;Resize=(412,232))
ಬೆಂಗಳೂರು : ನನ್ನ ಸಹೋದರ ಡಿ.ಕೆ.ಶಿವಕುಮಾರ್ ಹಣೆಯಲ್ಲಿ ಬರೆದಿದ್ದರೆ ಮುಖ್ಯಮಂತ್ರಿಯಾಗುತ್ತಾರೆ, ಇಲ್ಲದಿದ್ದರೆ ಇಲ್ಲ. ಅದಕ್ಕಾಗಿ ತಲೆಕೆಡಿಸಿಕೊಳ್ಳುವ ಅವಶ್ಯಕತೆಯಿಲ್ಲ ಎಂದು ಬಮೂಲ್ ಅಧ್ಯಕ್ಷ, ಮಾಜಿ ಸಂಸದ ಡಿ.ಕೆ. ಸುರೇಶ್ ಹೇಳಿದ್ದಾರೆ.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ. ಸುರೇಶ್, ಶಿವಕುಮಾರ್ ಅವರನ್ನು ಮುಖ್ಯಮಂತ್ರಿಯಾಗಿ ನೋಡಬೇಕು ಎಂದು ಹಿಂದೆ ಆಸೆಯಿಂದ ಹೇಳಿದ್ದೆ. ಅವರ ಹಣೆಯಲ್ಲಿ ಬರೆದಿದ್ದರೆ ಮುಖ್ಯಮಂತ್ರಿಯಾಗುತ್ತಾರೆ. ಇಲ್ಲದಿದ್ದರೆ ಇಲ್ಲ. ಪಕ್ಷ ಹೇಳಿದಂತೆ ಅವರು ನಡೆದುಕೊಳ್ಳುತ್ತಾರೆ. ಪಕ್ಷದ ಅಧ್ಯಕ್ಷರಾಗಿ, ಉಪಮುಖ್ಯಮಂತ್ರಿಯಾಗಿ ಪಕ್ಷದ ಏಳಿಗೆಗೆ, ಘನತೆಗೆ ಚ್ಯುತಿ ಬಾರದಂತೆ ನಡೆದುಕೊಳ್ಳುತ್ತಿದ್ದಾರೆ. ಎಲ್ಲರನ್ನೂ ಸಮಾನವಾಗಿ ನೋಡಬೇಕಿರುವುದು ಅವರ ಕರ್ತವ್ಯ ಎಂದರು.
2028ರ ಚುನಾವಣೆಯಲ್ಲಿ ಸಿದ್ದರಾಮಯ್ಯ ಅವರು ಸ್ಪರ್ಧಿಸುವ ವಿಚಾರದ ಬಗ್ಗೆ ಪ್ರತಿಕ್ರಿಯಿಸಿ, ರಾಜಕೀಯದಲ್ಲಿ 95-98 ವರ್ಷವಾದರೂ ಸಕ್ರಿಯರಾಗಿರುವವರಿದ್ದಾರೆ. ಸಿದ್ದರಾಮಯ್ಯ ಅವರು ಸ್ಪರ್ಧಿಸುತ್ತೇನೆ ಎನ್ನುವುದರಲ್ಲಿ ಯಾವುದೇ ತಪ್ಪಿಲ್ಲ. ಅವರು ನಮ್ಮ ನಾಯಕರು, ಮುಂದಿನ ಚುನಾವಣೆಯನ್ನು ಅವರ ನೇತೃತ್ವದಲ್ಲಿ ಎದುರಿಸುತ್ತೇವೆ. ಒಬ್ಬ ನಾಯಕನಿಗೆ ಇರಬೇಕಾದ ಎಲ್ಲ ಅವಕಾಶಗಳು ಅವರಿಗಿದೆ. ಎಲ್ಲರಿಗಿಂತ ಗಟ್ಟಿಯಾಗಿ, ಚೆನ್ನಾಗಿ ಓಡಾಡುತ್ತಿದ್ದಾರೆ. ನಿತ್ಯ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದಾರೆ. ಉತ್ತಮ ಆಡಳಿತ ನೀಡುತ್ತಿದ್ದಾರೆ. ಅವರ ನಾಯಕತ್ವದಲ್ಲಿ ಚುನಾವಣೆ ಎದುರಿಸುವುದರಲ್ಲಿ ತಪ್ಪೇನಿಲ್ಲ ಎಂದು ಹೇಳಿದರು.
ಸಮುದಾಯವಾರು ಉಪಮುಖ್ಯಮಂತ್ರಿ ಸ್ಥಾನ ನೀಡುವ ಕೂಗಿನ ಕುರಿತು ಪ್ರತಿಕ್ರಿಯಿಸಿ, ಎಲ್ಲರ ಸಲಹೆಗಳನ್ನು ಹೈಕಮಾಂಡ್ ನಾಯಕರು ಮತ್ತು ಮುಖ್ಯಮಂತ್ರಿಗಳು ಗಮನಿಸಿ ಸೂಕ್ತ ನಿರ್ಣಯ ತೆಗೆದುಕೊಳ್ಳುತ್ತಾರೆ. ಈ ವಿಚಾರವಾಗಿ ನನ್ನ ಹೇಳಿಕೆ ಅಪ್ರಸ್ತುತ ಎಂದರು.
ದಲಿತ ಸಿಎಂ ವಿಚಾರ ಚರ್ಚೆಗೆ ಬಂದಿರುವ ಬಗ್ಗೆ ಮಾತನಾಡಿ, ಸಮಾವೇಶ ಮಾಡುವುದರಲ್ಲಿ ತಪ್ಪೇನಿಲ್ಲ. ಪಕ್ಷ ಸಂಘಟನೆಗೆ ಅದು ಶಕ್ತಿ ತುಂಬಲಿದೆ. ಇನ್ನು, ಪಕ್ಷದ ಅಡಿಯಲ್ಲಿ ಕಾರ್ಯಕ್ರಮ ಮಾಡುವುದು ಆಯೋಜಕರಿಗೆ ಬಿಟ್ಟಿದ್ದು ಎಂದು ಹೇಳಿದರು.