ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ತನಿಖೆಗೆ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷಗಳಾದ ಬಿಜೆಪಿ-ಜೆಡಿಎಸ್ ಬೀದಿಗಿಳಿದು ಆಗ್ರಹಿಸಿವೆ.
ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ತನಿಖೆಗೆ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷಗಳಾದ ಬಿಜೆಪಿ-ಜೆಡಿಎಸ್ ಬೀದಿಗಿಳಿದು ಆಗ್ರಹಿಸಿವೆ.
ಇತ್ತೀಚೆಗಷ್ಟೇ ಮುಡಾ ಹಗರಣ ಸಂಬಂಧ ರಾಜ್ಯ ಸರ್ಕಾರದ ವಿರುದ್ಧ ಬೆಂಗಳೂರಿನಿಂದ ಮೈಸೂರಿನವರೆಗೆ ಪಾದಯಾತ್ರೆ ನಡೆಸುವ ಮೂಲಕ ಪ್ರತಿಭಟನೆ ನಡೆಸಿದ್ದ ಉಭಯ ಪಕ್ಷಗಳು ಇದೀಗ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಒತ್ತಾಯಿಸಿ ಜಂಟಿ ಪ್ರತಿಭಟನೆ ನಡೆಸಿವೆ.
ಸೋಮವಾರ ವಿಧಾನಸೌಧ ಮತ್ತು ವಿಕಾಸಸೌಧ ನಡುವೆ ಇರುವ ಗಾಂಧಿ ಪ್ರತಿಮೆ ಮುಂಭಾಗದಲ್ಲಿ ಉಭಯ ಪಕ್ಷಗಳ ನಾಯಕರು ಧರಣಿ ನಡೆಸಿ, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗಿದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ವಿಧಾನಸಭೆ ಉಪನಾಯಕ ಅರವಿಂದ್ ಬೆಲ್ಲದ್, ವಿಧಾನ ಪರಿಷತ್‌ನ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ, ಮಾಜಿ ಸಚಿವರಾದ ಸುನೀಲ್ ಕುಮಾರ್, ಎಂ.ಟಿ.ಬಿ. ನಾಗರಾಜ್, ಆರಗ ಜ್ಞಾನೇಂದ್ರ, ಮುನಿರತ್ನ, ಜೆಡಿಎಸ್ ಮುಖಂಡರಾದ ಕೃಷ್ಣಾರೆಡ್ಡಿ, ವೆಂಕಟರಾವ್ ನಾಡಗೌಡ, ಪರಿಷತ್ ಸದಸ್ಯ ಟಿ.ಎ. ಶರವಣ ಸೇರಿದಂತೆ ಹಲವು ನಾಯಕರು ಭಾಗವಹಿಸಿದ್ದರು.
ಮತ್ತೊಬ್ಬರ ನೈತಿಕತೆ ಬಗ್ಗೆ ಮಾತನಾಡುವ ಸಿದ್ದರಾಮಯ್ಯ ಅವರು ತಾವು ಮೊದಲು ರಾಜೀನಾಮೆ ನೀಡಿ ನೈತಿಕತೆ ಉಳಿಸಿಕೊಳ್ಳಬೇಕು. ರಾಜ್ಯಪಾಲರು ತಮಗಿರುವ ವಿವೇಚನಾಧಿಕಾರದಡಿ ಅಭಿಯೋಜನೆ ನೀಡಿದ್ದಾರೆ. ಈ ಹಿಂದೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಮಾಜಿ ರಾಜ್ಯಪಾಲ ಎಚ್.ಆರ್.ಭಾರದ್ವಾಜ್ ಅವರು ಅಭಿಯೋಜನೆ ನೀಡಿದಾಗ ರಾಜಭವನ ಪವಿತ್ರವಾಗಿತ್ತೆ ಎಂದು ಕಿಡಿಕಾರಿದರು.
ವಿಧಾನಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮಾತನಾಡಿ, ಸಂವಿಧಾನ ಹುದ್ದೆಯಾದ ರಾಜ್ಯಪಾಲರಿಗೆ ಅವಮಾನ ಮಾಡಿದರೆ, ಅದು ಸಂವಿಧಾನಕ್ಕೆ ಮಾಡಿದ ಅವಮಾನ. ದಲಿತರನ್ನು ಸಿದ್ದರಾಮಯ್ಯನವರು ಸಂಪೂರ್ಣ ನಾಶ ಮಾಡಿದ್ದಾರೆ. ಅವರನ್ನು ನಂಬಿದ ದಲಿತರ ಚರ್ಮ ಸುಲಿದು ಚಪ್ಪಲಿ ಮಾಡಿದ್ದಾರೆ. ಕಪ್ಪಗಿನ ಕಾಗೆಯಂತಿರುವ ಮುಖ್ಯಮಂತ್ರಿಗಳಲ್ಲಿ ಕಪ್ಪುಚುಕ್ಕಿ ಇರುವುದು ಹೇಗೆ? ಎಂದು ವಾಗ್ದಾಳಿ ನಡೆಸಿದರು.
ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಮಾತನಾಡಿ, ಮೇಲ್ನೋಟಕ್ಕೆ ದಾಖಲೆ ಲಭಿಸಿದರೆ ಸ್ವಯಂಪ್ರೇರಿತವಾಗಿ ತನಿಖೆಗೆ ಸೂಚನೆ ಕೊಡಲು ರಾಜ್ಯಪಾರಿಗೆ ಅವಕಾಶ ಇದೆ. ನೋಟಿಸ್‌ಗೆ ಸಿದ್ದರಾಮಯ್ಯ ಅವರು ಉತ್ತರ ಕೊಟ್ಟಿಲ್ಲ. ರಾಜ್ಯಪಾಲರು ಕಾನೂನಾತ್ಮಕವಾಗಿ ನಡೆದುಕೊಂಡಿದ್ದಾರೆ. ಸಿದ್ದರಾಮಯ್ಯ ಅವರು ನಿಜವಾಗಿ ಸತ್ಯ ಹರಿಶ್ಚಂದ್ರರಾಗಬೇಕಿದ್ದರೆ, ಗೌರವದಿಂದ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕಿದೆ. ಸಾರ್ವಜನಿಕರನ್ನು ತಪ್ಪು ದಾರಿಗೆ ಎಳೆಯಬಾರದು ಎಂದು ಟೀಕಿಸಿದರು.
ವಿಧಾನಪರಿಷತ್ತಿನ ಜೆಡಿಎಸ್ ಸದಸ್ಯ ಟಿ.ಎ.ಶರವಣ ಮಾತನಾಡಿ, ಕಾಂಗ್ರೆಸ್ ಸರ್ಕಾರ ಬ್ರಹ್ಮಾಂಡ ಭ್ರಷ್ಟಾಚಾರ ಮಾಡುತ್ತಿದೆ. ಜೆಡಿಎಸ್‌ನಲ್ಲಿ ಬೆಳೆದ ಸಿದ್ದರಾಮಯ್ಯ, ನಮ್ಮ ಪಕ್ಷದಲ್ಲಿದ್ದಾಗ ಭ್ರಷ್ಟಾಚಾರ ಮಾಡಲು ಅವಕಾಶ ಕೊಟ್ಟಿರಲಿಲ್ಲ. ಸಿದ್ದರಾಮಯ್ಯನವರಿಗೆ ಸ್ಮರಣ ಶಕ್ತಿ ಕಡಿಮೆಯಾಗಿದೆ. ಆತ್ಮಸಾಕ್ಷಿ ಇದ್ದರೆ ಮುಖ್ಯಮಂತ್ರಿಗಳ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ತನಿಖೆ ಎದುರಿಸಬೇಕು ಎಂದು ಒತ್ತಾಯಿಸಿದರು.
ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಮಾತನಾಡಿ, ಗ್ಯಾರಂಟಿ ಯೋಜನೆಯು ಅವರಿಗೆ ಭ್ರಷ್ಟಾಚಾರ ನಡೆಸಲು ಕೊಟ್ಟ ಪರವಾನಗಿಯಲ್ಲ. ಲೂಟಿ ಹೊಡೆದರೆ ಕೇಳುವಂತಿಲ್ಲ ಎಂಬ ಧೋರಣೆ ಸರಿಯಲ್ಲ. ರೇಟ್ ಕಾರ್ಡ್ ಫಿಕ್ಸ್ ಮಾಡಲು ಅನುಮತಿ ನೀಡಿಲ್ಲ. ರಾಜ್ಯದ ಜನರು ಭ್ರಷ್ಟಾಚಾರದ ವಿರುದ್ಧ ಇದ್ದಾರೆ. ಬ್ಲಾಕ್‌ಮೇಲ್ ರಾಜಕಾರಣ ಬಿಟ್ಟು ಮುಖ್ಯಮಂತ್ರಿಗಳು ಕೂಡಲೇ ರಾಜೀನಾಮೆ ಕೊಡಬೇಕು ಮತ್ತು ತನಿಖೆ ಎದುರಿಸಬೇಕು. ತನಿಖೆಯಲ್ಲಿ ತಪ್ಪು ಮಾಡಿಲ್ಲವೆಂದು ಸಾಬೀತಾದರೆ ಮತ್ತೆ ಸಿಎಂ ಆಗಬಹುದು ಎಂದು ಹೇಳಿದರು.