ಕನ್ನಡಪ್ರಭ ವಾರ್ತೆ ಬೆಂಗಳೂರು
ರಾಜ್ಯಸಭಾ ಚುನಾವಣೆ ಮತ್ತು ಲೋಕಸಭಾ ಚುನಾವಣೆಯಲ್ಲಿ ಸೀಟು ಹಂಚಿಕೆ ವಿಚಾರವಾಗಿ ಬಿಜೆಪಿ ಹೈಕಮಾಂಡ್ ಜತೆ ಚರ್ಚಿಸಿಲು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ದಿಢೀರ್ ದೆಹಲಿಗೆ ಪ್ರಯಾಣಿಸಿದ್ದಾರೆ.
ಬುಧವಾರ ಸಂಜೆ ಕುಮಾರಸ್ವಾಮಿ ಮತ್ತು ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ದೆಹಲಿಗೆ ತೆರಳಿದರು.
ತಡರಾತ್ರಿ ಗೃಹಸಚಿವ ಅಮಿತ್‌ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು ಎಂದು ಹೇಳಲಾಗಿದೆ.
ಸಂಸದೆ ಸುಮಲತಾ ಅವರಿಗೆ ಬಿಜೆಪಿ ಅಭ್ಯರ್ಥಿಯಾಗಿ ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸಲು ಟಿಕೆಟ್ ನೀಡಲಾಗುವುದು ಎಂಬ ಸುದ್ದಿ ಬೆನ್ನಲ್ಲೇ ಕುಮಾರಸ್ವಾಮಿ ದೆಹಲಿ ಭೇಟಿ ತೀವ್ರ ಕುತೂಹಲ ಮೂಡಿಸಿದೆ.
ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಟಿಕೆಟ್ ಜೆಡಿಎಸ್‌ಗೆ ನೀಡುವಂತೆ ಕಸರತ್ತು ನಡೆಸಲಾಗುತ್ತಿದೆ. ಆದರೆ, ಬಿಜೆಪಿಗೆ ಟಿಕೆಟ್ ನೀಡುವ ಸಾಧ್ಯತೆ ಇದೆ ಎಂಬ ಸುದ್ದಿ ಹಿನ್ನೆಲೆಯಲ್ಲಿ ದೆಹಲಿ ಭೇಟಿ ಪ್ರಮುಖವಾಗಿದೆ. ಈ ಕುರಿತು ಬಿಜೆಪಿ ವರಿಷ್ಠರ ಜತೆ ಮಾತುಕತೆ ನಡೆಸಿದರು.
ಅಲ್ಲದೇ, ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯುವ ಚುನಾವಣೆಗೆ ಐದನೇ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಕುಪೇಂದ್ರರೆಡ್ಡಿ ಅವರ ಗೆಲುವಿಗೆ ರೂಪಿಸಲಾಗಿರುವ ರಾಜಕೀಯ ತಂತ್ರಗಾರಿಕೆ ಕುರಿತು ಸಮಾಲೋಚನೆ ನಡೆಸಲಾಯಿತು ಎಂದು ಹೇಳಲಾಗಿದೆ.