ಎಚ್‌ಡಿಕೆ ಕೇಸರಿ ಶಾಲು ಧರಿಸಿದ್ದಕ್ಕೆ ತಂದೆ ದೇವೇಗೌಡರಿಂದ್ಲೇ ವಿರೋಧ

KannadaprabhaNewsNetwork | Updated : Feb 03 2024, 07:39 AM IST

ಸಾರಾಂಶ

ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಕೇಸರಿ ಶಾಲು ಧರಿಸಿದ್ದಕ್ಕೆ ಮಾಜಿ ಪ್ರಧಾನಿ, ಜೆಡಿಎಸ್‌ ವರಿಷ್ಠ ಎಚ್‌.ಡಿ.ಕುಮಾರಸ್ವಾಮಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಕನ್ನಡಪ್ರಭ ವಾರ್ತೆ ನವದೆಹಲಿ

ಮಂಡ್ಯದ ಕೆರಗೋಡಲ್ಲಿ ಹನುಮಧ್ವಜ ತೆರವು ವಿರೋಧಿಸಿ ನಡೆದ ಪ್ರತಿಭಟನೆ ವೇಳೆ ಬಿಜೆಪಿ ನಾಯಕರ ಜತೆಗೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಕೇಸರಿ ಶಾಲು ಧರಿಸಿದ್ದಕ್ಕೆ ಮಾಜಿ ಪ್ರಧಾನಿ, ಜೆಡಿಎಸ್‌ ವರಿಷ್ಠ ಎಚ್‌.ಡಿ.ಕುಮಾರಸ್ವಾಮಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. 

ಬಿಜೆಪಿ ಜತೆಗೆ ಮೈತ್ರಿ ಮಾಡಿಕೊಂಡಿದ್ದರೂ ಅವರ ಜತೆಗಿದ್ದಾಗ ನಾವು ನಮ್ಮ ಪಕ್ಷದ ಶಾಲೇ ಹಾಕಿಕೊಳ್ಳಬೇಕು ಎಂದು ತಿಳಿಸಿದ್ದಾರೆ.ಕೆರಗೋಡು ಪ್ರತಿಭಟನೆ ವೇಳೆ ಕುಮಾರಸ್ವಾಮಿ ಅವರು ಕೇಸರಿ ಶಾಲು ಧರಿಸಿದ ವಿಚಾರಕ್ಕೆ ಸಂಬಂಧಿಸಿ ಸುದ್ದಿಗಾರರ ಪ್ರಶ್ನೆಗೆ ಶುಕ್ರವಾರ ಪ್ರತಿಕ್ರಿಯಿಸಿದ ಅವರು, ಅಂಥ ಪ್ರಸಂಗಗಳಲ್ಲಿ ಅವರು ಜೆಡಿಎಸ್‌ ಶಾಲನ್ನೇ ಧರಿಸಬೇಕು. 

ಆದರೆ ಅಂದು ಅವರು ಕೇಸರಿ ಶಾಲು ಧರಿಸಿದ್ದನ್ನೇ ಮುಂದಿಟ್ಟುಕೊಂಡು ಜೆಡಿಎಸ್‌ ಪಕ್ಷ ಬಿಜೆಪಿ ಜತೆಗೆ ವಿಲೀನವಾಗಿದೆ ಎಂಬ ರೀತಿಯಲ್ಲಿ ವಿಶ್ಲೇಷಣೆ ಮಾಡುವುದು ಸರಿಯಲ್ಲ ಎಂದು ಹೇಳಿದರು.

ಒಂದು ವೇಳೆ ನಾಳೆ ಪ್ರಧಾನಿ ಮೋದಿ ಅವರ ಜತೆಗೆ ವೇದಿಕೆ ಹಂಚಿಕೊಳ್ಳುವಂತೆ ಕರೆದರೂ ನಾನು ನನ್ನ ಪಕ್ಷದ ಶಾಲು ಹಾಕಿಕೊಂಡೇ ಹೋಗುತ್ತೇನೆ ಎಂದು ಇದೇ ವೇಳೆ ಸ್ಪಷ್ಟಪಡಿಸಿದರು.

ಕೆರಗೋಡಲ್ಲಿ ಹನುಮಧ್ವಜ ತೆರವು ಘಟನೆ ವಿರೋಧಿಸಿ ಇತ್ತೀಚೆಗೆ ಮಂಡ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್‌ ಜಂಟಿಯಾಗಿ ನಡೆಸಿದ ಪ್ರತಿಭಟನೆ ವೇಳೆ ಕುಮಾರಸ್ವಾಮಿ ಅವರು ಕೇಸರಿ ಶಾಲು ಧರಿಸಿದ್ದು, ಕಾಂಗ್ರೆಸ್‌ನಿಂದ ತೀವ್ರ ಟೀಕೆಗೆ ಗುರಿಯಾಗಿತ್ತು.

Share this article