;Resize=(412,232))
ಬೆಂಗಳೂರು : ‘ಕುರಿ ಕಾಯುತ್ತಿದ್ದವನು ಸಿಎಂ ಆದದ್ದೇ ಪಟ್ಟಭದ್ರರ ಕಣ್ಣು ಕೆಂಪಾಗಲು ಕಾರಣ’ ಇದು ಸಿಎಂ ಸಿದ್ದರಾಮಯ್ಯ ಅವರು ತಮ್ಮ ವಿರೋಧಿಗಳ ಕುರಿತು ಹೇಳಿದ ಮಾತು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಮಾಜಿಕ ನ್ಯಾಯ ದಿನಾಚರಣೆ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದ ತಮ್ಮ ಎಕ್ಸ್ ಖಾತೆ ಹಾಗೂ ಫೇಸ್‌ಬುಕ್‌ನಲ್ಲಿ ಸುದೀರ್ಘ ಲೇಖನ ಬರೆದಿದ್ದು, ಅದರಲ್ಲಿ ತಮ್ಮ ಆಡಳಿತದ ಬಗ್ಗೆ ವಿರೋಧಿಗಳು ನಡೆಸುತ್ತಿರುವ ಬಹುತೇಕ ದಾಳಿ ಹಾಗೂ ಟೀಕೆ, ಆರೋಪಗಳಿಗೆ ತಮ್ಮ ಹುಟ್ಟಿನ ಜಾತಿಯೂ ಒಂದು ಕಾರಣ ಎಂದು ಹೇಳಿದ್ದಾರೆ.
ಅಲ್ಲದೆ, ತಮ್ಮ ಆಡಳಿತದ ವಿರುದ್ಧ ಷಡ್ಯಂತ್ರ ನಡೆದಿರುವುದರ ಅರಿವು ತಮಗಿದೆ. ಯಾಕೆ ಷಡ್ಯಂತ್ರ ಮಾಡುತ್ತಿದ್ದಾರೆ ಎನ್ನುವುದೂ ನನಗೆ ಗೊತ್ತಿದೆ. ನಾನು ಈ ರಾಜ್ಯದ ಬಡವರು, ಶೋಷಿತರು, ಅವಕಾಶ ವಂಚಿತರ ಪರವಾಗಿದ್ದೇನೆ, ಸಾಮಾಜಿಕ ನ್ಯಾಯದ ಪರವಾಗಿದ್ದೇನೆ, ಸಂವಿಧಾನದ ಪರವಾಗಿದ್ದೇನೆ, ಶೋಷಿತರ ಅಭಿವೃದ್ದಿಗಾಗಿ ಕಾರ್ಯಕ್ರಮಗಳನ್ನು ರೂಪಿಸಿ ಜಾರಿಗೆ ತಂದಿದ್ದೇನೆ, ದುರ್ಬಲರಿಗೆ ಅನ್ಯಾಯವಾದಾಗ ದನಿ ಎತ್ತಿದ್ದೇನೆ. ಇದಕ್ಕಾಗಿ ರಾಜ್ಯದ ಜನತೆ 136 ಸ್ಥಾನಗಳಲ್ಲಿ ಕಾಂಗ್ರೆಸ್‌ನ್ನು ಗೆಲ್ಲಿಸಿ ಅಧಿಕಾರಕ್ಕೆ ತಂದಿದ್ದಾರೆ. ಇದು ನಮ್ಮ ರಾಜಕೀಯ ವಿರೋಧಿಗಳಿಗೆ ಸಹಿಸಲಾಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನನ್ನ ಮೇಲೆ ವಿರೋಧಿಗಳು ನಡೆಸುತ್ತಿರುವ ಬಹುತೇಕ ದಾಳಿಗಳು, ಮಾಡುತ್ತಿರುವ ಟೀಕೆ-ಆರೋಪಗಳಿಗೆ ನಾನು ಹುಟ್ಟಿದ ಜಾತಿಯೂ ಒಂದು ಕಾರಣ. ಕುರಿ ಕಾಯುತ್ತಾ ಇರಬೇಕಾದವನು ಮುಖ್ಯಮಂತ್ರಿ ಆಗಿ ಬಿಟ್ಟನಲ್ಲಾ, ಆರ್ಥಿಕ ತಜ್ಞರಿಗೆ ಸರಿಸಮನಾಗಿ ನಿಂತು ಸಾಲುಸಾಲು ಬಜೆಟ್ ಮಂಡಿಸಿ ಶಹಬ್ಬಾಸ್ ಗಿರಿ ಗಳಿಸುತ್ತಿದ್ದಾನಲ್ಲಾ ಎನ್ನುವ ಅಸಹನೆ, ಅವರೊಳಗೆ ದ್ವೇಷ, ಅಸೂಯೆ ಕುದಿಯುತ್ತಿದೆ. ಇವನೊಬ್ಬನನ್ನು ರಾಜಕೀಯವಾಗಿ ಮುಗಿಸಿಬಿಟ್ಟರೆ ಅದರ ನಂತರ ನಮ್ಮೆಲ್ಲರ ಹಾದಿ ಸುಲಭವಾಗುತ್ತದೆ ಎನ್ನುವ ರಾಜಕೀಯ ದುರುದ್ದೇಶದ ಲೆಕ್ಕಾಚಾರ ಇವರ ಮನಸ್ಸಿನಲ್ಲಿದೆ ಎಂದು ಸಿಎಂ ಹೇಳಿದ್ದಾರೆ.
ತಮ್ಮ ಪಕ್ಷದ ವರಿಷ್ಠ ರಾಹುಲ್ ಗಾಂಧಿ ಅವರ ಪರವಾಗಿಯೂ ಟ್ವೀಟ್ ಮಾಡಿರುವ ಅವರು, ರಾಹುಲ್ ಗಾಂಧಿ ಸಾಮಾಜಿಕ ನ್ಯಾಯದ ಪರ ನಿಂತಿರುವುದೇ ಅವರ ವಿರುದ್ಧದ ಸಂಚುಗಳಿಗೆ ಕಾರಣ ಎಂದು ಹೇಳಿದ್ದಾರೆ.
‘ಸಾಮಾಜಿಕ ನ್ಯಾಯ ನಾನು ಬದುಕಿನಲ್ಲಿ ಆರಿಸಿಕೊಂಡ ಹಾದಿ. ಬಸವಣ್ಣ, ಮಹಾತ್ಮ ಗಾಂಧೀಜಿ, ಬಾಬಾಸಾಹೇಬ್ ಅಂಬೇಡ್ಕರ್ ನಮ್ಮ ಸರ್ಕಾರದ ಮಾರ್ಗದರ್ಶಕರು. ಗ್ಯಾರಂಟಿ ಯೋಜನೆಗಳ ಮೂಲಕ ಸಂವಿಧಾನ ಬದ್ಧ ಕರ್ತವ್ಯವನ್ನು ನಿರ್ವಹಿಸಿದ್ದೇನೆ. ಜನಪರ ಯೋಜನೆಗಳ ಜೊತೆಗೆ ಯಾವ ಪಕ್ಷದ ಸರ್ಕಾರ ಬಂದರೂ ಸಾರ್ವಕಾಲಿಕವಾಗಿ ನಿಲ್ಲುವಂತಹ ಕೆಲವು ಕಾಯ್ದೆಗಳ ಜಾರಿ ಮೂಲಕ ಸಾಮಾಜಿಕ ನ್ಯಾಯಕ್ಕೆ ಹೊಸ ಆಯಾಮ ಕೊಟ್ಟ ತೃಪ್ತಿ ನನ್ನದು ಎಂದು ಸಿಎಂ ಹೇಳಿದ್ದಾರೆ.
ಸಿದ್ದರಾಮಯ್ಯ ಹೇಳಿದ್ದೇನು?
- ನನ್ನ ವಿರುದ್ಧದ ಟೀಕೆಗಳು ಆರೋಪಗಳಿಗೆ ನನ್ನ ಜಾತಿಯೂ ಕಾರಣ
- ನನ್ನ ವಿರುದ್ಧದ ಷಡ್ಯಂತ್ರದ ಬಗ್ಗೆ ಗೊತ್ತಿದೆ, ಅದಕ್ಕೆ ಕಾರಣವೂ ಗೊತ್ತಿದೆ
- ನಾನು ಈ ರಾಜ್ಯದ ಬಡವರು, ಶೋಷಿತರು, ಅವಕಾಶ ವಂಚಿತರ ಪರ
- ಶೋಷಿತರ ಅಭಿವೃದ್ದಿಗಾಗಿ ಯೋಜನೆ ರೂಪಿಸಿ ಜಾರಿಗೆ ತಂದಿದ್ದೇನೆ
- ಇಂಥ ನೆರವಿನಿಂದಲೇ ರಾಜ್ಯದ ಜನತೆ 136 ಸ್ಥಾನ ನಮಗೆ ನೀಡಿದ್ದಾರೆ
- ಆದರೆ ಇದನ್ನು ನಮ್ಮ ರಾಜಕೀಯ ವಿರೋಧಿಗಳಿಗೆ ಸಹಿಸಲಾಗುತ್ತಿಲ್ಲ
- ಕುರಿಗಾಹಿ ಸಿಎಂ ಆದನಲ್ಲಾ, ಆರ್ಥಿಕ ತಜ್ಞ ಆದನಲ್ಲಾ ಎಂದು ಹೊಟ್ಟೆಕಿಚ್ಚು