ಶಿವಮೊಗ್ಗ : ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ, ಅವರ ಪುತ್ರ ಹಾಗೂ ಸೊಸೆ ವಿರುದ್ಧ 2012ರಲ್ಲಿ ದಾಖಲಾಗಿದ್ದ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಲೋಕಾಯುಕ್ತ ಪೊಲೀಸರು ಎಫ್ಐಆರ್ ದಾಖಲಿಸಿದ್ದು, ತನಿಖೆ ಆರಂಭಿಸಿದ್ದಾರೆ.
ಶಿವಮೊಗ್ಗದ ವಕೀಲ ವಿನೋದ್ ಎಂಬುವರು ಈ ಸಂಬಂಧ ಸಲ್ಲಿಸಿದ್ದ ದೂರು ಆಧರಿಸಿ, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಈಶ್ವರಪ್ಪ ಕುಟುಂಬದ ವಿರುದ್ಧ ತನಿಖೆಗೆ ಆದೇಶ ನೀಡಿತ್ತು. ಅದರಂತೆ ಬುಧವಾರ ಎಫ್‌ಐಆರ್ ದಾಖಲಿಸಿದ್ದು, ತಮ್ಮ ದೂರಿಗೆ ಸಂಬಂಧಿಸಿದ ಸೂಕ್ತ ದಾಖಲಾತಿಗಳೊಂದಿಗೆ ಶುಕ್ರವಾರ ಬೆಳಗ್ಗೆ 11ಕ್ಕೆ ಶಿವಮೊಗ್ಗದ ಲೋಕಾಯುಕ್ತ ಪೊಲೀಸ್ ಠಾಣೆಗೆ ಬರುವಂತೆ ವಕೀಲ್ ವಿನೋದ್ ಅವರಿಗೆ ಪೊಲೀಸರು ನೋಟಿಸ್ ನೀಡಿದ್ದಾರೆ.ಪ್ರಕರಣವೇನು?:
ಶಿವಮೊಗ್ಗದ ವಕೀಲ ವಿನೋದ್ ಅವರು 2012ರಲ್ಲಿ ಈಶ್ವರಪ್ಪ ಕುಟುಂಬದ ವಿರುದ್ಧ ಅಕ್ರಮ ಆಸ್ತಿ ಗಳಿಕೆಗೆ ಸಂಬಂಧಿಸಿ ದೂರು ಸಲ್ಲಿಸಿದ್ದರು. ಈ ದೂರಿನ ತನಿಖೆ ನಡೆಸಿದ್ದ ಲೋಕಾಯುಕ್ತ ಪೊಲೀಸರು ನ್ಯಾಯಾಲಯಕ್ಕೆ ‘ಬಿ’ ರಿಪೋರ್ಟ್ ಸಲ್ಲಿಸಿದ್ದರು. ಇದನ್ನು ಪ್ರಶ್ನಿಸಿ ವಿನೋದ್ ಅವರು ಶಿವಮೊಗ್ಗ ಲೋಕಾಯುಕ್ತ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದ್ದರು. ನ್ಯಾಯಾಲಯ ಮೇಲ್ಮನವಿಯನ್ನು ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿ ವಿನೋದ್ ಅವರು, ಹೈಕೋರ್ಟ್ ಮೊರೆ ಹೋಗಿದ್ದರು. ಹೈಕೋರ್ಟ್ ಸಹ ವಿನೋದ್ ಅವರ ಮೇಲ್ಮನವಿಯನ್ನು ವಜಾಗೊಳಿಸಿತ್ತು.
ನಂತರ, ಹೈಕೋರ್ಟ್ ನಿರ್ದೇಶನದ ಮೇರೆಗೆ ಈ ಪ್ರಕರಣ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ದಾಖಲಾಗಿತ್ತು. ಅರ್ಜಿಯ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ನ್ಯಾಯಾಲಯ, ಈಶ್ವರಪ್ಪ ಕುಟುಂಬದ ವಿರುದ್ಧ ತನಿಖೆ ನಡೆಸುವಂತೆ ಆದೇಶಿಸಿತ್ತು. ಇದೀಗ ಜನಪ್ರತಿನಿಧಿಗಳ ನ್ಯಾಯಾಲಯದ ಆದೇಶದಂತೆ ಶಿವಮೊಗ್ಗ ಲೋಕಾಯುಕ್ತ ಪೊಲೀಸರು ಈಶ್ವರಪ್ಪ, ಅವರ ಪುತ್ರ ಕೆ.ಇ.ಕಾಂತೇಶ್ ಹಾಗೂ ಸೊಸೆ ಆರ್.ಶಾಲಿನಿ ವಿರುದ್ಧ ಬುಧವಾರ ಎಫ್ಐಆರ್ ದಾಖಲಿಸಿ, ತನಿಖೆ ಕೈಗೊಂಡಿದ್ದಾರೆ. ಯಾವ ಕಾಲಂ:
ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆ-1988ರ 13(1)(d) 2 13(1)(e) ಕಲಂ 120(B) ಮತ್ತು 420ರ ಅಡಿಯಲ್ಲಿ ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಪೂರಕ ದಾಖಲೆಗಳೊಂದಿಗೆ ಶುಕ್ರವಾರ ಬೆಳಗ್ಗೆ 11ಕ್ಕೆ ಶಿವಮೊಗ್ಗದ ಲೋಕಾಯುಕ್ತ ಪೊಲೀಸ್ ಠಾಣೆಗೆ ಬರುವಂತೆ ವಿನೋದ್ ಅವರಿಗೆ ನೋಟಿಸ್ ನೀಡಲಾಗಿದೆ.