;Resize=(412,232))
ಬೆಂಗಳೂರು : ಪಂಚ ರಾಜ್ಯ ಚುನಾವಣೆಗಳ ಬಳಿಕ ಪ್ರಧಾನಿ ಮೋದಿ ಅವರು ಭಾನುವಾರ ಬೆಳಗ್ಗೆ ಕರ್ನಾಟಕಕ್ಕೆ ಆಗಮಿಸುತ್ತಿದ್ದು, ಬೆಂಗಳೂರಿನಲ್ಲಿ ನಡೆಯುವ ಎರಡು ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.
ಪುದುಚೇರಿ, ಪಶ್ಚಿಮ ಬಂಗಾಳ ಮತ್ತು ಅಸ್ಸಾಂ ರಾಜ್ಯಗಳಲ್ಲಿ ಬಿಜೆಪಿ ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿಯಿಂದ ಪ್ರಧಾನಿ ಮೋದಿ ಅವರಿಗೆ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಬೆಳಗ್ಗೆ 9ಕ್ಕೆ ಎಚ್‌ಎಎಲ್ ವಿಮಾನ ನಿಲ್ದಾಣದ ಬಳಿ ಈ ಸಮಾರಂಭ ನಡೆಯಲಿದೆ. ಈ ವೇಳೆ ಪ್ರಧಾನಿ ಮೋದಿಗೆ ಅವರಿಗೆ ಮೈಸೂರು ಪೇಟ, ರೇಷ್ಮೆ ಶಾಲು ಹೊದಿಸಿ ಸನ್ಮಾನಿಸಲಾಗುತ್ತದೆ. ಮೋದಿ ಅವರು ಸುಮಾರು ಅರ್ಧ ತಾಸು ಭಾಷಣ ಮಾಡಲಿದ್ದಾರೆ.
ಬಳಿಕ ಕನಕಪುರ ರಸ್ತೆ ಆರ್ಟ್ ಆಫ್ ಲಿವಿಂಗ್ ಇಂಟರ್ ನ್ಯಾಷನಲ್ ಸೆಂಟರ್‌ನಲ್ಲಿ ಹೊಸದಾಗಿ ನಿರ್ಮಿಸಲಾಗಿರುವ ಧ್ಯಾನ ಮಂದಿರ ಉದ್ಘಾಟಿಸಲಿದ್ದಾರೆ. ಈ ಎರಡೂ ಕಾರ್ಯಕ್ರಮಗಳ ಬಳಿಕ ಪ್ರಧಾನಿ ಮೋದಿ ಅವರು ವಿಶೇಷ ವಿಮಾನದಲ್ಲಿ ತೆಲಂಗಾಣಕ್ಕೆ ತೆರಳಿದ್ದಾರೆ.
ಎಚ್‌ಎಎಲ್ ವಿಮಾನ ನಿಲ್ದಾಣದ ಬಳಿ ನಡೆಯುವ ಅಭಿನಂದನಾ ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಡಿ.ವಿ.ಸದಾನಂದ ಗೌಡ, ಜಗದೀಶ್ ಶೆಟ್ಟರ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಶೋಭಾ ಕರಂದ್ಲಾಜೆ, ವಿ.ಸೋಮಣ್ಣ, ರಾಜ್ಯ ಬಿಜೆಪಿ ಉಸ್ತುವಾರಿ ಡಾ। ರಾಧಾಮೋಹನ್ ದಾಸ್ ಅಗರ್ವಾಲ್, ಮಾಜಿ ಸಚಿವ ಅರವಿಂದ ಲಿಂಬಾವಳಿ ಸೇರಿ ಹಲವು ನಾಯಕರು ಹಾಗೂ ಮುಖಂಡರು ಉಪಸ್ಥಿತರಿರಲಿದ್ದಾರೆ. ಅಂತೆಯೇ ಸುಮಾರು 15 ಸಾವಿರ ಕಾರ್ಯಕರ್ತರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.