ಈ ಬಾರಿಯೂ ಸಮೀಕ್ಷೆ ಸುಳ್ಳಾಗಲಿವೆ: ಡಿಕೆಶಿ ಭವಿಷ್ಯ

Published : Jun 03, 2024, 10:44 AM IST
DK Shivakumar

ಸಾರಾಂಶ

‘ಕಳೆದ ವರ್ಷ ನಡೆದ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಚುನಾವಣೋತ್ತರ ಸಮೀಕ್ಷೆಗಳು ಕಾಂಗ್ರೆಸ್‌ 70-80 ಸ್ಥಾನ ಮಾತ್ರ ಗಳಿಸಲಿವೆ ಎಂದಿದ್ದವು. ಆ ಸಮೀಕ್ಷೆಗಳು ಸುಳ್ಳಾದಂತೆ ಈ ಬಾರಿಯೂ ಲೋಕಸಭೆ ಚುನಾವಣೋತ್ತರ ಸಮೀಕ್ಷೆಗಳು ಸುಳ್ಳಾಗಲಿವೆ’ ಎಂದು  ಡಿ.ಕೆ.ಶಿವಕುಮಾರ್‌ ಪ್ರತಿಪಾದಿಸಿದ್ದಾರೆ.

ಬೆಂಗಳೂರು :  ‘ಕಳೆದ ವರ್ಷ ನಡೆದ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಚುನಾವಣೋತ್ತರ ಸಮೀಕ್ಷೆಗಳು ಕಾಂಗ್ರೆಸ್‌ 70-80 ಸ್ಥಾನ ಮಾತ್ರ ಗಳಿಸಲಿವೆ ಎಂದಿದ್ದವು. ಆ ಸಮೀಕ್ಷೆಗಳು ಸುಳ್ಳಾದಂತೆ ಈ ಬಾರಿಯೂ ಲೋಕಸಭೆ ಚುನಾವಣೋತ್ತರ ಸಮೀಕ್ಷೆಗಳು ಸುಳ್ಳಾಗಲಿವೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಪ್ರತಿಪಾದಿಸಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಖಚಿತವಾಗಿ ಎರಡಂಕಿ ಫಲಿತಾಂಶ ದಾಖಲಿಸಲಿದೆ. ಮೂರನೇ ಎರಡು ಭಾಗದಷ್ಟು ಸ್ಥಾನಗಳನ್ನು ಗಿಟ್ಟಿಸಲಿದೆ. ಇದು ನಾನು ಸ್ವಂತ ಮಾಡಿಸಿರುವ ಸಮೀಕ್ಷೆಯ ಅನುಭವದಿಂದ ಹೇಳುತ್ತಿದ್ದೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಭಾನುವಾರ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ ವಿಧಾನಸಭಾ ಚುನಾವಣೆ ವೇಳೆ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ ಎಂದು ಭವಿಷ್ಯ ನುಡಿದಿದ್ದ ಸಮೀಕ್ಷೆ ಸುಳ್ಳಾಯಿತು. ಆ ಚುನಾವಣೆಯಲ್ಲಿ ನನ್ನ ಭವಿಷ್ಯವೇ ನಿಜವಾಗಿತ್ತು. ಸಮೀಕ್ಷೆ ನಡೆಸುವ ಸಂಸ್ಥೆಗಳು ಐದು ಸಾವಿರದಷ್ಟು ಜನರ ಅಭಿಪ್ರಾಯ ಮಾತ್ರ ಸಂಗ್ರಹ ಮಾಡಿರುತ್ತವೆ. ಹೀಗಾಗಿ ಈ ಸಮೀಕ್ಷೆಗಳ ಮೇಲೆ ನನಗೆ ನಂಬಿಕೆಯಿಲ್ಲ ಎಂದು ಸ್ಪಷ್ಟಪಡಿಸಿದರು.

ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ 70 ರಿಂದ 80 ಸ್ಥಾನ ಮಾತ್ರ ಕೊಟ್ಟಿದ್ದರು. 136 ಸ್ಥಾನ ಗೆಲ್ಲುತ್ತೇವೆ ಎಂದು ನನ್ನ ರಾಜಕೀಯ ಅನುಭವದ ಮೇಲೆ ಹೇಳಿದ್ದೆ. ಜೊತೆಗೆ ನಾನು ನಡೆಸಿದ್ದ ಖಾಸಗಿ ಸಮೀಕ್ಷೆ ಪ್ರಕಾರದಂತೆ ಜನ ನಮಗೆ 136 ಸ್ಥಾನ ನೀಡಿದರು ಎಂದರು.

ಕರ್ನಾಟಕದ ಜನತೆಗೆ ಅದರಲ್ಲೂ ವಿಶೇಷವಾಗಿ ಮಹಿಳೆಯರಿಗೆ ಕಾಂಗ್ರೆಸ್ ಗ್ಯಾರಂಟಿಗಳ ಮೇಲೆ ನಂಬಿಕೆ ಬಂದಿದೆ. ಇವು ನಮ್ಮ ಕೈ ಹಿಡಿಯಲಿವೆ. ಮೊದಲ ಹಂತದ ಚುನಾವಣೆಗಿಂತ ಎರಡನೇ ಹಂತದ ಚುನಾವಣೆಯಲ್ಲಿ ಎಐಸಿಸಿ ನೀಡಿದ ಗ್ಯಾರಂಟಿಗಳು ಜನರನ್ನು ಹೆಚ್ಚು ಪರಿಣಾಮಕಾರಿಯಾಗಿ ತಲುಪಿವೆ. ಗ್ಯಾರಂಟಿಗಳು ದೇಶದ ಜನರ ಮನಸ್ಸು ಗೆದ್ದಿವೆ. ಕಾಂಗ್ರೆಸ್ ಅಭಿವೃದ್ಧಿ ವಿಚಾರಗಳ ಮೇಲೆ ಹಾಗೂ ಬಿಜೆಪಿಯವರು ಭಾವನಾತ್ಮಕ ವಿಚಾರಗಳ ಮೇಲೆ ರಾಜಕೀಯ ಮಾಡುತ್ತಾರೆ. ಹೀಗಾಗಿ ಕರ್ನಾಟಕದಲ್ಲಿ ಕಾಂಗ್ರೆಸ್‌ ಮೂರನೇ ಎರಡರಷ್ಟು ಸ್ಥಾನ ಗೆಲ್ಲಲಿದೆ ಎಂದು ಶಿವಕುಮಾರ್‌ ಹೇಳಿದರು.

PREV

Recommended Stories

ರಾಹುಲ್‌ ವಿರುದ್ಧ 5ಕ್ಕೆ ಬಿಜೆಪಿ ಧರಣಿ : ಬಿವೈವಿ
ಸಂಘರ್ಷ ಬಿಟ್ಟು ಒಳಮೀಸಲು ಜಾರಿ : ಪರಂ ನೇತೃತ್ವದ ಸಭೆ