ಸಿದ್ದು ರಾಜೀನಾಮೆ ಕೊಡಬೇಕೆಂದರೆ ಎಚ್‌ಡಿಕೆಯೂ ಕೊಡಲಿ - ಎಫ್ಐಆರ್ ಆಗಿರೋರೆಲ್ಲಾ ರಾಜೀನಾಮೆ ನೀಡಲಿ: ಜಿಟಿಡಿ

Published : Oct 04, 2024, 07:31 AM IST
GT Devegowda

ಸಾರಾಂಶ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ ನಿವೇಶನ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಅವಶ್ಯಕತೆ ಇಲ್ಲ- ರಾಜ್ಯ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ. ದೇವೇಗೌಡ ಪ್ರತಿಪಾದಿಸಿದ್ದಾರೆ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ ನಿವೇಶನ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಅವಶ್ಯಕತೆ ಇಲ್ಲ. ಒಂದು ವೇಳೆ, ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡುವುದೇ ಆದರೆ, ಎಫ್ಐಆರ್ ಆಗಿರುವ ಎಲ್ಲಾ ನಾಯಕರು ರಾಜೀನಾಮೆ ಕೊಡಲಿ. ಕೇಂದ್ರ ಬೃಹತ್‌ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಕೂಡ ರಾಜೀನಾಮೆ ಕೊಡಲಿ ಎಂದು ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್‌ ಶಾಸಕ, ರಾಜ್ಯ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ. ದೇವೇಗೌಡ ಪ್ರತಿಪಾದಿಸಿದ್ದಾರೆ.

ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಗುರುವಾರ ಬೆಳಗ್ಗೆ ನಡೆದ ದಸರಾ ಮಹೋತ್ಸವ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಜಿ.ಟಿ.ದೇವೇಗೌಡ ವೇದಿಕೆ ಮೇಲೆಯೇ ಪರಸ್ಪರ ಹೊಗಳಿಕೊಂಡರು. ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಟಿಡಿ ಅವರು ಸಿದ್ದರಾಮಯ್ಯ ಪರ ಬ್ಯಾಟ್‌ ಬೀಸಿದರು.

ಎಲ್ಲರೂ ಗಾಜಿನ ಮನೆಯಲ್ಲಿ ಕೂತಿದ್ದಾರೆ. ಸಿದ್ದರಾಮಯ್ಯ ರಾಜೀನಾಮೆ ಕೊಡಲು ನ್ಯಾಯಾಲಯ ಹೇಳಿದೆಯಾ? ಕೇಂದ್ರದಲ್ಲಿ ಮಂತ್ರಿ ಆದವರಿಗೆ ಜವಾಬ್ದಾರಿ ಬೇಡವಾ? ಕುಮಾರಸ್ವಾಮಿಗೆ ರಾಜೀನಾಮೆ ಕೊಡು ಅಂದರೆ ಕೊಡುತ್ತಾರಾ? 136 ಸ್ಥಾನ ಗೆದ್ದು ಸಿಎಂ ಆಗಿರುವ ಸಿದ್ದರಾಮಯ್ಯ ರಾಜೀನಾಮೆ ಕೊಡಲು ಆಗುತ್ತಾ? ರಾಜೀನಾಮೆ ಕೊಡಿ, ರಾಜೀನಾಮೆ ಕೊಡಿ ಅಂದರೆ ಕೊಡುವುದಕ್ಕೆ ಆಗುತ್ತಾ? ರಾಜೀನಾಮೆ ಕೊಟ್ಟರೆ ಜನಸೇವೆ ಮಾಡೋರು ಯಾರು? ಎಂದು ಕೇಳಿದರು.

ಒಂದು ಅತ್ಯಾಚಾರ, ಒಂದು ಕೊಲೆಯನ್ನು ಮಾಧ್ಯಮಗಳು ಮೂರು ತಿಂಗಳು ತೋರಿಸುತ್ತವೆ. ಒಂದು ಎಫ್ಐಆರ್ ನ್ನು ಎಷ್ಟು ದಿನ ತೋರಿಸುತ್ತೀರಿ? ಯಾರ, ಯಾರ ಮೇಲೆ ಎಫ್ಐಆರ್ ಆಗಿದೆಯೋ ಅವರೆಲ್ಲರೂ ರಾಜೀನಾಮೆ ಕೊಡಲಿ ಎಂದು ಸವಾಲು ಹಾಕಿದರು.

ಸಿದ್ದರಾಮಯ್ಯನವರಿಗೆ ಇಂತಹ ಕಷ್ಟದ ಸಂದರ್ಭದಲ್ಲಿ ಇನ್ನೂ ಹೆಚ್ಚಿನ ಶಕ್ತಿ ಬಂದಿದೆ. 2006ರ ಉಪಚುನಾವಣೆಯಲ್ಲಿ ಕುಮಾರಸ್ವಾಮಿ ಮುಖ್ಯಮಂತ್ರಿ, ಯಡಿಯೂರಪ್ಪ ಉಪ ಮುಖ್ಯಮಂತ್ರಿಯಾಗಿದ್ದರು. ನಾನು ಆಗ ದಳದಲ್ಲಿದ್ದೆ. ಸಿದ್ದರಾಮಯ್ಯ ಅವರನ್ನು ಸೋಲಿಸಲು ಏನೆಲ್ಲಾ ಪ್ರಯತ್ನಪಟ್ಟರೂ ಅವರು ಗೆದ್ದರು. ಅವರಿಗೆ ಚಾಮುಂಡೇಶ್ವರಿಯ ಆಶೀರ್ವಾದ ಇರುವುದರಿಂದಲೇ ಎರಡು ಬಾರಿ ಉಪ ಮುಖ್ಯಮಂತ್ರಿ, 2 ಬಾರಿ ವಿರೋಧ ಪಕ್ಷದ ನಾಯಕ, ಎರಡು ಬಾರಿ ಮುಖ್ಯಮಂತ್ರಿಯಾಗಿದ್ದಾರೆ ಎಂದರು.

ಬಳಿಕ ಮಾತನಾಡಿದ ಸಿದ್ದರಾಮಯ್ಯ ಅವರು, ಜಿ.ಟಿ.ದೇವೇಗೌಡರು 1983ರ ಚುನಾವಣೆಯಲ್ಲಿ ನನ್ನ ಪರ ಕೆಲಸ ಮಾಡಿದ್ದರು. ನಾನು 1984ರಲ್ಲೇ ಮಂತ್ರಿಯಾದೆ. ಈಗ 40 ವರ್ಷಗಳ ಮೇಲಾಗಿದೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ 5 ಬಾರಿ ಗೆದ್ದಿದ್ದೇನೆ. ಮೂರು ಬಾರಿ ಸೋತಿದ್ದೇನೆ. ಜಿ.ಟಿ.ದೇವೇಗೌಡರೆ ಒಂದು ಬಾರಿ ನನ್ನನ್ನು ಸೋಲಿಸಿದ್ದರು ಎಂದರು.

PREV

Recommended Stories

ವಿಜಯ್‌ ಚುನಾವಣಾ ರಣಕಹಳೆ - ಇಲ್ಲಿ ಶುರುವಾದ ರಾಜಕೀಯ ಕಾರ್ಯಕ್ಕೆ ಮಹಾ ತಿರುವು
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ