;Resize=(412,232))
ಹಾರೋಹಳ್ಳಿ : ಬೆಂಗಳೂರು ದಕ್ಷಿಣ ಜಿಲ್ಲೆ ಹಾರೋಹಳ್ಳಿ ತಾಲೂಕಿನ ದೊಡ್ಡ ಕುರುಬರಹಳ್ಳಿ ಗ್ರಾಮದಲ್ಲಿ ಶುಕ್ರವಾರ ಉದ್ಘಾಟನೆ ಆಗಿರುವ ಬಿಸಿಲು ಮಾರಮ್ಮ ದೇವಸ್ಥಾನಕ್ಕೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರಿಗೆ ಪ್ರವೇಶ ನೀಡದೆ ಬೀಗ ಹಾಕಿ ದೇವಸ್ಥಾನದ ಹೊರಗೆ ನಿಲ್ಲಿಸಿ ಅವಮಾನ ಮಾಡಲಾಗಿದೆ ಎಂದು ಜೆಡಿಎಸ್ ಕಾರ್ಯಕರ್ತರು ಆರೋಪಿಸಿದ್ದು, ಈ ಸಂಬಂಧ ದೇವಸ್ಥಾನದ ಬಳಿ ಧರಣಿ ನಡೆಸಿದರು.
ನಿಖಿಲ್ ಅವರು ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಲು ಆಗಮಿಸಿದ ಸಂದರ್ಭದಲ್ಲಿ ದೇವಸ್ಥಾನದ ವಿದ್ಯುತ್ ಸಂಪರ್ಕ ಕಡಿತಗೊಳಿಸಿ, ದೇವಸ್ಥಾನದ ಬಾಗಿಲು ಮುಚ್ಚಲಾಗಿತ್ತು. ಇದರಿಂದ ಅವರು ದೇವಸ್ಥಾನದ ಒಳ ಪ್ರವೇಶಿಸಿ ಪೂಜೆ ಸಲ್ಲಿಸಲಾಗದೆ ದೇವಸ್ಥಾನದ ಹೊರಗಡೆಯೇ ನಿಂತು ಕೈಮುಗಿದು ವಾಪಸ್ ತೆರಳಿದ್ದಾರೆ ಎನ್ನಲಾಗಿದೆ.
ಇದು ಜೆಡಿಎಸ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಸಂಘರ್ಷಕ್ಕೆ ಕಾರಣವಾಗಿ, ಶನಿವಾರ ಕೈ-ಕೈ ಮಿಲಾಯಿಸುವ ಹಂತಕ್ಕೆ ತಲುಪಿತು. ಪರಿಣಾಮ ಸ್ಥಳದಲ್ಲಿ ಕೆಲಕಾಲ ಗೊಂದಲ ಹಾಗೂ ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು. ಘಟನೆಯನ್ನು ಖಂಡಿಸಿ ನೂರಾರು ಜೆಡಿಎಸ್ ಕಾರ್ಯಕರ್ತರು ಹಾಗೂ ಗ್ರಾಮಸ್ಥರು ದೇವಸ್ಥಾನದ ಮುಂದೆ ಜಮಾಯಿಸಿ ಧರಣಿ ನಡೆಸಿದರು.
ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿ ನಿಯಂತ್ರಿಸಿದರು. ಮುಂಜಾಗ್ರತಾ ಕ್ರಮವಾಗಿ ದೇವಸ್ಥಾನದ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.
ಘಟನೆ ಕುರಿತು ಶಾಸಕ ಇಕ್ಬಾಲ್ ಹುಸೇನ್ ಪ್ರತಿಕ್ರಿಯಿಸಿ, ದೇವಸ್ಥಾನಕ್ಕೆ ಬಂದವರಿಗೆ ಗೌರವ ನೀಡಬೇಕು. ದೇವಸ್ಥಾನಗಳು ಭಕ್ತಿ, ನಂಬಿಕೆ ಹಾಗೂ ಸೌಹಾರ್ದತೆಯ ಕೇಂದ್ರಗಳಾಗಿದ್ದು, ಅಲ್ಲಿ ಯಾವುದೇ ರೀತಿಯ ಭೇದಭಾವ ಅಥವಾ ಸಂಘರ್ಷಕ್ಕೆ ಅವಕಾಶ ನೀಡಬಾರದು. ಯಾರಿಗೂ ನೋವಾಗದಂತೆ ಸಮಸ್ಯೆಯನ್ನು ಶಾಂತಿಯುತವಾಗಿ ಬಗೆಹರಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.