ಕನ್ನಡಪ್ರಭ ವಾರ್ತೆ ಬೆಂಗಳೂರು
ಹಾಸನ, ಮಂಡ್ಯ ಮತ್ತು ಕೋಲಾರ ಲೋಕಸಭಾ ಕ್ಷೇತ್ರಗಳನ್ನು ಜೆಡಿಎಸ್‌ಗೆ ಬಿಟ್ಟು ಕೊಡುವ ತೀರ್ಮಾನವಾಗಿದೆ ಎಂದು ಸ್ಪಷ್ಟವಾಗಿ ತಿಳಿಸಿರುವ ಬಿಜೆಪಿ ಚುನಾವಣಾ ಉಸ್ತುವಾರಿ ರಾಧಾಮೋಹನ್ ದಾಸ್ ಅಗರ್‌ವಾಲ್, ಮಂಡ್ಯದ ಹಾಲಿ ಸಂಸದೆ ಸುಮಲತಾ ಅಂಬರೀಷ್ ಅವರ ರಾಜಕೀಯ ಭವಿಷ್ಯ ಉತ್ತಮವಾಗಿರಲಿದೆ ಎಂದು ಹೇಳಿದ್ದಾರೆ.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಮಲತಾ ಅವರು ಮಂಡ್ಯದ ಬಗ್ಗೆ ಇನ್ನೂ ತೀರ್ಮಾನ ಆಗಿಲ್ಲ ಎಂಬುದಾಗಿ ಹೇಳಿದ್ದು ಆಗ ಸತ್ಯ ಆಗಿತ್ತು.
ಈಗ ಜೆಡಿಎಸ್‌ಗೆ ಬಿಟ್ಟು ಕೊಡುವ ಬಗ್ಗೆ ನಿರ್ಧಾರವಾಗಿದೆ. ಇದರಲ್ಲಿ ಸುಮಲತಾ ಅವರ ಪಾತ್ರ ಬಹಳ ದೊಡ್ಡದಿದೆ ಎಂದರು.ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಕೋಲಾರದ ಹಾಲಿ ಸಂಸದ ಮುನಿಸ್ವಾಮಿ ನಮ್ಮ ಪಕ್ಷದ ನಿಷ್ಠಾವಂತ ಕಾರ್ಯಕರ್ತ.
ಅತ್ಯಂತ ಸಮರ್ಪಣಾ ಭಾವದ ವ್ಯಕ್ತಿ. ಅವರ ರಾಜಕೀಯ ಭವಿಷ್ಯದ ಬಗ್ಗೆಯೂ ಯೋಚನೆ ಮಾಡುತ್ತೇವೆ ಎಂದರು.ಮತ್ತೊಂದು ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಚುನಾವಣೆ ಪ್ರಚಾರ ಆರಂಭ ಆದಮೇಲೆ ಜೆಡಿಎಸ್ ಹಾಗೂ ಬಿಜೆಪಿ ನಾಯಕರು ಒಟ್ಟಾಗಿ ಕೆಲಸ ಮಾಡುತ್ತಾರೆ.
ಜೆಡಿಎಸ್ ವರಿಷ್ಠರಾದ ಎಚ್.ಡಿ.ದೇವೇಗೌಡ ಹಾಗೂ ಎಚ್.ಡಿ.ಕುಮಾರಸ್ವಾಮಿ ಅವರು ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಇದ್ದಾರೆ ಎಂದು ಹೇಳಿದರು.
ಪ್ರಧಾನಿ ಮೋದಿ ಅವರು ಕರ್ನಾಟಕವನ್ನು ಬಹಳ ಪ್ರೀತಿಸುತ್ತಾರೆ. ಈಗಾಗಲೇ ಎರಡು ಸಮಾವೇಶಗಳನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಮತ್ತೆ ಮತ್ತೆ ಬರಬೇಕು ಎಂಬ ಮನವಿ ಮಾಡುತ್ತೇವೆ.
ಕೇವಲ ಎರಡು ದಿನದ ತಯಾರಿಯಲ್ಲಿ ಬಹಳ ಅದ್ಭುತವಾಗಿ ಮೋದಿ ಕಾರ್ಯಕ್ರಮ ನಡೆದಿದೆ. ಇನ್ನೂ ಆರು ಬಾರಿ ಮೋದಿ ರಾಜ್ಯಕ್ಕೆ ಬರುವ ನಿರೀಕ್ಷ ಇದೆ ಎಂದರು.