ಕೆಪಿಸಿಸಿ ಅಧ್ಯಕ್ಷರಾಗಿ ಜು.2ಕ್ಕೆ ಐದು ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರು ಮಾ.13 ರಂದು ಕಾಂಗ್ರೆಸ್‌ನ ಎಲ್ಲಾ ಶಾಸಕರಿಗೂ ಮೂರೂವರೆ ತಿಂಗಳು ಮೊದಲೇ ಔತಣಕೂಟ ಏರ್ಪಡಿಸಿದ್ದಾರೆ.
ಬೆಂಗಳೂರು : ಕೆಪಿಸಿಸಿ ಅಧ್ಯಕ್ಷರಾಗಿ ಜು.2ಕ್ಕೆ ಐದು ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರು ಮಾ.13 ರಂದು ಕಾಂಗ್ರೆಸ್‌ನ ಎಲ್ಲಾ ಶಾಸಕರಿಗೂ ಮೂರೂವರೆ ತಿಂಗಳು ಮೊದಲೇ ಔತಣಕೂಟ ಏರ್ಪಡಿಸಿದ್ದಾರೆ.
ಖಾಸಗಿ ಹೋಟೆಲ್‌ನಲ್ಲಿ ಗುರುವಾರ ಔತಣಕೂಟ ಏರ್ಪಡಿಸಲಾಗಿದೆ. ಕಳೆದ ಕೆಲ ದಿನಗಳ ಹಿಂದೆ ರಾಜ್ಯ ಕಾಂಗ್ರೆಸ್‌ನಲ್ಲಿ ಭೋಜನಕೂಟಗಳು ತೀವ್ರ ಸದ್ದು ಮಾಡಿದ್ದವು. ಇದೀಗ ಡಿ.ಕೆ.ಶಿವಕುಮಾರ್ ಅವರೇ ಔತಣಕೂಟ ನೀಡುತ್ತಿರುವುದು ಕುತೂಹಲ ಮೂಡಿಸಿದೆ.
ಡಿ.ಕೆ.ಶಿವಕುಮಾರ್ ಅವರು 2020ರ ಜು.2 ರಂದು ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರವಹಿಸಿಕೊಂಡರು. 2023ರ ಮೇ ತಿಂಗಳಲ್ಲಿ ಉಪಮುಖ್ಯಮಂತ್ರಿ ಆಗಿ ಪ್ರಮಾಣವಚನ ಸ್ವೀಕರಿಸಿದರು. ಉಪಮುಖ್ಯಮಂತ್ರಿ ಹುದ್ದೆ ಘೋಷಣೆ ವೇಳೆಯೇ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರು ಲೋಕಸಭೆ ಚುನಾವಣೆವರೆಗೆ ಡಿ.ಕೆ.ಶಿವಕುಮಾರ್ ಅವರೇ ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರೆಯುತ್ತಾರೆ ಎಂದು ಹೇಳಿದ್ದರು.
ಲೋಕಸಭೆ ಚುನಾವಣೆ ಬಳಿಕವೂ ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರೆದ ಹಿನ್ನೆಲೆಯಲ್ಲಿ ಕೆಲ ಕಾಂಗ್ರೆಸ್ ಸಚಿವರು ರಾಯಪುರ ಅಧಿವೇಶನದ ನಿರ್ಧಾರದಂತೆ ಒಬ್ಬರಿಗೆ ಒಂದೇ ಹುದ್ದೆ. ಹೀಗಾಗಿ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾಗಬೇಕು ಎಂದು ಬಹಿರಂಗವಾಗಿಯೇ ಒತ್ತಾಯಿಸಿದ್ದರು. ಹಲವು ಅಡೆತಡೆಗಳ ನಡುವೆಯೂ ಶಿವಕುಮಾರ್ ಅವರ ಅಧಿಕಾರಾವಧಿ ಐದು ವರ್ಷ ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಭೋಜನಕೂಟ ಏರ್ಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕೆಲ ದಿನಗಳ ಹಿಂದೆ ಕಾಂಗ್ರೆಸ್‌ನಲ್ಲಿ ಸಚಿವರು ಪೈಪೋಟಿ ಮೇಲೆ ಔತಣಕೂಟ ಏರ್ಪಡಿಸಿದ್ದು ವಿವಾದವಾಗಿತ್ತು. ಡಿ.ಕೆ. ಶಿವಕುಮಾರ್ ಅನುಪಸ್ಥಿತಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೂ ಒಳಗೊಂಡಂತೆ ಸಚಿವ ಸತೀಶ್ ಜಾರಕಿಹೊಳಿ ಏರ್ಪಡಿಸಿದ್ದ ಔತಣಕೂಟ ತೀವ್ರ ಸಂಚಲನ ಮೂಡಿಸಿತ್ತು. ಇದರ ಬೆನ್ನಲ್ಲೇ ಒಕ್ಕಲಿಗ ಶಾಸಕರೂ ಪ್ರತ್ಯೇಕ ಔತಣಕೂಟ ನಡೆಸಿದ್ದರು. ಡಾ.ಜಿ.ಪರಮೇಶ್ವರ್, ಡಾ.ಎಚ್.ಸಿ.ಮಹದೇವಪ್ಪ ಅವರು ದಲಿತ ಶಾಸಕರ ಔತಣಕ್ಕೆ ಸಿದ್ಧತೆ ನಡೆಸಿದ್ದಾಗ ಹೈಕಮಾಂಡ್ ಬ್ರೇಕ್ ಹಾಕಿತ್ತು.