;Resize=(412,232))
ಬೆಳಗಾವಿ : ಅನಾರೋಗ್ಯದ ಹಿನ್ನೆಲೆಯಲ್ಲಿ ಇಲ್ಲಿನ ಸರ್ಕೀಟ್ ಹೌಸ್‌ನಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗೋಕಾಕ್‌ನ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಭೇಟಿ ಮಾಡಿದರು. ಆರೋಗ್ಯ ವಿಚಾರಿಸಲು ಬಂದಿದ್ದೆ ಎಂದು ಜಾರಕಿಹೊಳಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರೂ, ಸಿಎಂ ಜೊತೆ ಕೊಠಡಿಯಲ್ಲಿ ಕೆಲ ಹೊತ್ತು ರಹಸ್ಯ ಮಾತುಕತೆ ನಡೆಸಿದ್ದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.
ಮುಖ್ಯಮಂತ್ರಿ ಸ್ಥಾನದ ಬದಲಾವಣೆ ಚರ್ಚೆ ನಡುವೆಯೇ ಜಾರಕಿಹೊಳಿಯವರು ಸಿದ್ದರಾಮಯ್ಯನವರಿಗೆ ನೈತಿಕ ಬೆಂಬಲ ನೀಡಿದ್ದಾರೆ. ಜೊತೆಗೆ, ‘ಸರ್, ಈ ವಿಷಯದಲ್ಲಿ ನೀವು ಸ್ವಲ್ಪ ಜೋರಾಗಿ ಮಾತನಾಡಬೇಕು’ ಎಂದು ಸಲಹೆ ನೀಡಿದ್ದಾರೆ. ಆ ಮೂಲಕ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಸಂದೇಶ ರವಾನಿಸಿದ್ದಾರೆ ಎನ್ನಲಾಗುತ್ತಿದೆ.
ಈಗಾಗಲೇ, ಸಚಿವ ಸತೀಶ್ ಜಾರಕಿಹೊಳಿಯವರು ಸಿದ್ದರಾಮಯ್ಯ ಪರ ನಿಂತಿದ್ದು, ಇದೀಗ ಸಹೋದರ ರಮೇಶ ಕೂಡ ನಾವು ನಿಮ್ಮ ಜೊತೆಗಿದ್ದೇವೆ ಎಂಬ ಸಂದೇಶವನ್ನು ಕೊಟ್ಟಂತಾಗಿದೆ ಎಂದು ಹೇಳಲಾಗುತ್ತಿದೆ.
ಸುದ್ದಿಗಾರರ ಜತೆ ಮಾತನಾಡಿರುವ ಜಾರಕಿಹೊಳಿ, ಈ ಭೇಟಿಯಲ್ಲಿ ಯಾವುದೇ ವಿಶೇಷತೆ ಇಲ್ಲ. ನಮಗೇ ಧೈರ್ಯ ಹೇಳುವಷ್ಟು ಅವರು ಧೈರ್ಯವಾಗಿದ್ದಾರೆ. ನಾವೇನು ಅವರಿಗೆ ಧೈರ್ಯ ಹೇಳಬೇಕಾದ ಅಗತ್ಯವಿಲ್ಲ ಎಂದಿದ್ದಾರೆ.