ಜೂನ್‌/ಜುಲೈಗೆ ರಾಜ್ಯದ ಪಂಚಾಯಿತಿ ಚುನಾವಣೆ ? - ಮೇ ಅಂತ್ಯದೊಳಗೆ ಮೀಸಲಾತಿ ನಿಗದಿ

Published : Feb 18, 2025, 05:15 AM IST
Electronic Voting Machine

ಸಾರಾಂಶ

ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳಿಗೆ ಮೀಸಲಾತಿ ನಿಗದಿಗೊಳಿಸಿ ಮೇ ಅಂತ್ಯದೊಳಗೆ ಅಧಿಸೂಚನೆ ಪ್ರಕಟಿಸಲಾಗುವುದು ಎಂದು ಹೈಕೋರ್ಟ್‌ಗೆ ರಾಜ್ಯ ಸರ್ಕಾರ ಭರವಸೆ ನೀಡಿದೆ.

  ಬೆಂಗಳೂರು : ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳಿಗೆ ಮೀಸಲಾತಿ ನಿಗದಿಗೊಳಿಸಿ ಮೇ ಅಂತ್ಯದೊಳಗೆ ಅಧಿಸೂಚನೆ ಪ್ರಕಟಿಸಲಾಗುವುದು ಎಂದು ಹೈಕೋರ್ಟ್‌ಗೆ ರಾಜ್ಯ ಸರ್ಕಾರ ಭರವಸೆ ನೀಡಿದೆ.

ನಿಗದಿತ ಅವಧಿಯಲ್ಲಿ ಜಿಪಂ ಮತ್ತು ತಾಪಂ ಕ್ಷೇತ್ರ ಪುನರ್‌ ವಿಂಗಡಣೆ ಹಾಗೂ ಮೀಸಲಾತಿ ಪ್ರಕಟಿಸಲು ವಿಫಲವಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ರಾಜ್ಯ ಚುನಾವಣಾ ಆಯೋಗ ಮತ್ತು ಇತರರು ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿಗಳು ಮುಖ್ಯ ನ್ಯಾಯಮೂರ್ತಿ ಎನ್‌.ವಿ. ಅಂಜಾರಿಯಾ ಅವರ ನೇತೃತ್ವದ ವಿಭಾಗೀಯ ಪೀಠದ ಮುಂದೆ ಸೋಮವಾರ ವಿಚಾರಣೆಗೆ ಬಂದಿದ್ದವು.

ಈ ವೇಳೆ ಸರ್ಕಾರದ ಪರ ಹಾಜರಾದ ಅಡ್ವೊಕೇಟ್‌ ಜನರಲ್‌ ಕೆ.ಶಶಿಕಿರಣ್‌ ಶೆಟ್ಟಿ, ರಾಜ್ಯ ಚುನಾವಣಾ ಆಯೋಗಕ್ಕೆ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ಪಟ್ಟಿಯನ್ನು ಮೇ ಅಂತ್ಯದೊಳಗೆ ಒದಗಿಸಲಾಗುವುದು ಎಂದು ಭರವಸೆ ನೀಡಿದರು.

ರಾಜ್ಯ ಚುನಾವಣಾ ಆಯೋಗ ಪರ ಹಿರಿಯ ವಕೀಲ ಕೆ.ಎನ್‌.ಫಣೀಂದ್ರ, ರಾಜ್ಯ ಸರ್ಕಾರ ನೀಡಿರುವ ವಾಗ್ದಾನವನ್ನು ನ್ಯಾಯಾಲಯ ದಾಖಲಿಸಿಕೊಳ್ಳಬೇಕು. ಸರ್ಕಾರ ಮೀಸಲು ಪಟ್ಟಿ ಒದಗಿಸಿದ ನಂತರ ಅಂತಿಮವಾಗಿ ಆಯೋಗ ಚುನಾವಣೆಯ ದಿನಾಂಕ ನಿಗದಿಪಡಿಸಲಿದೆ. ಒಂದೊಮ್ಮೆ ಸರ್ಕಾರ ತನ್ನ ವಾಗ್ದಾನದಂತೆ ನಡೆದುಕೊಳ್ಳಲು ವಿಫಲವಾದರೆ, ನ್ಯಾಯಾಂಗ ನಿಂದನೆ ಅರ್ಜಿಯನ್ನು ಮುಂದುವರಿಸುವ ಸ್ವಾತಂತ್ರ್ಯವನ್ನು ಆಯೋಗಕ್ಕೆ ಕಲ್ಪಿಸಬೇಕು ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದರು.

ಉಭಯ ವಾದ ದಾಖಲಿಸಿಕೊಂಡ ನ್ಯಾಯಪೀಠ, ರಾಜ್ಯ ಸರ್ಕಾರ ತನ್ನ ವಾಗ್ದಾನದಂತೆ ನಡೆದುಕೊಳ್ಳಬೇಕು. ಇಲ್ಲದಿದ್ದರೆ ಚುನಾವಣಾ ಆಯೋಗವು ನ್ಯಾಯಾಂಗ ನಿಂದನೆ ಅರ್ಜಿ ಮುಂದುವರಿಸುವ ಸ್ವಾತಂತ್ರ್ಯ ಹೊಂದಿದೆ ಎಂದು ತಿಳಿಸಿ, ಅರ್ಜಿಗಳನ್ನು ಇತ್ಯರ್ಥಪಡಿಸಿತು.

ನ್ಯಾಯಾಲಯಕ್ಕೆ ನೀಡಿರುವ ವಾಗ್ದಾನದಂತೆ ರಾಜ್ಯ ಸರ್ಕಾರ ನಡೆದುಕೊಂಡರೆ ಜೂನ್‌/ಜುಲೈ ಅಥವಾ ಆಗಸ್ಟ್‌ನಲ್ಲಿ ರಾಜ್ಯದ ಜಿಪಂ, ತಾಪಂ ಚುನಾವಣೆ ನಡೆಯಲಿದೆ.

ನಿರಂತರ ಕಾನೂನು ಹೋರಾಟ:

ಪಂಚಾಯಿತಿ ಚುನಾವಣೆ ನಡೆಸುವ ಸಂಬಂಧ ನಿರಂತರ ಕಾನೂನು ಹೋರಾಟ ನಡೆಯುತ್ತಿದೆ. ಚುನಾವಣೆ ನಡೆಸುವ ನಿಟ್ಟಿನಲ್ಲಿ ಕ್ಷೇತ್ರಗಳ ಪುನರ್‌ ವಿಂಗಡಣೆ ಮತ್ತು ಹಿಂದುಳಿದ ವರ್ಗಗಳು ಸೇರಿ ಇತರೆ ಸಮುದಾಯಗಳಿಗೆ ಕಾಲಮಿತಿಯಲ್ಲಿ ಮೀಸಲಾತಿ ನಿಗದಿಪಡಿಸಲು ವಿಫಲವಾಗಿದ್ದರಿಂದ ಕಳೆದ 2020ರ ಡಿಸೆಂಬರ್‌ನಲ್ಲಿ ರಾಜ್ಯ ಸರ್ಕಾರಕ್ಕೆ 5 ಲಕ್ಷ ರು. ದಂಡ ವಿಧಿಸಿ ಹೈಕೋರ್ಟ್‌ ಆದೇಶಿಸಿತ್ತು.

ನಂತರ 2021ರ ಏಪ್ರಿಲ್, ಮೇ ಮತ್ತು ಜೂನ್ ತಿಂಗಳಲ್ಲಿ ಅವಧಿ ಪೂರ್ಣಗೊಂಡ ಜಿಪಂ ಮತ್ತು ತಾಪಂಗಳಿಗೆ ಚುನಾವಣೆ ನಡೆಸಲು ಸಿದ್ದತೆ ಆರಂಭಿಸಿದ್ದ ಚುನಾವಣಾ ಆಯೋಗ ಕ್ಷೇತ್ರ ಪುನರ್‌ವಿಂಗಡಣೆ ಮಾಡಿ ಮತದಾರರ ಅಂತಿಮ ಪಟ್ಟಿ ಸಹ ಪ್ರಕಟಿಸಿತ್ತು. ಮೀಸಲಾತಿ ಕರಡು ಸಹ ಪ್ರಕಟಿಸಲಾಗಿತ್ತು. ದಿನಾಂಕ ಘೋಷಣೆ ಮಾಡುವ ಹೊತ್ತಿನಲ್ಲಿ ಕ್ಷೇತ್ರ ಪುನರ್‌ ವಿಂಗಡಣೆ ಮತ್ತು ಮೀಸಲಾತಿ ಅಧಿಕಾರವನ್ನು ಚುನಾವಣಾ ಆಯೋಗದಿಂದ ಸರ್ಕಾರ ಹಿಂಪಡೆದು ಹೊಸದಾಗಿ ಸೃಷ್ಟಿಸಿದ ಸೀಮಾ ನಿರ್ಣಯ ಆಯೋಗಕ್ಕೆ ವಹಿಸಿತ್ತು. ಅದನ್ನು ಚುನಾವಣಾ ಆಯೋಗ ಪ್ರಶ್ನಿಸಿತ್ತು.

ಬಳಿಕ ಜಿಪಂ ಹಾಗೂ ತಾಪಂ ಕ್ಷೇತ್ರಗಳಿಗೆ 12 ವಾರಗಳಲ್ಲಿ ಮೀಸಲಾತಿ ಪ್ರಕಟಿಸಲಾಗುವುದು ಎಂದು ರಾಜ್ಯ ಸರ್ಕಾರ 2023ರ ಡಿ.19ಕ್ಕೆ ಹೈಕೋರ್ಟ್‌ಗೆ ಭರವಸೆ ಕೊಟ್ಟಿತ್ತು. ಈ ಭರವಸೆಯಂತೆ ಸರ್ಕಾರ ನಡೆದುಕೊಂಡಿಲ್ಲ ಎಂದು ಆಕ್ಷೇಪಿಸಿ ಚುನಾವಣಾ ಆಯೋಗ ರಾಜ್ಯ ಸರ್ಕಾರದ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿತ್ತು.

PREV

Recommended Stories

ವಿಜಯ್‌ ಚುನಾವಣಾ ರಣಕಹಳೆ - ಇಲ್ಲಿ ಶುರುವಾದ ರಾಜಕೀಯ ಕಾರ್ಯಕ್ಕೆ ಮಹಾ ತಿರುವು
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ