ಮುಡಾ14 ಸೈಟ್‌ : ಸಿಎಂ ಸಿದ್ದರಾಮಯ್ಯ ವಿರುದ್ಧ ಕೋರ್ಟ್‌ಗೆ ಇನ್ನೊಂದು ಖಾಸಗಿ ದೂರು

ಸಾರಾಂಶ

ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಎದುರಾಗಿರುವ ಸಂಕಷ್ಟ ಮತ್ತಷ್ಟು ಜಟಿಲವಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಖಾಸಗಿ ದೂರು ದಾಖಲಾಗಿದೆ.

ಬೆಂಗಳೂರು :  ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಎದುರಾಗಿರುವ ಸಂಕಷ್ಟ ಮತ್ತಷ್ಟು ಜಟಿಲವಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಖಾಸಗಿ ದೂರು ದಾಖಲಾಗಿದೆ.

ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಎಂಬುವರು ಖಾಸಗಿ ದೂರು ಸಲ್ಲಿಸಿದ್ದಾರೆ. ದೂರನ್ನು ಸ್ವೀಕರಿಸಿರುವ ನ್ಯಾಯಾಲಯವು ವಿಚಾರಣೆಯನ್ನು ಶುಕ್ರವಾರಕ್ಕೆ ಮುಂದೂಡಿದೆ.

ಸಿದ್ದರಾಮಯ್ಯ ಅವರು ಅಧಿಕಾರ ದುರುಪಯೋಗಪಡಿಸಿಕೊಂಡು 14 ನಿವೇಶನಗಳನ್ನು ಪಡೆದುಕೊಂಡಿದ್ದಾರೆ. ಈ ಬಗ್ಗೆ ತನಿಖೆ ನಡೆಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಸರ್ಕಾರದ ವ್ಯಾಪ್ತಿಗೆ ಬಾರದ ಸ್ವತಂತ್ರ ತನಿಖಾ ಸಂಸ್ಥೆಯಿಂದ ಹಗರಣದ ತನಿಖೆ ನಡೆಸಲು ಆದೇಶಿಸಬೇಕು ಎಂದು ದೂರಿನಲ್ಲಿ ಮನವಿ ಮಾಡಿದ್ದಾರೆ.

ದೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಬಿ.ಎಂ.ಪಾರ್ವತಿ, ಭಾವ ಮೈದುನ ಮಲ್ಲಿಕಾರ್ಜುನ ಸ್ವಾಮಿ, ಜೆ.ದೇವರಾಜು ಮತ್ತು ಇತರರ ಹೆಸರು ದಾಖಲಿಸಿದ್ದು, ಇವರೆಲ್ಲರ ವಿರುದ್ಧ ಕ್ರಮಕ್ಕೆ ಕೋರಿದ್ದಾರೆ.

‘ನ್ಯಾಯಾಲಯಕ್ಕೆ ದೂರು ನೀಡಿದ್ದರೂ ರಾಜ್ಯಪಾಲರಿಂದ ಅಭಿಯೋಜನೆ ಪಡೆದುಕೊಂಡಿಲ್ಲ. ಈಗಾಗಲೇ ಮುಖ್ಯಮಂತ್ರಿಗಳ ವಿರುದ್ಧ ಅಭಿಯೋಜನಾ ಮಂಜೂರಾತಿ ಕೋರಿ ರಾಜ್ಯಪಾಲರಿಗೆ ಅರ್ಜಿ ಸಲ್ಲಿಸಲಾಗಿದೆ. ರಾಜ್ಯಪಾಲರ ಪರಿಗಣನೆಯಲ್ಲಿದ್ದು, ಅಭಿಯೋಜನಾ ಅನುಮತಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು’ ಎಂದು ಹೇಳಿದ್ದಾರೆ.

Share this article