ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಹಾಗೂ ಮುಡಾ ನಿವೇಶನ ಹಂಚಿಕೆ ಕೇಸಲ್ಲಿ ನಮ್ಮ ತಪ್ಪಿಲ್ಲ: ಕಾಂಗ್ರೆಸ್‌

KannadaprabhaNewsNetwork |  
Published : Jul 19, 2024, 01:46 AM ISTUpdated : Jul 19, 2024, 04:38 AM IST
ಕಾಂಗ್ರೆಸ್‌ | Kannada Prabha

ಸಾರಾಂಶ

ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಹಾಗೂ ಮುಡಾ ನಿವೇಶನ ಹಂಚಿಕೆ ವಿಚಾರದಲ್ಲಿ ನಮ್ಮ ಸರ್ಕಾರ ಯಾವುದೇ ತಪ್ಪು ಮಾಡಿಲ್ಲ. ಹೀಗಾಗಿ ಯಾವುದೇ ಮುಲಾಜಿಲ್ಲದೆ ಪ್ರತಿಪಕ್ಷಗಳಿಗೆ ತಿರುಗೇಟು ನೀಡಿ ಎಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆಯಲ್ಲಿ ಸದಸ್ಯರಿಗೆ ಸ್ಪಷ್ಟ ಸೂಚನೆ ನೀಡಲಾಗಿದೆ.

 ಬೆಂಗಳೂರು :  ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಹಾಗೂ ಮುಡಾ ನಿವೇಶನ ಹಂಚಿಕೆ ವಿಚಾರದಲ್ಲಿ ನಮ್ಮ ಸರ್ಕಾರ ಯಾವುದೇ ತಪ್ಪು ಮಾಡಿಲ್ಲ. ಹೀಗಾಗಿ ಯಾವುದೇ ಮುಲಾಜಿಲ್ಲದೆ ಪ್ರತಿಪಕ್ಷಗಳಿಗೆ ತಿರುಗೇಟು ನೀಡಿ ಎಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆಯಲ್ಲಿ ಸದಸ್ಯರಿಗೆ ಸ್ಪಷ್ಟ ಸೂಚನೆ ನೀಡಲಾಗಿದೆ.

ಬೆಂಗಳೂರಿನಲ್ಲಿ ಗುರುವಾರ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆಯಲ್ಲಿ ಮುಡಾ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದ ಕುರಿತು ಚರ್ಚಿಸಲಾಯಿತು.

ಈ ವೇಳೆ ವಾಲ್ಮೀಕಿ ನಿಗಮದಲ್ಲಿ 89 ಕೋಟಿ ರು. ಹಣ ದುರ್ಬಳಕೆಯಾಗಿದೆ. ಇದನ್ನು ಬಿಜೆಪಿಯವರು 189 ಕೋಟಿ ರು., 200 ಕೋಟಿ ರು. ಎಂದೆಲ್ಲಾ ಬಿಂಬಿಸುತ್ತಿದ್ದಾರೆ. ಜತೆಗೆ ಪ್ರಕರಣದಲ್ಲಿ ನಾಗೇಂದ್ರ ಅವರ ಪಾತ್ರವೇನೂ ಇಲ್ಲ. ಅಧಿಕಾರಿಗಳು ತಪ್ಪು ಮಾಡಿದ್ದು, ಯಾರು ತಪ್ಪು ಮಾಡಿದ್ದಾರೋ ಅವರ ಮೇಲೆ ತನಿಖೆ ವೇಳೆ ಕ್ರಮ ಆಗುತ್ತದೆ.

ಬಿಜೆಪಿಯವರು ಕೇವಲ ರಾಜಕೀಯ ಕಾರಣಗಳಿಗಾಗಿ ಬಿ.ನಾಗೇಂದ್ರ ಹಾಗೂ ಸರ್ಕಾರದ ವಿರುದ್ಧ ಆರೋಪ ಮಾಡುತ್ತಿದ್ದಾರೆ. ಪ್ರಕರಣದಲ್ಲಿ ಸರ್ಕಾರ ಯಾವುದೇ ತಪ್ಪು ಮಾಡಿಲ್ಲ. ಹೀಗಾಗಿ ಧೈರ್ಯವಾಗಿ ಪಕ್ಷ ಹಾಗೂ ಸರ್ಕಾರವನ್ನು ಸಮರ್ಥಿಸಿಕೊಳ್ಳಬೇಕು. ಪ್ರತಿಪಕ್ಷಗಳ ಸದಸ್ಯರ ವಿರುದ್ಧ ಸದನದಲ್ಲಿ ತಿರುಗೇಟು ನೀಡಬೇಕು ಎಂದು ಕರೆ ನೀಡಲಾಗಿದೆ ಎಂದು ತಿಳಿದುಬಂದಿದೆ.

ಮುಡಾ ಅಕ್ರಮವಲ್ಲ, ಷಡ್ಯಂತ್ರ:

ಮುಡಾ ನಿವೇಶನ ಹಂಚಿಕೆಯಲ್ಲಿ ನಮ್ಮಿಂದ ಯಾವುದೇ ತಪ್ಪು ಆಗಿಲ್ಲ. ಮುಡಾದವರು ವಶಪಡಿಸಿಕೊಂಡಿರುವ ಜಮೀನಿಗೆ ಪರಿಹಾರವಾಗಿ ನಿವೇಶನ ಪಡೆದಿದ್ದೇವೆ. ಇದರಲ್ಲಿ ಯಾವುದೇ ಲೋಪಗಳೂ ಆಗಿಲ್ಲ. ಕೇಂದ್ರ ಸಚಿವರಾದ ಪ್ರಹ್ಲಾದ್‌ ಜೋಶಿ, ಎಚ್.ಡಿ.ಕುಮಾರಸ್ವಾಮಿ ಹಾಗೂ ಬಿಜೆಪಿ ನಾಯಕ ಬಿ.ಎಲ್‌.ಸಂತೋಷ್‌ ಸೇರಿ ಷಡ್ಯಂತ್ರ ನಡೆಸಿ ಈ ವಿವಾದ ಸೃಷ್ಟಿಸಿದ್ದಾರೆ. ನನ್ನ ಮೇಲೆ ಹಾಗೂ ಸರ್ಕಾರದ ಮೇಲೆ ನಡೆಸಿರುವ ವ್ಯವಸ್ಥಿತ ಷಡ್ಯಂತ್ರವೇ ಹೊರತು ಇದರಲ್ಲಿ ಹುರುಳಿಲ್ಲ. ಹೀಗಾಗಿ ಶಾಸಕರು ಸದನದ ಒಳಗೆ ಹಾಗೂ ಹೊರಗೆ ಪ್ರತಿಪಕ್ಷಗಳ ಆರೋಪಕ್ಕೆ ತಕ್ಕ ತಿರುಗೇಟು ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿರುವುದಾಗಿ ಮೂಲಗಳು ತಿಳಿಸಿವೆ.

ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಸಚಿವರಾದ ಎಚ್.ಸಿ.ಮಹದೇವಪ್ಪ, ಡಾ.ಜಿ.ಪರಮೇಶ್ವರ್‌, ಎಂ.ಬಿ. ಪಾಟೀಲ್‌, ಕೆ.ಜೆ.ಜಾರ್ಜ್, ಬೋಸರಾಜು, ಮಾಜಿ ಸಚಿವ ಆರ್.ವಿ.ದೇಶಪಾಂಡೆ, ಪರಿಷತ್‌ ಮುಖ್ಯಸಚೇತಕ ಸಲೀಂ ಅಹ್ಮದ್ ಸೇರಿ ಶಾಸಕರು, ಪರಿಷತ್‌ ಸದಸ್ಯರು ಹಾಗೂ ಲೋಕಸಭೆ, ರಾಜ್ಯಸಭೆ ಸದಸ್ಯರು ಭಾಗವಹಿಸಿದ್ದರು.

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.

Recommended Stories

ಭಗವಂತನ ಶಕ್ತಿ ಪಡೆದವರಿಂದ ಡಿಕೆಶಿ ಸಿಎಂ ಆಗುವ ದಿನಾಂಕ ನಿಗದಿ : ಇಕ್ಬಾಲ್
ಜನ ನಂಗೆ ಇನ್ನೊಂದು ಅವಕಾಶ ಕೊಡಲಿ : ಎಚ್ಡಿಕೆ