ಕೆಪಿಸಿಸಿ ಅಧ್ಯಕ್ಷ ಸ್ಥಾನ : ಸತೀಶ ಪರಂ, ಹರಿ ಮಧ್ಯೆ ಪೈಪೋಟಿ

Published : May 31, 2026, 08:32 AM IST
cm siddaramaiah parameshwar DK shivakumar

ಸಾರಾಂಶ

ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷನ ಆಯ್ಕೆ ಇದೀಗ ಗೋಜಲಾಗಿದೆ.ಕೆಪಿಸಿಸಿ ಹಾಲಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನೂತನ ನಾಯಕನಾಗಿ ಆಯ್ಕೆ ಆಗಿರುವ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡಲಿದ್ದಾರೆ

  ಬೆಂಗಳೂರು :  ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷನ ಆಯ್ಕೆ ಇದೀಗ ಗೋಜಲಾಗಿದೆ.

ಕೆಪಿಸಿಸಿ ಹಾಲಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನೂತನ ನಾಯಕನಾಗಿ ಆಯ್ಕೆ ಆಗಿರುವ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡಲಿದ್ದಾರೆ. ಇವರಿಂದ ತೆರವಾಗಲಿರುವ ಕೆಪಿಸಿಸಿ ಅಧ್ಯಕ್ಷ ಹುದ್ದೆ ಪಡೆದು ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷ ಮುನ್ನಡೆಸಲು ಕೆಲ ನಾಯಕರ ನಡುವೆ ಪೈಪೋಟಿ ಶುರುವಾಗಿದೆ.

ಇದೀಗ ಪ್ರಬಲವಾಗಿ ಕೇಳಿ ಬರುತ್ತಿದೆ ಹೆಸರು

ಈ ಸ್ಪರ್ಧೆಯಲ್ಲಿ ನಾಯಕ ಸಮುದಾಯದ ಮಾಜಿ ಸಚಿವ ಸತೀಶ್‌ ಜಾರಕಿಹೊಳಿ, ಪರಿಶಿಷ್ಟ ಜಾತಿಗೆ ಸೇರಿದ ಮಾಜಿ ಸಚಿವ ಡಾ। ಜಿ.ಪರಮೇಶ್ವರ್‌ ಮತ್ತು ವಿಧಾನ ಪರಿಷತ್ತಿನ ಸದಸ್ಯ ಹಿಂದುಳಿದ ವರ್ಗಕ್ಕೆ ಸೇರಿದ ಬಿ.ಕೆ.ಹರಿಪ್ರಸಾದ್‌ ಹೆಸರು ಇದೀಗ ಪ್ರಬಲವಾಗಿ ಕೇಳಿ ಬರುತ್ತಿದೆ. ಹೈಕಮಾಂಡ್‌ ಯಾರಿಗೆ ಮಣೆ ಹಾಕಲಿದೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

ಒಬ್ಬ ವ್ಯಕ್ತಿಗೆ ಒಂದೇ ಹುದ್ದೆ ನಿಯಮ

ಸತೀಶ್‌ ಜಾರಕಿಹೊಳಿ ಮತ್ತು ಡಾ। ಜಿ.ಪರಮೇಶ್ವರ್‌ ಅವರು ಕೆಪಿಸಿಸಿ ಅಧ್ಯಕ್ಷ ಹುದ್ದೆ ಜೊತೆಗೆ ಸಚಿವ ಸ್ಥಾನಕ್ಕೂ ಬೇಡಿಕೆ ಇರಿಸಿದ್ದಾರೆ. ಆದರೆ, ಕಾಂಗ್ರೆಸ್‌ನ ಹೈಕಮಾಂಡ್‌ ಒಬ್ಬ ವ್ಯಕ್ತಿಗೆ ಒಂದೇ ಹುದ್ದೆ ನಿಯಮ ಮಾಡಿದರೆ, ಈ ಇಬ್ಬರೂ ನಾಯಕರ ಬೇಡಿಕೆ ಈಡೇರಿಕೆ ಕಷ್ಟಸಾಧ್ಯ ಎನ್ನಲಾಗುತ್ತಿದೆ. ಈ ಹಿಂದೆ ಡಾ। ಜಿ.ಪರಮೇಶ್ವರ್‌ ಕೆಪಿಸಿಸಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ.

ಆದರೆ, ಪರಮೇಶ್ವರ್ ಅವರಿಗೆ ಸಚಿವರಾಗುವ ಆಕಾಂಕ್ಷೆ ತೀವ್ರವಾಗಿದೆ ಎನ್ನಲಾಗಿದೆ. ಕೆಪಿಸಿಸಿ ಅಧ್ಯಕ್ಷ ಹುದ್ದೆಗೆ ಕಾಂಗ್ರೆಸ್‌ನ ಮತ್ತೊಬ್ಬ ಹಿರಿಯ ನಾಯಕ, ವಿಧಾನ ಪರಿಷತ್ತಿನ ಸದಸ್ಯ ಬಿ.ಕೆ.ಹರಿಪ್ರಸಾದ್‌ ಅವರ ಹೆಸರು ಪ್ರಬಲವಾಗಿ ಕೇಳಿ ಬರುತ್ತಿದೆ. ಈ ನಡುವೆ ಬಿ.ಕೆ.ಹರಿಪ್ರಸಾದ್‌ ಅವರು ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದಾರೆ. ಕಾಂಗ್ರೆಸ್‌ ಹೈಕಮಾಂಡ್‌ ಹರಿಪ್ರಸಾದ್‌ ಅವರ ಹಿರಿತನ, ರಾಜಕೀಯ ಅನುಭವ, ಸಂಘಟನಾ ಚತುರತೆಗೆ ಮನ್ನಣೆ ಕೊಟ್ಟು ರಾಜ್ಯದಲ್ಲಿ ಪಕ್ಷ ಸಂಘಟಿಸಲು ಕೆಪಿಸಿಸಿ ಅಧ್ಯಕ್ಷನ ಹುದ್ದೆ ನೀಡುವ ಸಾಧ್ಯತೆ ಬಗ್ಗೆಯೂ ಚರ್ಚೆಗಳು ನಡೆದಿವೆ.

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.
Read more Articles on

Recommended Stories

ಮೊದಲ ಹಂತದಲ್ಲೇ ಸಂಪುಟಕ್ಕೆ ಸೇರಲು ಭರ್ಜರಿ ಲಾಬಿ ಶುರು - 2ನೇ ಹಂತ ತಡವಾಗುತ್ತೆಂಬ ಕಾರಣ
ಸರ್ಕಾರಕ್ಕೆ ಮಾರ್ಗದರ್ಶನ ನೀಡಲು ಸಿದ್ದು ನೇತೃತ್ವದಲ್ಲಿ ಕೋರ್‌ ಕಮಿಟಿ?