;Resize=(412,232))
ಬೆಂಗಳೂರು : ಮುಂಬರುವ ಹಿರಿಯೂರು ವಿಧಾನಸಭಾ ಕ್ಷೇತ್ರದಲ್ಲಿ ಎನ್‌ಡಿಎ ಮೂಲಕ ಬಿಜೆಪಿ ಅಭ್ಯರ್ಥಿಯನ್ನು ಕಣಕ್ಕಿಳಿಸುವ ತೀರ್ಮಾನ ಮಾಡಿದ್ದೇವೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಹೇಳಿದ್ದಾರೆ.
ಭಾನುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿಗೆ ಹಿರಿಯೂರು ಟಿಕೆಟ್ ಅಂತ ನಮ್ಮ ಪಕ್ಷದಲ್ಲಿ ತೀರ್ಮಾನ ಆಗಿದೆ. ಇದರ ಬಗ್ಗೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಜತೆ ಮಾತಾಡುತ್ತೇವೆ. ನಾನೂ ಅವರೊಂದಿಗೆ ಮಾತಾಡುತ್ತೇನೆ. ಅಂತಿಮವಾಗಿ ಕೇಂದ್ರದ ನಾಯಕರು ಜೆಡಿಎಸ್ ಮನವೊಲಿಸಿ ಬಿಜೆಪಿಗೇ ಟಿಕೆಟ್ ಕೊಡುತ್ತಾರೆ ಎಂಬ ವಿಶ್ವಾಸ ಇದೆ ಎಂದರು.
ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಮುಂಬರುವ ಜಿಪಂ, ತಾಪಂ ಚುನಾವಣೆಯಲ್ಲೂ ಹೊಂದಾಣಿಕೆ ಆಗಬೇಕು ಅಂತ ಹಲವರ ಅಭಿಪ್ರಾಯ ಇದೆ. ರಾಜ್ಯದಲ್ಲಿ ಒಂದೊಂದು ಕಡೆ ಒಂದೊಂದು ವಾತಾವರಣ ಇದೆ. ನಾವು ಶೀಘ್ರ ಸಮನ್ವಯ ಸಮಿತಿ ಸಭೆ ನಡೆಸಿ ಕಾರ್ಯಕರ್ತರ ಅಭಿಪ್ರಾಯಗಳ ಬಗ್ಗೆಯೂ ಚರ್ಚೆ ಮಾಡುತ್ತೇವೆ. ಅಂತಿಮವಾಗಿ ಕೇಂದ್ರ ಬಿಜೆಪಿ ನಿರ್ಧಾರ ಏನಿರುತ್ತೋ ಅದಕ್ಕೆ ಬದ್ಧ ಎಂದು ತಿಳಿಸಿದರು.
ಸಚಿವರಾಗಿದ್ದ ಡಿ. ಸುಧಾಕರ್ ಅವರ ನಿಧನದಿಂದ ತೆರವಾಗಿರುವ ಚಿತ್ರದುರ್ಗದ ಹಿರಿಯೂರು ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ಘೋಷಣೆ ನಿರೀಕ್ಷೆಯಲ್ಲಿರುವ ರಾಜ್ಯದ ಮೂರೂ ಪಕ್ಷಗಳು ದಾಳ ಉರುಳಿಸಲು ಆರಂಭಿಸಿವೆ. ಆ ಕ್ಷೇತ್ರದಲ್ಲಿ ಎನ್‌ಡಿಎ ಕೂಟದಿಂದ ತನ್ನ ಅಭ್ಯರ್ಥಿ ಕಣಕ್ಕಿಳಿಯಲಿದ್ದಾರೆ ಎಂದು ಬಿಜೆಪಿ ಹೇಳಿದ್ದರೆ, ಅದಕ್ಕೆ ಮಿತ್ರಪಕ್ಷ ಜೆಡಿಎಸ್ ಅಪಸ್ವರ ತೆಗೆದಿದೆ. ಈ ನಡುವೆ ಉಪಚುನಾವಣೆ ಹಿನ್ನೆಲೆಯಲ್ಲಿ ಹಿರಿಯೂರಿನಲ್ಲಿ ಸರ್ಕಾರಿ ಕಾರ್ಯಕ್ರಮ ಆಯೋಜನೆಗೆ ಮುಖ್ಯಮಂತ್ರಿ ಮುಂದಾಗಿದ್ದಾರೆ.