ಸಾಧಕರ ಗೌರವಿಸುವುದು ಸಮಾಜದ ಆದ್ಯ ಕರ್ತವ್ಯ : ಸಿಎಂ ಸಿದ್ದರಾಮಯ್ಯ

KannadaprabhaNewsNetwork |  
Published : Jul 18, 2025, 01:45 AM ISTUpdated : Jul 18, 2025, 10:33 AM IST
ravindra kalakshetra | Kannada Prabha

ಸಾರಾಂಶ

ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೇ ಸಾಧನೆ ಮಾಡುತ್ತಿರುವ ಸಾಧಕರನ್ನು ಗುರುತಿಸಿ ಗೌರವಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ, ಕನ್ನಡ ಭಾಷೆ ಮತ್ತು ಸಂಸ್ಕೃತಿ, ಸಾಹಿತ್ಯದ ಕೆಲಸದಲ್ಲಿ ಸರ್ಕಾರ ಹಿಂದೆ ಬೀಳುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

 ಬೆಂಗಳೂರು :  ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೇ ಸಾಧನೆ ಮಾಡುತ್ತಿರುವ ಸಾಧಕರನ್ನು ಗುರುತಿಸಿ ಗೌರವಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ, ಕನ್ನಡ ಭಾಷೆ ಮತ್ತು ಸಂಸ್ಕೃತಿ, ಸಾಹಿತ್ಯದ ಕೆಲಸದಲ್ಲಿ ಸರ್ಕಾರ ಹಿಂದೆ ಬೀಳುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಗುರುವಾರ ರವೀಂದ್ರ ಕಲಾಕ್ಷೇತ್ರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸಿದ್ದ 2024-25ನೇ ಸಾಲಿನ ಜೀವಮಾನ ಸಾಧನೆಯ ವಿವಿಧ ಪ್ರಶಸ್ತಿಗಳನ್ನು ಪ್ರದಾನ ಮಾಡಿ ಮಾತನಾಡಿದ ಅವರು, ಅನನ್ಯ ಸಾಧಕರನ್ನು ಗುರುತಿಸಿ ಗೌರವಿಸುವುದು ಸಮಾಜದ ಕರ್ತವ್ಯ. ಇದು ಒಂದೆಡೆ ಸಾಧಕರಿಗೆ ಸಂತೃಪ್ತಿಯ ಭಾವ ನೀಡಿದರೆ, ಇನ್ನೊಂದೆಡೆ ಇನ್ನಷ್ಟು ಸಾಧಕರು ಮೂಡಿಬರಲು ಪ್ರೇರಣೆಯಾಗುತ್ತದೆ ಎಂದರು.

ಪ್ರಶಸ್ತಿಗಳನ್ನು ನಿರೀಕ್ಷಿಸದೇ ತಮ್ಮ ತಮ್ಮ ಕ್ಷೇತ್ರದಲ್ಲಿ ಸಾಧನೆ ಮಾಡಿದವರನ್ನು ಗುರುತಿಸಿ ಪ್ರಶಸ್ತಿಗಳನ್ನು ನೀಡುವ ಕೆಲಸವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಾಡುತ್ತಿದೆ. ನಿಜವಾದ ಸಾಧಕರನ್ನು ಗುರುತಿಸಿ ಸನ್ಮಾನಿಸುವುದರಿಂದ ಸರ್ಕಾರದ ಗೌರವವೂ ಹೆಚ್ಚುತ್ತಿದೆ ಎಂದು ಹೇಳಿದರು.

ದ್ರಾವಿಡ ಭಾಷೆಗಳಲ್ಲೇ ಅತ್ಯಂತ ಹಳೆಯ ಭಾಷೆ ಕನ್ನಡ. ಕರ್ನಾಟಕದಲ್ಲಿ ರಾಜ್ಯ, ರಾಷ್ಟ್ರಮಟ್ಟದ ಪ್ರಶಸ್ತಿಗಳನ್ನು ಪಡೆಯುವಷ್ಟು ಪ್ರತಿಭಾನ್ವಿತರು ಹೇರಳವಾಗಿದ್ದಾರೆ. ರಾಜ್ಯದಲ್ಲಿ ಇರುವಷ್ಟು ಪ್ರತಿಭಾವಂತರು ಬೇರೆ ರಾಜ್ಯಗಳಲ್ಲಿ ಕಾಣಲು ಸಾಧ್ಯವಿಲ್ಲ. ಸಾಹಿತ್ಯ, ಸಂಸ್ಕೃತಿ, ಕಲೆ ಇಲ್ಲಿ ಸಮೃದ್ಧವಾಗಿದೆ ಎಂದರು.

ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಪ್ರಾಸ್ತಾವಿಕವಾಗಿ ಮಾತನಾಡಿ, ಕನ್ನಡ ನೆಲ, ಜಲ, ಭಾಷೆ ವಿಚಾರದಲ್ಲಿ ನಾವು ಎಂದಿಗೂ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ. ಕನ್ನಡ ಸಾಹಿತ್ಯ, ಸಂಸ್ಕೃತಿ, ಭಾಷೆ ವಿಚಾರದಲ್ಲಿ ಮುಖ್ಯಮಂತ್ರಿಗಳು ಎಂದೆಂದಿಗೂ ಉದಾರತೆಯಿಂದ ನಡೆದುಕೊಂಡಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಸಿದ್ದರಾಮಯ್ಯ ಅವರ ಅಧಿಕಾರಾವಧಿಯಲ್ಲಿ ಇನ್ನಷ್ಟು ಹಿರಿಮೆ, ಗರಿಮೆ ಬಂದಿದೆ ಎಂದರು.

ಪ್ರಶಸ್ತಿ ಪುರಸ್ಕೃತರ ಪರವಾಗಿ ಮಾತನಾಡಿದ ಡಾ.ಎಲ್‌. ಹನುಮಂತಯ್ಯ, ಯಾವ ರಾಜ್ಯದಲ್ಲೂ ಕರ್ನಾಟಕದಲ್ಲಿ ಕೊಡುವಷ್ಟು ಪ್ರಶಸ್ತಿಗಳನ್ನು ಕೊಡುವುದಿಲ್ಲ. ಹಿಂದೆ ಮೈಸೂರು ಪ್ರಾಂತ್ಯದ ಅರಸರು ಕಲೆ, ಸಾಹಿತ್ಯಕ್ಕೆ ದೊಡ್ಡ ಪ್ರೋತ್ಸಾಹ ಕೊಡುತ್ತಿದ್ದರು. ನಮ್ಮ ಸರ್ಕಾರಗಳು ಆ ಪರಂಪರೆ ಮುಂದುವರಿಸಿಕೊಂಡು ಬಂದಿರುವುದು ಸ್ವಾಗತಾರ್ಹ ಎಂದು ಹೇಳಿದರು.

ಪ್ರಶಸ್ತಿ ಪ್ರದಾನ:

ರಾಜ್ಯಸಭೆ ಮಾಜಿ ಸದಸ್ಯ ಡಾ. ಎಲ್‌.ಹನುಮಂತಯ್ಯ, ಕರ್ನಾಟಕ ಲಲಿತಕಲಾ ಅಕಾಡೆಮಿ ಮಾಜಿ ಅಧ್ಯಕ್ಷೆ ಎಂ.ಜೆ.ಕಮಲಾಕ್ಷಿ, ಕರ್ನಾಟಕ ನಾಟಕ ಅಕಾಡೆಮಿ ಮಾಜಿ ಅಧ್ಯಕ್ಷ ಜೆ. ಲೋಕೇಶ್‌, ಮುಂಜಯಿಯ ಬೇಗಂ ಪರ್ವೀನ್‌ ಸುಲ್ತಾನಾ ಸೇರಿದಂತೆ ವಿವಿಧ ಸಾಧಕರಿಗೆ ಜೀವಮಾನ ಸಾಧನೆಯ ವಿವಿಧ ಪ್ರಶಸ್ತಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರದಾನ ಮಾಡಿದರು.

ಕಾರ್ಯಕ್ರಮದಲ್ಲಿ ಕುವೆಂಪು ಭಾಷಾ ಭಾರತಿ ಪ್ರಾಧಿಕಾರ ಅಧ್ಯಕ್ಷ ಡಾ.ಚನ್ನಪ್ಪಕಟ್ಟಿ, ಕನ್ನಡ ಪುಸ್ತಕ ಪ್ರಾಧಿಕಾರ ಅಧ್ಯಕ್ಷ ಡಾ.ಮಾನಸ, ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಪ್ರೊ.ಮುಕುಂದರಾಜ್‌, ಪ.ಸ.ಕುಮಾರ್‌ ಮತ್ತಿತರರು ಇದ್ದರು.

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.
Read more Articles on

Recommended Stories

ಮತಚೋರಿ ಹೆಸರಲ್ಲಿ ಸುಳ್ಳು ಪ್ರಚಾರ ತಪ್ಪು: ದೇವೇಗೌಡ
ದೆಹಲಿಯಲ್ಲೂ ಸಿದ್ದು ಸಿದ್ದು, ಡಿಕೆ ಡಿಕೆ ಸದ್ದು