;Resize=(412,232))
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದ ಸ್ಟಿಂಗ್ ಆಪರೇಷನ್ ಷಡ್ಯಂತ್ರದಲ್ಲಿ ಭಾಗಿಯಾಗಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಹಿನ್ನೆಲೆಯಲ್ಲಿ ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಕೃಪಾ ಆಳ್ವ ಅವರನ್ನು ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ.
ಸ್ಟಿಂಗ್ ಆಪರೇಷನ್ ಬಗ್ಗೆ ವರದಿಯಾಗಿರುವ ಅಂಶಗಳ ಬಗ್ಗೆ ಸ್ಪಷ್ಟನೆ ನೀಡುವಂತೆ ಕೃಪಾ ಆಳ್ವ ಅವರಿಗೆ ಕೆಪಿಸಿಸಿಯು ನೋಟಿಸ್ ನೀಡಿತ್ತು. ನೋಟಿಸ್‌ಗೆ ಯಾವುದೇ ಸ್ಪಷ್ಟನೆ ನೀಡದ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷರ ಸೂಚನೆ ಮೇರೆಗೆ ಉಚ್ಚಾಟನೆ ಮಾಡಿರುವುದಾಗಿ ಕೆಪಿಸಿಸಿ ಉಪಾಧ್ಯಕ್ಷ ಎಂ. ನಾರಾಯಣಸ್ವಾಮಿ ಉಚ್ಚಾಟನೆ ಆದೇಶದಲ್ಲಿ ತಿಳಿಸಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಮುಖಂಡರನ್ನು ಗುರಿಯಾಗಿಸಿ ಸ್ಟಿಂಗ್ ಆಪರೇಷನ್ ನಡೆಸಲಾಗಿದೆ ಎಂಬ ಪ್ರಕರಣದ ಬಗ್ಗೆ ಮಾಧ್ಯಮಗಳಲ್ಲಿ ನಕಾರಾತ್ಮಕ ಪ್ರಚಾರದಿಂದ ಕಾಂಗ್ರೆಸ್ ಪಕ್ಷಕ್ಕೆ ಮುಜುಗರ ಉಂಟಾಗಿದೆ. ಘಟನೆಯಲ್ಲಿ ತಾವು ಭಾಗಿಯಾಗಿದ್ದೀರಿ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಕಾರಣ ಕೇಳಿ ನೋಟಿಸ್ ನೀಡಲಾಗಿತ್ತು. ನೋಟಿಸ್‌ಗೆ ಈವರೆಗೆ ಯಾವುದೇ ಉತ್ತರ ಹಾಗೂ ಸಮಜಾಯಿಷಿ ನೀಡಿರುವುದಿಲ್ಲ. ಈ ಸ್ಟಿಂಗ್ ಪ್ರಕರಣದಲ್ಲಿ ತಮ್ಮ ಹೆಸರು ಕೇಳಿ ಬಂದ ಕಾರಣದಿಂದ ಹಾಗೂ ಪ್ರಕರಣದಲ್ಲಿ ನಿಮ್ಮ ನಡವಳಿಕೆ ಪಕ್ಷ ವಿರೋಧಿ ಚಟುವಟಿಕೆಯಾಗಿರುವುದರಿಂದ ಕೆಪಿಸಿಸಿ ಅಧ್ಯಕ್ಷರ ಸೂಚನೆ ಮೇರೆಗೆ ಉಚ್ಚಾಟನೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.