ಮೈಸೂರು : ಹಿಂದುಳಿದ ವರ್ಗಗಳ ರಾಷ್ಟ್ರೀಯ ಸಲಹಾ ಸಮಿತಿ ಮುಖ್ಯಸ್ಥರನ್ನಾಗಿ ಸಿದ್ದರಾಮಯ್ಯ ಅವರನ್ನು ನಿಯೋಜಿಸಲು ವೇದಿಕೆ ಸಿದ್ಧವಾಗಿದೆ. ಇನ್ನು ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಷ್ಟೇ ಬಾಕಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭವಿಷ್ಯ ನುಡಿದರು.
ನಗರದ ಬಿಜೆಪಿ ಕಚೇರಿಯಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಾಂಗ್ರೆಸ್ ಹೈಕಮಾಂಡ್ ಶಾಸಕರಿಂದ ಅಭಿಪ್ರಾಯ ಸಂಗ್ರಹಿಸುತ್ತಿದೆ. ಮುಖ್ಯಮಂತ್ರಿ ಸ್ಥಾನ ಬದಲಾವಣೆಗೆ ಎಲ್ಲಾ ರೀತಿಯ ಸಿದ್ಧತೆಯೂ ಆಗಿದೆ. ರಾಷ್ಟ್ರಮಟ್ಟದಲ್ಲಿ ಹಿಂದುಳಿದ ವರ್ಗಗಳ ರಾಷ್ಟ್ರೀಯ ಸಲಹಾ ಸಮಿತಿ ಮುಖ್ಯಸ್ಥರನ್ನಾಗಿ ನಿಯೋಜಿಸಿ ಹೊಸದಿಲ್ಲಿಗೆ ಕಳುಹಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಈಗ ಸಿದ್ದರಾಮಯ್ಯ ರಾಜೀನಾಮೆ ಕೊಡುವುದು ಮಾತ್ರವೇ ಬಾಕಿ ಎಂದರು.
ಸಿದ್ದರಾಮಯ್ಯ ಒಂದೆರಡು ತಿಂಗಳಲ್ಲಿಯೇ ರಾಜೀನಾಮೆ ನೀಡುವುದರಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಡಿ.ಕೆ.ಶಿವಕುಮಾರ್ ಅವರಿಗೆ ನೂರು ಶಾಸಕರ ಬೆಂಬಲವಿದೆ ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ. ಸಿದ್ದರಾಮಯ್ಯ ಬಳಿಕ ಯಾರು ಸಿಎಂ ಆಗುತ್ತಾರೆ ಎಂಬುದಕ್ಕಿಂತ ಈ ಸರ್ಕಾರ ಇರಬೇಕಾ?, ಬೇಡವಾ ಎಂಬುದು ಮುಖ್ಯ. ಏಕೆಂದರೆ ಜನ ಈಗಲೇ ಈ ಸರ್ಕಾರಕ್ಕೆ ಹಿಡಿಶಾಪ ಹಾಕುತ್ತಿದ್ದಾರೆ ಎಂದು ಅವರು ಹೇಳಿದರು.