ಐಟಿ ಕಂಪನೀಲಿ ಕನ್ನಡಿಗರ ಕಡೆಗಣನೆ ಸಹಿಸಲ್ಲ: ಡಿಕೆಶಿ

Published : Oct 26, 2026, 06:03 AM IST
DK Shivakumar

ಸಾರಾಂಶ

ಐಟಿ ಕಂಪನಿಗಳಲ್ಲಿ ಕನ್ನಡಿಗರಿಗೆ ಅಥವಾ ರೆಸ್ಯೂಮ್‌ನಲ್ಲಿ ಮಾತೃಭಾಷೆ ‘ಕನ್ನಡ’ ಎಂದು ನಮೂದಿಸಿರುವವರಿಗೆ ಉದ್ಯೋಗಾವಕಾಶಗಳಲ್ಲಿ ಅನ್ಯಾಯವೆಸಗುತ್ತಿರುವ ದೂರುಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಬೆಂಗಳೂರು : ಬೆಂಗಳೂರಿನ ಐಟಿ ಕಂಪನಿಗಳಲ್ಲಿ ಕನ್ನಡಿಗರಿಗೆ ಅಥವಾ ರೆಸ್ಯೂಮ್‌ನಲ್ಲಿ ಮಾತೃಭಾಷೆ ‘ಕನ್ನಡ’ ಎಂದು ನಮೂದಿಸಿರುವವರಿಗೆ ಉದ್ಯೋಗಾವಕಾಶಗಳಲ್ಲಿ ಅನ್ಯಾಯವೆಸಗುತ್ತಿರುವ ದೂರುಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಕನ್ನಡಿಗರನ್ನು ಯಾವುದೇ ಖಾಸಗಿ ಸಂಸ್ಥೆಗಳು ಉದ್ದೇಶಪೂರ್ವಕವಾಗಿ ಕಡೆಗಣಿಸಿರುವುದು ಕಂಡುಬಂದರೆ, ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ತಮ್ಮ ಎಕ್ಸ್‌ ಖಾತೆಯಲ್ಲಿ ಮುಖ್ಯಮಂತ್ರಿ ಸ್ಪಷ್ಟ ಎಚ್ಚರಿಕೆ ನೀಡಿದ್ದಾರೆ.

ಕನ್ನಡಪ್ರಭದಲ್ಲಿ ವರದಿ:

ಅರ್ಹತೆ, ಪ್ರತಿಭೆ ಇದ್ದರೂ ಕನ್ನಡಿಗರಿಗೆ ಅಥವಾ ರೆಸ್ಯೂಮ್‌ನಲ್ಲಿ ಮಾತೃಭಾಷೆ ‘ಕನ್ನಡ’ ಎಂದಿರುವವರಿಗೆ ಐಟಿ ಕಂಪನಿಗಳು ಉದ್ಯೋಗ ನೀಡದೆ ತಾರತಮ್ಯ ಎಸಗುತ್ತಿರುವುದಾಗಿ ಯುವತಿಯೊಬ್ಬಳು ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಮಾಡಿ ಹಂಚಿಕೊಂಡಿದ್ದಳು. ಇದನ್ನು ಆಧರಿಸಿ ‘ಕನ್ನಡಪ್ರಭ’ ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯದ ಕುರಿತು ಅ.24ರ ಶನಿವಾರ ‘ಮಾತೃಭಾಷೆ ಕನ್ನಡ:ರೆಸ್ಯೂಮ್‌ ಕಸದ ಬುಟ್ಟಿಗೆ’ ಎಂಬ ಶೀರ್ಷಿಕೆಯಲ್ಲಿ ವಿವರವಾದ ವರದಿ ಪ್ರಕಟಿಸಿ ಗಮನ ಸೆಳೆದಿತ್ತು.

ಈ ತಾರತಮ್ಯದ ವಿರುದ್ಧ ಕನ್ನಡಪರ ಸಂಘಟನೆಗಳ ಹೋರಾಟಗಾರರು, ಸಾಹಿತ್ಯವಲಯದ ಗಣ್ಯರು ಹಾಗೂ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಸರ್ಕಾರ ಇಂತಹ ಕಂಪನಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂಬ ಆಗ್ರಹ ವ್ಯಕ್ತವಾಗಿತ್ತು.

ಇದರ ಬೆನ್ನಲ್ಲೇ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಬೆಂಗಳೂರಿನ ಐಟಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗಾವಕಾಶಗಳಲ್ಲಿ ಅನ್ಯಾಯವಾಗುತ್ತಿದೆ ಎಂಬ ದೂರುಗಳು ಕೇಳಿಬರುತ್ತಿರುವುದು ವಿಷಾದನೀಯ. ಕನ್ನಡ ಮಾತೃಭಾಷೆ ಇರುವವರನ್ನು ಕಡೆಗಣಿಸಲಾಗುತ್ತಿದೆ ಎಂಬ ವಿಷಯವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಹೇಳಿದ್ದಾರೆ.

ಕನ್ನಡಿಗನೇ ಸಾರ್ವಭೌಮ:

ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ. ಕನ್ನಡಿಗರ ಹಕ್ಕು, ಗೌರವ ಮತ್ತು ಅವಕಾಶಗಳನ್ನು ಯಾವುದೇ ಕಾರಣಕ್ಕೂ ಕಡೆಗಣಿಸಲು ಸರ್ಕಾರ ಅವಕಾಶ ನೀಡುವುದಿಲ್ಲ. ಜಗತ್ತು ಬೆಂಗಳೂರನ್ನು ಭಾರತದ ತಂತ್ರಜ್ಞಾನ ರಾಜಧಾನಿಯಾಗಿ ನೋಡುತ್ತಿದ್ದು, ಕನ್ನಡಿಗರ ಪ್ರತಿಭೆ, ಕೌಶಲ್ಯ ಮತ್ತು ಸಾಮರ್ಥ್ಯದ ಬಗ್ಗೆ ನಮಗೆ ಅಪಾರ ಹೆಮ್ಮೆಯಿದೆ. ಕನ್ನಡಿಗರನ್ನು ಯಾವುದೇ ಖಾಸಗಿ ಸಂಸ್ಥೆ ಉದ್ದೇಶಪೂರ್ವಕವಾಗಿ ಕಡೆಗಣಿಸಿರುವುದು ಕಂಡುಬಂದರೆ, ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ. ಕನ್ನಡಿಗರ ಹಿತಾಸಕ್ತಿಗೆ ಧ್ವನಿಯಾಗಿ, ಅವರ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಸದಾ ಬದ್ಧವಾಗಿದೆ ಎಂದು ಹೇಳಿದ್ದಾರೆ.

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.
Read more Articles on

Recommended Stories

31ಕ್ಕೆ ಸಿದ್ದು ದಿಲ್ಲಿಗೆ: ರಾಗಾಗೆ ಸ್ಟಿಂಗ್‌ ಆಪರೇಷನ್‌ ಮಾಹಿತಿ?
ಕಾಂಗ್ರೆಸ್‌ ನಾಯಕಿ ಕೃಪಾ ಆಳ್ವಾ 2 ತಾಸು ವಿಚಾರಣೆ