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ

 ಬೆಂಗಳೂರು: ರಾಮನಗರ ಜಿಲ್ಲೆಯ ಕೇತಗಾನಹಳ್ಳಿ ಬಳಿ ಆರು ಎಕರೆ ಸರ್ಕಾರಿ ಜಮೀನು ಒತ್ತುವರಿ ಆರೋಪ ಸಂಬಂಧ ಸ್ಥಳೀಯ ತಹಶೀಲ್ದಾರ್‌ ನೀಡಿರುವ ನೋಟಿಸ್‌ ಪ್ರಶ್ನಿಸಿ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಕುರಿತು ಕುಮಾರಸ್ವಾಮಿ ಅವರು ಸಲ್ಲಿಸಿರುವ ತಕರಾರು ಅರ್ಜಿಯಲ್ಲಿ ಅಧಿಕಾರ ವ್ಯಾಪ್ತಿ ಇಲ್ಲದಿದ್ದರೂ ರಾಮನಗರ ತಹಶೀಲ್ದಾರ್‌ ತಮಗೆ ಮಾ.20ರಂದು ನೀಡಿರುವ ನೋಟಿಸ್‌ ರದ್ದುಪಡಿಸಬೇಕು ಎಂದು ಕೋರಿದ್ದಾರೆ.

ಸೋಮವಾರ ಈ ಅರ್ಜಿ ನ್ಯಾಯಮೂರ್ತಿ ಎನ್‌.ಎಸ್‌.ಸಂಜಯಗೌಡ ಅವರ ಏಕಸದಸ್ಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು. ಕುಮಾರಸ್ವಾಮಿ ಅವರ ಪರ ಹಿರಿಯ ವಕೀಲ ಉದಯ ಹೊಳ್ಳ ಅವರು, 1985ರಲ್ಲಿಯೇ ಕ್ರಯಪತ್ರವಾಗಿರುವ ಜಮೀನಿಗೆ ಈಗ ನೋಟಿಸ್‌ ನೀಡಲಾಗಿದೆ. ಅಧಿಕಾರ ವ್ಯಾಪ್ತಿ ಇಲ್ಲದಿದ್ದರೂ ತಹಶೀಲ್ದಾರ್‌ ನೋಟಿಸ್‌ ನೀಡಿದ್ದಾರೆ. ಇದೇ ವಿಚಾರವಾಗಿ ನ್ಯಾಯಾಂಗ ನಿಂದನೆ ಅರ್ಜಿ ಕುರಿತು ಕರ್ನಾಟಕ ಹೈಕೋರ್ಟ್‌ ನೀಡಿರುವ ಆದೇಶವನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲಾಗಿದೆ. ಹಾಗಾಗಿ, ತಹಶೀಲ್ದಾರ್‌ ನೋಟಿಸ್‌ಗೆ ತಡೆ ನೀಡಬೇಕು ಎಂದು ಕೋರಿದರು.

ಈ ಮನವಿಯನ್ನು ಬಲವಾಗಿ ಆಕ್ಷೇಪಿಸಿದ ಸರ್ಕಾರದ ಹೆಚ್ಚುವರಿ ಅಡ್ವೋಕೇಟ್ ಜನರಲ್‌ ಕಿರಣ್‌ ರೋಣ್‌, ಸರ್ಕಾರಿ ಜಮೀನು ಒತ್ತುವರಿ ಕುರಿತಂತೆ ಒತ್ತುವರಿದಾರರಿಗೆ ನೋಟಿಸ್‌ ನೀಡುವ ಅಧಿಕಾರ ತಹಶೀಲ್ದಾರ್‌ ಹೊಂದಿದ್ದಾರೆ. ಆ ಕುರಿತು ತಿದ್ದುಪಡಿ ನಿಯಮ ಜಾರಿಗೆ ತರಲಾಗಿದೆ. ಅದರಂತೆಯೇ ನೋಟಿಸ್‌ ಜಾರಿಗೊಳಿಸಲಾಗಿದೆ. ಪ್ರಕರಣ ಕುರಿತಂತೆ ದಾಖಲೆ ಸಲ್ಲಿಸಲು ಕಾಲಾವಕಾಶ ಕೋರಿದರು ಎಂದರು.

ಕುಮಾರಸ್ವಾಮಿ ಪರ ವಕೀಲರು, ತಹಶೀಲ್ದಾರ್‌ ನೋಟಿಸ್‌ ಆಧರಿಸಿ ಅರ್ಜಿದಾರರ ವಿರುದ್ಧ ಬಲವಂತದ ಕ್ರಮ ಜರುಗಿಸುವ ಸಾಧ್ಯತೆ ಇದೆ. ಹಾಗಾಗಿ ಮಧ್ಯಂತರ ರಕ್ಷಣೆ ನೀಡಬೇಕು ಎಂದು ಕೋರಿದರು. ಅದಕ್ಕೆ ಎಎಜಿ, ಮಾ.27ರವರೆಗೂ ಅರ್ಜಿದಾರರ ವಿರುದ್ದ ಯಾವುದೇ ವಿಧವಾದ ಬಲವಂತದ ಕ್ರಮ ಕೈಗೊಳ್ಳುವುದಿಲ್ಲ ಎಂದು ಭರವಸೆ ನೀಡಿದರು. ಈ ಹೇಳಿಕೆ ದಾಖಲಿಸಿಕೊಂಡ ನ್ಯಾಯಾಲಯ ಅರ್ಜಿ ವಿಚಾರಣೆಯನ್ನು ಮಾ.27ಕ್ಕೆ ನಿಗದಿಪಡಿಸಿತು.

ಪ್ರಕರಣದ ಹಿನ್ನೆಲೆ: ಎಚ್‌.ಡಿ.ಕುಮಾರಸ್ವಾಮಿ ಮತ್ತು ಅವರ ಸಂಬಂಧಿ ಡಿ.ಸಿ.ತಮ್ಮಣ್ಣ ಮತ್ತಿತರರು ಕೇತಗಾನಹಳ್ಳಿಯಲ್ಲಿ14 ಎಕರೆ ಭೂಮಿ ಒತ್ತುವರಿ ಮಾಡಿದ್ದಾರೆಂಬ ಆರೋಪವಿದೆ. ಒತ್ತುವರಿ ತೆರವು ಕುರಿತು ಲೋಕಾಯುಕ್ತ ನೀಡಿದ್ದ ವರದಿ ಜಾರಿಗೊಳಿಸಲು ಹೈಕೋರ್ಟ್‌ ಆದೇಶ ನೀಡಿದೆ. ಆ ಆದೇಶ ಸರ್ಕಾರ ಪಾಲಿಸಿಲ್ಲ ಎಂದು ಆಕ್ಷೇಪಿಸಿ ಸಮಾಜ ಪರಿವರ್ತನಾ ಸಮುದಾಯ ಹೈಕೋರ್ಟ್‌ಗೆ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿತ್ತು.

ಅದರ ವಿಚಾರಣೆ ನಡೆಸಿದ್ದ ಹೈಕೋರ್ಟ್‌ ವಿಭಾಗೀಯ ಪೀಠ, ಭೂಮಿ ಒತ್ತುವರಿ ತೆರವಿಗೆ ಕ್ರಮ ಕೈಗೊಳ್ಳದ ಅಧಿಕಾರಿಗಳನ್ನು ಜೈಲಿಗೆ ಕಳುಹಿಸುವುದಾಗಿ ಎಚ್ಚರಿಕೆ ನೀಡಿತ್ತು. ನಂತರ ಜಮೀನಿನ ಸರ್ವೇ ಕಾರ್ಯ ನಡೆಸಿದ ಸ್ಥಳೀಯ ತಹಶೀಲ್ದಾರ್‌, ಕುಮಾರಸ್ವಾಮಿ ಸೇರಿ ಮತ್ತಿತರರಿಗೆ ನೋಟಿಸ್‌ ಜಾರಿಗೊಳಿಸಿದ್ದರು. ಅದನ್ನು ಪ್ರಶ್ನಿಸಿ ಎಚ್.ಡಿ. ಕುಮಾರಸ್ವಾಮಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. 

PREV

Recommended Stories

ಭಯಪಟ್ಟು ಮಾಡಿರುವ ಪಾತ್ರ ನನ್ನದು : ಪ್ರಜ್ವಲ್ ದೇವರಾಜ್
ಸ್ಪೀಕರ್ ವಿರುದ್ಧ ಹೊರಟ್ಟಿ ಸಿಟ್ಟು : ಅಸಮಾಧಾನಕ್ಕೆ ಪತ್ರದಲ್ಲಿ ಖಾದರ್‌ ಸ್ಪಷ್ಟನೆ