ಬಸನಗೌಡ ಪಾಟೀಲ್ ಯತ್ನಾಳ್‌ ಉಚ್ಚಾಟನೆ ವಾಪಸ್‌ಗೆ ಮಹಾ ಸಿಎಂಗೆ ರಮೇಶ್‌ ಜಾರಕಿಹೊಳಿ ಮನವಿ

Published : Apr 04, 2025, 09:20 AM ISTUpdated : Apr 04, 2025, 09:21 AM IST
ramesh jarkiholi, mla yatnal

ಸಾರಾಂಶ

  ಯತ್ನಾಳ್‌ ಅವರನ್ನು ಬಿಜೆಪಿಯಿಂದ ಉಚ್ಚಾಟನೆ ಮಾಡಿರುವ ಬೆನ್ನ ಹಿಂದೆಯೇ ಅವರ ಬಂಡಾಯ ಬಣದಲ್ಲಿ ಗುರುತಿಸಿಕೊಂಡಿರುವ  ರಮೇಶ್‌ ಜಾರಕಿಹೊಳಿ  ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್‌   ಮುಂಬೈನಲ್ಲಿ  ಭೇಟಿಯಾಗಿ ರಾಜ್ಯ ಬಿಜೆಪಿಯಲ್ಲಿನ ಬೆಳವಣಿಗೆ ಕುರಿತು ಚರ್ಚೆ ನಡೆಸಿದ್ದಾರೆ.

ಬೆಳಗಾವಿ: ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ಅವರನ್ನು ಬಿಜೆಪಿಯಿಂದ ಉಚ್ಚಾಟನೆ ಮಾಡಿರುವ ಬೆನ್ನ ಹಿಂದೆಯೇ ಯತ್ನಾಳ ಅವರ ಬಂಡಾಯ ಬಣದಲ್ಲಿ ಗುರುತಿಸಿಕೊಂಡಿರುವ ಮಾಜಿ ಸಚಿವ, ಗೋಕಾಕ ಶಾಸಕ ರಮೇಶ್‌ ಜಾರಕಿಹೊಳಿ ಅವರು ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್‌ ಅವರನ್ನು ಮುಂಬೈನಲ್ಲಿ ಬುಧವಾರ ಭೇಟಿಯಾಗಿ ರಾಜ್ಯ ಬಿಜೆಪಿಯಲ್ಲಿನ ಬೆಳವಣಿಗೆ ಕುರಿತು ಚರ್ಚೆ ನಡೆಸಿದ್ದಾರೆ. 

ತಮ್ಮ ಬಣದ ನಾಯಕ, ಯತ್ನಾಳ್‌ ಅವರು ಪಕ್ಷದ ಹಿರಿಯ ನಾಯಕರಾಗಿದ್ದು, ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಿರುವುದು ದುರ್ದೈವದ ಸಂಗತಿ. ಅವರನ್ನು ಪಕ್ಷದಲ್ಲಿಯೇ ಮುಂದುವರಿಸುವ ಅನಿವಾರ್ಯತೆಯಿದೆ. ತಟಸ್ಥ ಬಣದಲ್ಲಿ ಗುರುತಿಸಿಕೊಂಡಿರುವ ನಾಯಕರು ನಮ್ಮ ಜತೆಗಿದ್ದಾರೆ. ಯತ್ನಾಳ್‌ ಅವರ ಉಚ್ಚಾಟನೆ ಆದೇಶವನ್ನು ವಾಪಸ್‌ ಪಡೆಯುವಂತೆ ಪಕ್ಷದ ವರಿಷ್ಠರ ಮೇಲೆ ಒತ್ತಡ ಹೇರುವಂತೆ ಜಾರಕಿಹೊಳಿ ಮಹಾರಾಷ್ಟ್ರ ಸಿಎಂ ಫಡ್ನವೀಸ್‌ ಅವರಿಗೆ ಮನವಿ ಮಾಡಿದ್ದಾರೆ ಎಂದು ಅವರ ಆಪ್ತ ವಲಯದಿಂದ ತಿಳಿದು ಬಂದಿದೆ.

ಮಾತ್ರವಲ್ಲ, ಈಗ ಬಿಜೆಪಿ ರಾಜ್ಯಾಧ್ಯಕ್ಷರಾಗಿರುವ ಬಿ.ವೈ.ವಿಜಯೇಂದ್ರ ಅವರನ್ನು ಆ ಹುದ್ದೆಯಿಂದ ಕೆಳಗಿಳಿಸಿ ಅನುಭವದ ಆಧಾರದ ಮೇಲೆ ಮತ್ತೊಬ್ಬರನ್ನು ನೇಮಿಸಲು ವರಿಷ್ಠರ ಮೇಲೆ ಒತ್ತಡ ಹಾಕುವಂತೆ ಕೇಳಿಕೊಂಡಿದ್ದಾರೆ. ಪಕ್ಷದಲ್ಲಿ ಆಗಿರುವ ತಪ್ಪುಗಳನ್ನು ಸರಿಪಡಿಸುವಂತೆ ಮನವಿ ಮಾಡಿದ್ದಾರೆ ಎಂದು ಮೂಲಗಳು ಹೇಳಿವೆ.

ತರಾತುರಿಯಲ್ಲೇ ದೇವೇಂದ್ರ ಫಡ್ನವೀಸ್‌ ಅವರ ಭೇಟಿಯಾಗಿರುವುದರಿಂದ ರಾಜ್ಯ ರಾಜಕೀಯ ಬೆಳವಣಿಗೆ ಕುರಿತು ಸುದೀರ್ಘವಾಗಿ ಚರ್ಚೆಗೆ ಅವಕಾಶ ಸಿಗಲಿಲ್ಲ. ಹಾಗಾಗಿ, ಶೀಘ್ರವೇ ಮತ್ತೊಮ್ಮೆ ದೇವೇಂದ್ರ ಫಡ್ನವೀಸ್‌ ಅವರನ್ನು ಭೇಟಿಯಾಗಲು ರಮೇಶ ಜಾರಕಿಹೊಳಿ ನಿರ್ಧರಿಸಿದ್ದಾರೆ ಎನ್ನಲಾಗಿದೆ. ಮಂಗಳವಾರವೇ ರಮೇಶ ಜಾರಕಿಹೊಳಿ ಅವರು ನಾಗಪುರಕ್ಕೆ ತೆರಳಿ, ಫಡ್ನವೀಸ್‌ ಅವರನ್ನು ಭೇಟಿಯಾಗಲು ಮುಂದಾಗಿದ್ದರು. ಆದರೆ, ಅವರು ಸಿಗದಿರುವ ಹಿನ್ನೆಲೆಯಲ್ಲಿ ಬುಧವಾರ ಮಧ್ಯಾಹ್ನ ಭೇಟಿಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆದರೆ, ಶಾಸಕ ರಮೇಶ ಜಾರಕಿಹೊಳಿ ಅವರ ಮನವಿಗೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ ಅವರು ಯಾವ ಭರವಸೆಯನ್ನು ನೀಡಿಲ್ಲ ಎಂದೂ ಹೇಳಲಾಗುತ್ತಿದೆ.

ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ ಅವರನ್ನು ಭೇಟಿಯಾಗಿದ್ದು ನಿಜ. ಆದರೆ, ಅಲ್ಲಿ ಯಾವ ಚರ್ಚೆ ನಡೆದಿದೆ ಎಂಬುದನ್ನು ಹೇಳಲಾಗದು.

- ರಮೇಶ ಜಾರಕಿಹೊಳಿ, ಗೋಕಾಕ ಶಾಸಕ

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.

Recommended Stories

ಪರಂ ಸಿಎಂ ಆಗಲಿ : 25ಕ್ಕೂ ಹೆಚ್ಚು ಮಠಾಧೀಶರ ಆಗ್ರಹ
ಎಸ್ಕಾಂಗಳಿಂದ ₹110 ಕೋಟಿ ಹೆಚ್ಚುವರಿ ವೆಚ್ಚ : ಸಿಎಜಿ ವರದಿ