ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಡೀಸಿ ಶಿಲ್ಪಾನಾಗ್ ಅಧ್ಯಕ್ಷತೆಯಲ್ಲಿ ಸಭೆ । ಹಕ್ಕು, ಅಕ್ಷೇಪಣೆ ಸಲ್ಲಿಸಲು ದಿನಾಂಕ ನಿಗದಿ
ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯ ಕರಡು ಪಟ್ಟಿ ಪ್ರಕಟಿಸಲಾಗಿದ್ದು, ಹಕ್ಕು ಆಕ್ಷೇಪಣೆ ಸಲ್ಲಿಸಲು ದಿನಾಂಕ ನಿಗದಿ ಪಡಿಸಿ ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿ ತಯಾರಿಸುವ ಸಂಬಂಧ ರಾಷ್ಟ್ರೀಯ ಹಾಗೂ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಭಾರತ ಚುನಾವಣಾ ಆಯೋಗದ ನಿರ್ದೇಶನದನ್ವಯ ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿ ತಯಾರಿಸುವ ಸಂಬಂಧ ಕರಡು ಮತದಾರರ ಪಟ್ಟಿಯನ್ನು ಆಯಾ ತಾಲೂಕುಗಳ ಮತಗಟ್ಟೆಗಳಲ್ಲಿ ಸ್ಥಾಪಿಸಲಾಗಿರುವ ತಾಲೂಕು ಕಚೇರಿಗಳಲ್ಲಿ ಪ್ರಕಟಿಸಲಾಗಿದೆ. ಈ ಬಗ್ಗೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಡಿ. ೯ರವರೆಗೆ ಅವಕಾಶ ನೀಡಲಾಗಿದೆ. ನಿಗದಿಪಡಿಸಿದ ದಿನಾಂಕದವರೆಗೆ ಸ್ವೀಕರಿಸಲಾಗುವ ಹಕ್ಕು ಮತ್ತು ಆಕ್ಷೇಪಣೆಗಳನ್ನು ನಿಯಾಮಾನುಸಾರ ಪರಿಶೀಲಿಸಿ ಡಿ. ೩೦ರಂದು ಅಂತಿಮ ಮತರದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಅವರು ತಿಳಿಸಿದರು.ಜಿಲ್ಲೆಯ ಎಲ್ಲಾ ತಾಲೂಕುಗಳ ಮತದಾರರ ಕರಡು ಪ್ರತಿಯನ್ನು ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ವಿತರಿಸಲಾಗಿದ್ದು, ರಾಜಕೀಯ ಪಕ್ಷಗಳು ಆಯಾ ತಾಲೂಕಿಗೆ ಸಂಬಂಧಿಸಿದಂತೆ ಕರಡು ಮತದಾರರ ಪಟ್ಟಿಯಲ್ಲಿ ಲೋಪದೋಷಗಳು ಕಂಡುಬಂದಲ್ಲಿ ಆಯಾ ತಾಲೂಕು ಕಚೇರಿ ತಹಸೀಲ್ದಾರ್ ಅವರಿಗೆ ಮಾಹಿತಿ ನೀಡಿ ಹಕ್ಕು, ಆಕ್ಷೇಪಣೆಗಳನ್ನು ಸಲ್ಲಿಸಬಹುದು ಎಂದರು.
ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರದ ವ್ಯಾಪ್ತಿಗೆ ಚಾಮರಾಜನಗರ, ಮೈಸೂರು, ಮಂಡ್ಯ ಮತ್ತು ಹಾಸನ ಜಿಲ್ಲೆಗಳು ಒಳಪಡಲಿದ್ದು, ಮತದಾರರ ಪಟ್ಟಿ ಸಂಬಂಧ ಚಟುವಟಿಕೆಗಳನ್ನು ರೋಲ್ ಅಬ್ಸರ್‌ವರ್ ಅವರು ವೀಕ್ಷಿಸಲಿದ್ದಾರೆ. ಅಂತಿಮ ಮತದಾರರ ಪಟ್ಟಿಯನ್ನು ದೋಷರಹಿತ ಹಾಗೂ ಪಾರದರ್ಶಕವಾಗಿ ತಯಾರಿಸಲು ಎಲ್ಲಾ ರಾಜಕೀಯ ಪಕ್ಷಗಳು ಸಹಕಾರ ನೀಡಬೇಕೆಂದು ಅವರು ಸಭೆಯಲ್ಲಿ ಮನವಿ ಮಾಡಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಚುನಾವಣಾ ತಹಸೀಲ್ದಾರ್ ಅಶೋಕ್, ಶಿರಸ್ತೇದಾರ್ ಎಸ್. ಬಸವರಾಜು, ರಾಜಕೀಯ ಪಕ್ಷಗಳ ಪ್ರತಿನಿಧಿಗಳಾದ ಎ.ಎಚ್. ನಸ್ರುಲ್ಲಾ ಖಾನ್, ಎಸ್. ಬಾಲಸುಬ್ರಮಣ್ಯ, ಎನ್. ನಾಗಯ್ಯ, ಎಸ್. ಮಹೇಶ್‌ಗೌಡ, ಕೆ. ಹರೀಶ್, ಇತರರು ಸಭೆಯಲ್ಲಿ ಉಪಸ್ಥಿತರಿದ್ದರು.
ದಕ್ಷಿಣ ಶಿಕ್ಷಕರ ಕ್ಷೇತ್ರದ ಕರಡು ಮತದಾರರ ಪಟ್ಟಿ ಪ್ರಕಟ
----
ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿ ತಯಾರಿಸುವ ಸಂಬಂಧ ರಾಷ್ಟ್ರೀಯ ಹಾಗೂ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದ ಡೀಸಿ ಶಿಲ್ಪಾನಾಗ್.