ಬೆಂಗಳೂರು: 14 ಕ್ಷೇತ್ರಗಳಲ್ಲಿ ಲೋಕಸಭೆ ಚುನಾವಣೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಭರಾಟೆ ಮುಗಿಯುತ್ತಿದ್ದಂತೆಯೇ ವಿಧಾನಸಭೆ ಚುನಾವಣೆ ಮಾದರಿಯಲ್ಲೇ ಏ.6ರಿಂದ ಕೋಲಾರದ ಕುರುಡುಮಲೆಯಿಂದ ಚುನಾವಣಾ ಪ್ರಚಾರ ಆರಂಭಿಸಲು ರಾಜ್ಯ ಕಾಂಗ್ರೆಸ್ ಮುಂದಾಗಿದೆ.
ಲೋಕಸಭೆ ಚುನಾವಣೆ ಅಭ್ಯರ್ಥಿಗಳ ಆಯ್ಕೆ ಬೆನ್ನಲ್ಲೇ ಮಾರ್ಚ್ ತಿಂಗಳಾಂತ್ಯದಲ್ಲಿ ಬೀದರ್‌ನ ಬಸವ ಕಲ್ಯಾಣದಿಂದ ಜನಶಕ್ತಿ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಲು ನಿರ್ಧರಿಸಲಾಗಿತ್ತು. ಆದರೆ ಕೋಲಾರ ಟಿಕೆಟ್ ಕುರಿತು ತೀವ್ರ ಗೊಂದಲ ಉಂಟಾದ ಹಿನ್ನೆಲೆಯಲ್ಲಿ ಚುನಾವಣಾ ಪ್ರಚಾರ ಮುಂದೂಡಲಾಗಿತ್ತು.
ಇದೀಗ ಏ.6 ರಂದು ಕೋಲಾರದ ಕುರುಡುಮಲೆಯಿಂದ ಹಳೆ ಮೈಸೂರು ಭಾಗದ ಕ್ಷೇತ್ರಗಳ ಚುನಾವಣಾ ಪ್ರಚಾರ ಯಾತ್ರೆ ಶುರುವಾಗಲಿದೆ. ಮೊದಲ ದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿ ಎಲ್ಲಾ ಸಚಿವರೂ ಭಾಗವಹಿಸಿ ಒಗ್ಗಟ್ಟು ಪ್ರದರ್ಶಿಸಲಿದ್ದಾರೆ.
ಬಳಿಕ 14 ಕ್ಷೇತ್ರಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರತ್ಯೇಕ ಪ್ರಚಾರ ನಡೆಸಲಿದ್ದಾರೆ. ಅಗತ್ಯವಿರುವ ಕ್ಷೇತ್ರಗಳಿಗೆ ಮಾತ್ರ ಇಬ್ಬರೂ ಒಟ್ಟಿಗೆ ತೆರಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಏ.6 ರಂದು ಶನಿವಾರ ಬೆಳಗ್ಗೆ 10.30 ಗಂಟೆಗೆ ಕುರುಡುಮಲೆ ಗಣೇಶ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಪ್ರಚಾರಕ್ಕೆ ಚಾಲನೆ ನೀಡಲಾಗುತ್ತದೆ ಎಂದು ತಿಳಿದುಬಂದಿದೆ.
ಇನ್ನು ಬಸವಣ್ಣನ ನಾಡು ಬಸವಕಲ್ಯಾಣದಲ್ಲಿ ರಾಜ್ಯಮಟ್ಟದ ಬೃಹತ್ ಪ್ರಚಾರ ಕಾರ್ಯಕ್ರಮ ನಡೆಸುವ ಬಗ್ಗೆ ಚಿಂತನೆಯಿದ್ದು ಇನ್ನೂ ದಿನಾಂಕ ನಿಗದಿಯಾಗಿಲ್ಲ. ಅಂತಿಮವಾಗಿ ರಾಷ್ಟ್ರಕವಿ ಕುವೆಂಪು ಅವರ ಶಿವಮೊಗ್ಗದಲ್ಲಿ ಪ್ರಚಾರ ಕಾರ್ಯಕ್ರಮ ಮುಗಿಸಲು ಯೋಜನೆ ಹಾಕಿಕೊಳ್ಳಲಾಗಿದೆ. ಬಸವಣ್ಣನ ನಾಡಿನಲ್ಲಿ ಬೃಹತ್ ಕಾರ್ಯಕ್ರಮ ಆಯೋಜಿಸುವ ಮೂಲಕ ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದ ಲಾಭವನ್ನು ಪಡೆಯಲು ತಂತ್ರ ರೂಪಿಸಲಾಗಿದೆ. ಜತೆಗೆ ಕಳೆದ ವಿಧಾನಸಭೆಯಲ್ಲಿ ಕೈ ಹಿಡಿದಿದ್ದ ಲಿಂಗಾಯತ ಮತ ಬ್ಯಾಂಕ್ ಗಟ್ಟಿಗೊಳಿಸಿಕೊಳ್ಳುವುದು ಸಹ ಕಾಂಗ್ರೆಸ್ ಉದ್ದೇಶ ಎನ್ನಲಾಗಿದೆ. ಆದರೆ ಈ ಬಗೆಗಿನ ದಿನಾಂಕಗಳು ಇನ್ನಷ್ಟೇ ಅಂತಿಮವಾಗಬೇಕಿದೆ ಎಂದು ಹೇಳಲಾಗಿದೆ.