ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ನೀಡಿರುವ ಅನುಮತಿಯನ್ನು ಪ್ರಶ್ನಿಸಿ, ಸಿಎಂ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ಅರ್ಜಿಗೆ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ.
ಬೆಂಗಳೂರು : ರಾಜ್ಯ ರಾಜಕಾರಣವನ್ನು ತುದಿಗಾಲಿನಲ್ಲಿ ನಿಲ್ಲಿಸಿರುವ ಮುಡಾ ಪ್ರಕರಣ ಕುರಿತು ತನಿಖೆ ನಡೆಸಲು ರಾಜ್ಯಪಾಲರು ನೀಡಿರುವ ಅನುಮತಿ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ.
ಮುಡಾ ಹಗರಣ ಕುರಿತಂತೆ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ನೀಡಿರುವ ಅನುಮತಿ ಆಧರಿಸಿ ಆ.29ರವರೆಗೆ ಆತುರದ ಕ್ರಮ ಜರುಗಿಸಬಾರದು ಎಂದು ಕೆಳ ನ್ಯಾಯಾಲಯಗಳು ಹಾಗೂ ಲೋಕಾಯುಕ್ತಕ್ಕೆ ಸೂಚಿಸಿ ಸೋಮವಾರ ಮಧ್ಯಂತರ ಆದೇಶ ನೀಡಿದೆ.
ಇದರಿಂದಾಗಿ ಪ್ರಕರಣದ ಕುರಿತು ವಿಶೇಷ ತನಿಖಾ ದಳ ಅಥವಾ ಬೇರೆ ಯಾವುದೇ ಸ್ವತಂತ್ರ ತನಿಖಾ ಸಂಸ್ಥೆಯಿಂದ ತನಿಖೆಗೆ ಆದೇಶಿಸಬೇಕು ಎಂದು ಕೋರಿ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ದಾಖಲಿಸಿದ್ದ ದೂರನ್ನು ವಿಚಾರಣೆ ನಡೆಸಿ ಕಾಯ್ದಿಸಿರುವ ತೀರ್ಪನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಮಂಗಳವಾರ ಪ್ರಕಟಿಸುವುದಕ್ಕೆ ತಾತ್ಕಾಲಿಕ ತಡೆ ಬಿದ್ದಿದೆ. ಅಲ್ಲದೆ, ಟಿ.ಜೆ.ಅಬ್ರಹಾಂ ಅವರು ದಾಖಲಿಸಿರುವ ದೂರಿನ ಕುರಿತಂತೆ ಮುಂದಿನ ಕ್ರಮ ಜರುಗಿಸಲು ಮೈಸೂರಿನ ಲೋಕಾಯುಕ್ತ ಪೊಲೀಸರಿಗೆ ಅವಕಾಶ ಇಲ್ಲದಂತಾಗಿದೆ. ಹಾಗಾಗಿ, ಮುಂದಿನ 10 ದಿನಗಳ ಕಾಲ ಸಿದ್ದರಾಮಯ್ಯ ನಿರಾಳರಾಗಿದ್ದಾರೆ.
ರಾಜ್ಯಪಾಲರ ಅನುಮತಿ ರದ್ದುಪಡಿಸುವಂತೆ ಕೋರಿ ಸಿಎಂ ಸಿದ್ದರಾಮಯ್ಯ ಅವರು ಹೈಕೋರ್ಟ್‌ನಲ್ಲಿ ಸೋಮವಾರ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ ಈ ಆದೇಶ ಮಾಡಿದೆ.
ಆದೇಶದಲ್ಲಿ ಏನಿದೆ?:
ರಾಜ್ಯಪಾಲರ ಆದೇಶ ಪ್ರಶ್ನಿಸಿ ಸಿದ್ದರಾಮಯ್ಯ ಅವರು ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯನ್ನು ಪರಿಗಣಿಸಬೇಕಿದೆ. ಎಲ್ಲಾ ಪಕ್ಷಗಾರರ ವಾದ-ಪ್ರತಿವಾದ ಆಲಿಸಬೇಕಿದೆ. ಪೂರ್ವಾನುಮತಿ ಇಲ್ಲದೆಯೇ ಮುಖ್ಯಮಂತ್ರಿಯವರ ವಿರುದ್ಧ ತನಿಖೆ/ಪ್ರಾಸಿಕ್ಯೂಷನ್‌ಗೆ ಆದೇಶಿಸಲು ಕೋರಿರುವ ದೂರನ್ನು ವಿಚಾರಣೆಗೆ ಅಂಗೀಕರಿಸಬೇಕೇ ಅಥವಾ ಬೇಡವೇ ಎಂಬ ಬಗೆಗಿನ ತೀರ್ಪನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಆ.20ಕ್ಕೆ (ಮಂಗಳವಾರ) ಕಾಯ್ದಿರಿಸಿದೆ. ಈ ಮಧ್ಯೆ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ. ಇಂತಹ ಸಂದರ್ಭದಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಮಂಗಳವಾರ ಆದೇಶವನ್ನು ಪ್ರಕಟಿಸಿದರೆ, ಈ ಅರ್ಜಿ ಕುರಿತು ಹೈಕೋರ್ಟ್ ಪ್ರಕ್ರಿಯೆ ನಿಷ್ಪಲವಾಗುತ್ತದೆ ಎಂದು ಪೀಠ ಅಭಿಪ್ರಾಯಪಟ್ಟಿದೆ.
ಅಲ್ಲದೆ, ಮುಖ್ಯಮಂತ್ರಿಗಳ ವಿರುದ್ಧದ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ನೀಡಿರುವ ಅನುಮತಿಗೆ ನಿರ್ಬಂಧಕಾಜ್ಞೆ ವಿಧಿಸಬಾರದು ಎಂದು ರಾಜ್ಯಪಾಲರ ಕಚೇರಿಯ ವಿಶೇಷ ಕಾರ್ಯದರ್ಶಿ ಹಾಗೂ ದೂರುದಾರರ ಪರ ವಕೀಲರು ಬಲವಾಗಿ ಕೋರಿದ್ದಾರೆ. ಆದ್ದರಿಂದ ಜನಪ್ರತಿನಿಧಿಗಳ ನ್ಯಾಯಾಲಯವು ತನ್ನ ಮುಂದಿರುವ ದೂರಿಗೆ ಸಂಬಂಧಿಸಿದ ಪ್ರಕ್ರಿಯೆಯನ್ನು ಮುಂದೂಡಬೇಕು ಮತ್ತು ಪ್ರಾಸಿಕ್ಯೂಷನ್ ಪೂರ್ವಾನುಮತಿ ಆಧರಿಸಿ ಆತುರದ ಕ್ರಮ ಜರುಗಿಸಬಾರದು ಎಂದು ನಿರ್ದೇಶಿಸುವುದು ಸೂಕ್ತವಾಗುತ್ತದೆ ಎಂದು ಹೈಕೋರ್ಟ್ ಆದೇಶದಲ್ಲಿ ವಿವರಿಸಿದೆ.
ಜೊತೆಗೆ, ಅರ್ಜಿಯಲ್ಲಿ ಪ್ರತಿವಾದಿಗಳಾದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ರಾಜ್ಯಪಾಲರ ಕಚೇರಿಯ ವಿಶೇಷ ಕಾರ್ಯದರ್ಶಿ ಹಾಗೂ ಪ್ರಕರಣದಲ್ಲಿ ರಾಜ್ಯಪಾಲರಿಂದ ಪ್ರಾಸಿಕ್ಯೂಷನ್‌ಗೆ ಅನುಮತಿ ಪಡೆದಿರುವ ಸಾಮಾಜಿಕ ಕಾರ್ಯಕರ್ತರಾದ ಟಿ.ಜೆ. ಅಬ್ರಹಾಂ, ಸ್ನೇಹಮಯಿ ಕೃಷ್ಣ ಮತ್ತು ಜೆಡಿಎಸ್ ಕಾನೂನು ಘಟಕದ ಅಧ್ಯಕ್ಷ ಎಸ್.ಪಿ.ಪ್ರದೀಪ್ ಕುಮಾರ್ ಅವರಿಗೆ ನೋಟಿಸ್ ಜಾರಿಗೊಳಿಸಿದೆ. ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಪ್ರತಿವಾದಿಗಳಿಗೆ ಸೂಚಿಸಿ, ವಿಚಾರಣೆಯನ್ನು ಆ.29ಕ್ಕೆ ಮುಂದೂಡಿದೆ.