ತಂತ್ರಜ್ಞಾನ ಬಳಸಿ ಬಾಂಬ್‌ ಸ್ಫೋಟ ಭೇದಿಸಿ: ಸಿದ್ದರಾಮಯ್ಯ

KannadaprabhaNewsNetwork |  
Published : Mar 03, 2024, 01:32 AM ISTUpdated : Mar 03, 2024, 10:28 AM IST
CM meeting with Police officers | Kannada Prabha

ಸಾರಾಂಶ

ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟ ಘಟನೆಯ ಸಂಪೂರ್ಣ ಸತ್ಯ ಹೊರಗೆ ಬರಲು ತಂತ್ರಜ್ಞಾನದ ಸಾಧ್ಯತೆಗಳನ್ನು ತನಿಖೆಯಲ್ಲಿ ಪರಿಣಾಮಕಾರಿಯಾಗಿ ಬಳಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟ ಘಟನೆಯ ಸಂಪೂರ್ಣ ಸತ್ಯ ಹೊರಗೆ ಬರಲು ತಂತ್ರಜ್ಞಾನದ ಸಾಧ್ಯತೆಗಳನ್ನು ತನಿಖೆಯಲ್ಲಿ ಪರಿಣಾಮಕಾರಿಯಾಗಿ ಬಳಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಶನಿವಾರ ಗೃಹ ಇಲಾಖೆಯ ಉನ್ನತ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿ. 

ಇಂತಹ ಪ್ರಕರಣಗಳು ಮರುಕಳಿಸದಂತೆ ಎಚ್ಚರ ವಹಿಸಬೇಕು. ಜನನಿಬಿಡ ಸ್ಥಳಗಳನ್ನು ಗುರುತಿಸಿ ಅಂತಹ ಪ್ರದೇಶಗಳಲ್ಲಿ ಪೊಲೀಸ್‌ ಗಸ್ತು ಹೆಚ್ಚಿಸಿ, ಜನರಿಗೆ ರಕ್ಷಣೆ ಒದಗಿಸಬೇಕು. 

ಇಂತಹ ಘಟನೆಗಳು ನಡೆದಾಗ ಪೊಲೀಸರು ಎಚ್ಚರಿಕೆ ವಹಿಸಿ ನಂತರ ಮರೆಯುವುದು ಆಗಬಾರದು. ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹಬ್ಬಿಸಿ ಜನರ ದಾರಿ ತಪ್ಪಿಸುವ ಕೆಲಸವನ್ನು ಮಟ್ಟ ಹಾಕುವಂತೆ ಖಡಕ್‌ ಸೂಚನೆ ನೀಡಿದರು.

ಸಮಾಜ ದ್ರೋಹಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಿ:ಗುಪ್ತದಳ ಹೆಚ್ಚು ಜಾಗೃತವಾಗಿರಬೇಕು. ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡುವ ಸಮಾಜ ದ್ರೋಹಿಗಳ ಬಗ್ಗೆ ಯಾವುದೇ ಸಹಾನುಭೂತಿ ಇಲ್ಲದೇ ಕ್ರಮ ಜರುಗಿಸಬೇಕು. 

ಈ ಬಗ್ಗೆಯೇ ಪೊಲೀಸ್ ಇಲಾಖೆ ಜೊತೆಗೆ ಪ್ರತ್ಯೇಕ ಸಭೆ ಕರೆಯಲಾಗುವುದು. ಸಮಯ ಸಂದರ್ಭಕ್ಕೆ ತಕ್ಕಂತೆ ನಾವೂ ಬದಲಾಗಬೇಕು. ತ್ವರಿತ ಗತಿಯಲ್ಲಿ ಕೆಲಸ ಮಾಡಬೇಕು ಎಂದು ಸಿದ್ದರಾಮಯ್ಯ ನಿರ್ದೇಶನ ನೀಡಿದರು.

ಗೃಹ ಸಚಿವ ಡಾ.ಜಿ.ಪರಮೇಶ್ವರ್, ಸಚಿವ ಪ್ರಿಯಾಂಕ್‌ ಖರ್ಗೆ, ಮುಖ್ಯ ಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಕಾರ್ಯದರ್ಶಿ ಡಾ.ತ್ರಿಲೋಕ್ ಚಂದ್ರ, ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಸ್.ಆರ್.ಉಮಾಶಂಕರ್, ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್, ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.

Recommended Stories

ಜಿ ರಾಮ್‌ ಜಿ ವಿರುದ್ಧ ಕೈ ಹೋರಾಟ ಶುರು
ಒಂದಲ್ಲಾ ಒಂದು ದಿನ ಹಿಜಾಬ್‌ ಧರಿಸಿದಾಕೆ ಪ್ರಧಾನಿ ಆಗ್ತಾಳೆ : ಒವೈಸಿ