ಮಂಡ್ಯ, ಕೋಲಾರದಲ್ಲಿ ಇಂದು ರಾಹುಲ್‌ ಅಬ್ಬರ

KannadaprabhaNewsNetwork |  
Published : Apr 17, 2024, 02:00 AM IST
ರಾಹುಲ್‌ ಗಾಂಧಿ | Kannada Prabha

ಸಾರಾಂಶ

ಪ್ರಧಾನಿ ನರೇಂದ್ರ ಮೋದಿ ಅವರ ಮೈಸೂರು, ಮಂಗಳೂರು ಭೇಟಿ ಬೆನ್ನಲ್ಲೇ ಪ್ರಸಕ್ತ ಲೋಕಸಭೆ ಚುನಾವಣೆ ಪ್ರಚಾರದ ಸಲುವಾಗಿ ಇದೇ ಮೊದಲ ಬಾರಿಗೆ ಬುಧವಾರ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ರಾಜ್ಯಕ್ಕೆ ಆಗಮಿಸಲಿದ್ದು, ಮಂಡ್ಯ ಹಾಗೂ ಕೋಲಾರದ ಮಾಲೂರಿನಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳ ಪರ ಅಬ್ಬರದ ಪ್ರಚಾರ ನಡೆಸಲಿದ್ದಾರೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ಪ್ರಧಾನಿ ನರೇಂದ್ರ ಮೋದಿ ಅವರ ಮೈಸೂರು, ಮಂಗಳೂರು ಭೇಟಿ ಬೆನ್ನಲ್ಲೇ ಪ್ರಸಕ್ತ ಲೋಕಸಭೆ ಚುನಾವಣೆ ಪ್ರಚಾರದ ಸಲುವಾಗಿ ಇದೇ ಮೊದಲ ಬಾರಿಗೆ ಬುಧವಾರ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ರಾಜ್ಯಕ್ಕೆ ಆಗಮಿಸಲಿದ್ದು, ಮಂಡ್ಯ ಹಾಗೂ ಕೋಲಾರದ ಮಾಲೂರಿನಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳ ಪರ ಅಬ್ಬರದ ಪ್ರಚಾರ ನಡೆಸಲಿದ್ದಾರೆ.

ಬುಧವಾರ ಮಧ್ಯಾಹ್ನ ಮಂಡ್ಯ ನಗರಕ್ಕೆ ಆಗಮಿಸಲಿರುವ ರಾಹುಲ್‌ಗಾಂಧಿ ಅವರು 2 ಗಂಟೆಗೆ ಮಂಡ್ಯ ವಿಶ್ವವಿದ್ಯಾಲಯ ಆವರಣದಲ್ಲಿ ನಡೆಯಲಿರುವ ‘ಪ್ರಜಾಧ್ವನಿ-2’ ಲೋಕಸಭಾ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಸೇರಿ ಹಲವು ರಾಜ್ಯ ನಾಯಕರು ಸಾಥ್ ಅವರಿಗೆ ನೀಡಲಿದ್ದಾರೆ.

ಮಂಡ್ಯದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಜೆಡಿಎಸ್‌-ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಹೀಗಾಗಿ ರಾಜ್ಯದ ಮಟ್ಟಿಗೆ ತೀವ್ರ ಹಣಾಹಣಿ ಏರ್ಪಟ್ಟಿರುವ ಮಂಡ್ಯ ಕ್ಷೇತ್ರದಲ್ಲೇ ರಾಹುಲ್‌ಗಾಂಧಿ ಅವರು ಲೋಕಸಭೆ ಚುನಾವಣೆ ಪ್ರಚಾರ ಆರಂಭಿಸುತ್ತಿದ್ದಾರೆ.

ಬಳಿಕ ಮಂಡ್ಯದಿಂದ ನೇರವಾಗಿ ಹೊಸಕೋಟೆಗೆ ಹೆಲಿಕಾಪ್ಟರ್‌ ಮೂಲಕ ತೆರಳಲಿರುವ ಅವರು ಮಾಲೂರಿನ ಚೊಕ್ಕಂಡಹಳ್ಳಿ ಗೇಟ್‌ ಬಳಿ ನಡೆಯಲಿರುವ ಪ್ರಜಾಧ್ವನಿ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.

ಕೆ.ಎಚ್.ಮುನಿಯಪ್ಪ ಹಾಗೂ ಕೆ.ಆರ್‌.ರಮೇಶ್‌ ಕುಮಾರ್ ನಡುವಿನ ಬಣ ತಿಕ್ಕಾಟದಿಂದ ಟಿಕೆಟ್‌ ಆಯ್ಕೆಯಲ್ಲಿ ತೀವ್ರ ಗೊಂದಲ ಉಂಟಾಗಿರುವ ಕೋಲಾರ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಕೆ.ವಿ.ಗೌತಮ್‌ ಪರ ರಾಹುಲ್‌ಗಾಂಧಿ ಮತ ಯಾಚನೆ ಮಾಡಲಿದ್ದಾರೆ.

ಈ ಬಗ್ಗೆ ಸುದ್ದಿಗಾರರಿಗೆ ಮಾಹಿತಿ ನೀಡಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ರಾಹುಲ್ ಗಾಂಧಿ ಅವರು ಬುಧವಾರ ಮಂಡ್ಯ ಹಾಗೂ ಕೋಲಾರಕ್ಕೆ ಭೇಟಿ ನೀಡುತ್ತಿದ್ದಾರೆ. ಬುಧವಾರ ಮಧ್ಯಾಹ್ನ 12.30ಕ್ಕೆ ರಾಜ್ಯಕ್ಕೆ ಆಗಮಿಸುತ್ತಿದ್ದು, ಮಧ್ಯಾಹ್ನ ಮಂಡ್ಯದ ಪ್ರಚಾರ ಸಭೆಯಲ್ಲಿ ಭಾಗವಹಿಸಲಿದ್ದಾರೆ. ನಂತರ ಕೋಲಾರ ಕ್ಷೇತ್ರಕ್ಕೆ ತೆರಳಿ ಅಲ್ಲಿಂದ ದೆಹಲಿಗೆ ಹೋಗುತ್ತಾರೆ ಎಂದು ಮಾಹಿತಿ ನೀಡಿದರು.

ಪ್ರಿಯಾಂಕಾ ಪ್ರಚಾರಕ್ಕೆ ದಿನ ಹೊಂದಾಣಿಕೆ: ಡಿಕೆಶಿ

ಪ್ರಿಯಾಂಕಾ ಗಾಂಧಿ ಅವರ ರಾಜ್ಯ ಪ್ರವಾಸದ ಬಗ್ಗೆ ಮಾತನಾಡಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಪ್ರಿಯಾಂಕಾ ಗಾಂಧಿ ಅವರು ರಾಜ್ಯದಲ್ಲಿ ಪ್ರಚಾರ ನಡೆಸಲು ಕೆಲವು ದಿನಾಂಕ ನೀಡಿದ್ದಾರೆ. ಅವರಿಗೆ ಬೇರೆ ರಾಜ್ಯಗಳಲ್ಲಿ ಪ್ರಚಾರದ ಒತ್ತಡವಿದೆ. ಹೀಗಾಗಿ ಅವರು ಕೊಟ್ಟಿರುವ ದಿನಾಂಕಗಳ ಸಮಯವನ್ನು ಹೊಂದಾಣಿಕೆ ಮಾಡುತ್ತಿದ್ದೇವೆ ಎಂದು ಹೇಳಿದರು.

ಮಂಡ್ಯಕ್ಕೆ ಮೂರನೇ ಭೇಟಿ

ರಾಹುಲ್ ಗಾಂಧಿ ಅವರು ಮಂಡ್ಯಕ್ಕೆ ಭೇಟಿ ನೀಡುತ್ತಿರುವುದು ಇದು ಮೂರನೇ ಬಾರಿ. ಈ ಹಿಂದೆ ೨೦೧೫ರ ಚುನಾವಣೆ ಸಮಯದಲ್ಲಿ ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ರಮ್ಯಾ ಪರ ರೋಡ್ ಶೋ ನಡೆಸಿದ್ದರು. ಆ ಬಳಿಕ ಭಾರತ್ ಜೋಡೋ ಯಾತ್ರೆ ಸಮಯದಲ್ಲಿ ಎರಡು ದಿನ ಮಂಡ್ಯದಲ್ಲಿ ಪಾದಯಾತ್ರೆ ನಡೆಸಿದ್ದರು. ಈಗಾಗಲೇ ಮಂಡ್ಯ ವಿವಿ ಆವರಣದಲ್ಲಿ ಸಮಾವೇಶಕ್ಕಾಗಿ ಬೃಹತ್ ವೇದಿಕೆ ನಿರ್ಮಿಸಲಾಗಿದ್ದು, ೧ ಲಕ್ಷ ಜನರನ್ನು ಸೇರಿಸಿ ಶಕ್ತಿ ಪ್ರದರ್ಶನಕ್ಕೆ ಸಿದ್ಧತೆ ನಡೆದಿದೆ.

ಇನ್ನು ಮಾಲೂರಿನಲ್ಲಿ ೨೦೧೮ರಲ್ಲೂ ರಾಹುಲ್ ಗಾಂಧಿ ಅವರು ಭೇಟಿ ನೀಡಿ ಚುನಾವಣಾ ಪ್ರಚಾರ ನಡೆಸಿದ್ದರು. ಮಾಲೂರಿನಲ್ಲೂ ರಾಹುಲ್‌ ಸಮಾವೇಶಕ್ಕೆ ಕೋಲಾರ-ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಒಂದು ಲಕ್ಷ ಕಾರ್ಯಕರ್ತರನ್ನು ಸೇರಿಸಲು ಕಾಂಗ್ರೆಸ್‌ ಉದ್ದೇಶಿಸಿದೆ.

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.

Recommended Stories

ಭಾಷಣ ಮಾಡಿಕೊಂಡು ಹೋದವನಲ್ಲ, ಪಕ್ಷದ ಎಲ್ಲಾ ಕೆಲ್ಸ ಮಾಡಿದ್ದೇನೆ: ಡಿಕೆಶಿ
ರಾಗಾ-ವೈಷ್ಣವ್‌ ಉದ್ಯೋಗ ಸೃಷ್ಟಿ ‘ಕ್ರೆಡಿಟ್‌ ವಾರ್’