ಮೈಸೂರಿಗೆ ವಿಪಕ್ಷಗಳ ಪಾದಯಾತ್ರೆ?

KannadaprabhaNewsNetwork | Published : Jul 25, 2024 1:24 AM

ಸಾರಾಂಶ

ಮೈಸೂರು ಅಭಿವೃದ್ಧಿ ಪ್ರಾಧಿಕಾರದ ನಿವೇಶನಗಳ ಅಕ್ರಮ ಹಂಚಿಕೆ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಜತೆಗೂಡಿ ಮೈಸೂರಿಗೆ ಪಾದಯಾತ್ರೆ ನಡೆಸುವ ಸಾಧ್ಯತೆ ಹೆಚ್ಚಾಗಿದೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ಮೈಸೂರು ಅಭಿವೃದ್ಧಿ ಪ್ರಾಧಿಕಾರದ ನಿವೇಶನಗಳ ಅಕ್ರಮ ಹಂಚಿಕೆ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಜತೆಗೂಡಿ ಮೈಸೂರಿಗೆ ಪಾದಯಾತ್ರೆ ನಡೆಸುವ ಸಾಧ್ಯತೆ ಹೆಚ್ಚಾಗಿದೆ.ಹಿಂದೆ 2010ರಲ್ಲಿ ಪ್ರತಿಪಕ್ಷದ ನಾಯಕರಾಗಿದ್ದ ಸಿದ್ದರಾಮಯ್ಯ ಅವರು ಅಂದಿನ ಬಿ.ಎಸ್‌.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಅವಧಿಯಲ್ಲಿನ ಗಣಿ ಹಗರಣದ ವಿರುದ್ಧ ಬೆಂಗಳೂರಿನಿಂದ ಬಳ್ಳಾರಿಗೆ ಪಾದಯಾತ್ರೆ ಮಾಡಿದ್ದರು. ಇದೀಗ 14 ವರ್ಷಗಳ ಬಳಿಕ ಅದೇ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣ ಮುಂದಿಟ್ಟುಕೊಂಡು ಯಡಿಯೂರಪ್ಪ ಪುತ್ರ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ನೇತೃತ್ವದಲ್ಲಿ ಪಾದಯಾತ್ರೆ ಹಮ್ಮಿಕೊಳ್ಳುವ ನಿರೀಕ್ಷೆಯಿದೆ.ಬುಧವಾರ ವಿಧಾನಮಂಡಲದ ಉಭಯ ಸದನಗಳಲ್ಲಿ ಮುಡಾ ಹಗರಣ ಪ್ರಸ್ತಾಪಕ್ಕೆ ಆಗ್ರಹಿಸಿ ಹೋರಾಟ ನಡೆಸಿದ ಪ್ರತಿಪಕ್ಷಗಳ ಸದಸ್ಯರು ಸಂಜೆ ಅಹೋರಾತ್ರಿ ಧರಣಿ ಆರಂಭಿಸಿದರು. ಇದೇ ವೇಳೆ ಉಭಯ ಪಕ್ಷಗಳ ನಾಯಕರ ಮಾತುಕತೆ ವೇಳೆ ಪಾದಯಾತ್ರೆ ಹಮ್ಮಿಕೊಳ್ಳುವ ಬಗ್ಗೆ ಚರ್ಚೆ ನಡೆದಿದ್ದು, ಗುರುವಾರ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ ಎಂದು ತಿಳಿದು ಬಂದಿದೆ.ಈಗ ಮುಂಚಿತವಾಗಿ ನಿಗದಿಯಾಗಿರುವಂತೆ ಅಧಿವೇಶನದ ಕಲಾಪ ಶುಕ್ರವಾರದವರೆಗೆ ನಡೆಯಲಿದೆ. ಆದರೆ, ಪ್ರತಿಪಕ್ಷಗಳ ಧರಣಿ ಹಿನ್ನೆಲೆಯಲ್ಲಿ ಗುರುವಾರವೇ ಅಂತ್ಯಗೊಳ್ಳುವ ಸಂಭವವನ್ನೂ ತಳ್ಳಿ ಹಾಕುವಂತಿಲ್ಲ. ಅದೇನೆ ಆಗಲಿ. ಬರುವ ಸೋಮವಾರದಿಂದ ಅಂದರೆ, ಜು.29ರಿಂದ ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ನಡೆಸುವ ಬಗ್ಗೆ ಚಿಂತನೆ ನಡೆದಿದೆ. ಈ ಸಂಬಂಧ ರೂಪುರೇಷೆ ಸಿದ್ಧಗೊಳ್ಳುತ್ತಿದೆ ಎಂದು ಮೂಲಗಳು ತಿಳಿಸಿವೆ.ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯಾದ ಬಳಿಕ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರಲ್ಲಿ ಉತ್ಸಾಹ ಹೆಚ್ಚಿದೆ. ಮೇಲಾಗಿ ಶೀಘ್ರದಲ್ಲೇ ಮೂರು ವಿಧಾನಸಭಾ ಕ್ಷೇತ್ರಗಳು ಹಾಗೂ ಒಂದು ವಿಧಾನಪರಿಷತ್ತಿನ ಕ್ಷೇತ್ರಕ್ಕೆ ಉಪಚುನಾವಣೆ ಘೋಷಣೆಯಾಗುವ ಸಾಧ್ಯತೆಯೂ ಇದೆ. ಹೀಗಾಗಿ, ಪಾದಯಾತ್ರೆ ಹಮ್ಮಿಕೊಳ್ಳುವುದು ಸೂಕ್ತ ಎಂಬ ಅಭಿಪ್ರಾಯವನ್ನು ಬಿಜೆಪಿ ಮತ್ತು ಜೆಡಿಎಸ್‌ನ ಬಹುತೇಕ ಶಾಸಕರು ವ್ಯಕ್ತಪಡಿಸಿದ್ದಾರೆ.ಪಾದಯಾತ್ರೆ ನಡೆಸುವುದರಿಂದ ಆಗಬಹುದಾದ ಸಾಧಕ ಬಾಧಕಗಳ ಬಗ್ಗೆ ಉಭಯ ಪಕ್ಷಗಳಲ್ಲಿ ಚರ್ಚೆ ನಡೆದಿದೆ. ನೇರವಾಗಿ ಸಿದ್ದರಾಮಯ್ಯ ಅವರನ್ನೇ ಗುರಿಯಾಗಿಸಿಕೊಂಡು ಅವರ ತವರು ಜಿಲ್ಲೆ ಮೈಸೂರಿಗೆ ಪಾದಯಾತ್ರೆ ಹಮ್ಮಿಕೊಳ್ಳಲು ಸಿಕ್ಕಿರುವ ಈ ಅವಕಾಶವನ್ನು ಬಳಸಿಕೊಳ್ಳಬೇಕು. ದೊಡ್ಡ ಮಟ್ಟದಲ್ಲಿ ಪಾದಯಾತ್ರೆ ಹಮ್ಮಿಕೊಂಡು ಯಶಸ್ವಿಗೊಳಿಸಬೇಕು ಎಂಬ ನಿಲವಿಗೆ ಬಂದಿದ್ದಾರೆ.ಈ ಬಗ್ಗೆ ಗುರುವಾರದ ಹೊತ್ತಿಗೆ ಉಭಯ ಪಕ್ಷಗಳ ರಾಷ್ಟ್ರೀಯ ನಾಯಕರು ಚರ್ಚಿಸಿದ ಬಳಿಕ ಅಂತಿಮ ನಿರ್ಣಯ ಹೊರಬೀಳುವ ಸಾಧ್ಯತೆಯಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

Share this article