ಬೆಂಗಳೂರು : ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ಖಾಲಿ ಇದೆ ಎಂಬುದಾಗಿ ಯಾರು ಹೇಳಿದ್ದಾರೆ ಎಂದು ಹಾಲಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತೀಕ್ಷ್ಣವಾಗಿ ಪ್ರಶ್ನಿಸಿದ್ದಾರೆ.
ಬುಧವಾರ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ‘ನಾನು ರಾಜ್ಯಾಧ್ಯಕ್ಷನಾಗಿ ಉತ್ತಮವಾಗಿ ಕೆಲಸ ಮಾಡುತ್ತಿದ್ದೇನೆ. ಒಂದು ದಿನವೂ ಸುಮ್ಮನೆ ಕುಳಿತಿಲ್ಲ. ಅದು ಪಕ್ಷದ ಹೈಕಮಾಂಡ್‌ಗೂ ಗೊತ್ತಿದೆ. ನನಗೂ ಪ್ರಮಾಣಪತ್ರ ನೀಡಿದ್ದಾರೆ. ಕಾರ್ಯಕರ್ತರಿಗೂ ನನ್ನ ಕೆಲಸದ ಬಗ್ಗೆ ಸಮಾಧಾನ ಇದೆ’ ಎಂದು ಪ್ರತಿಪಾದಿಸಿದರು.
ಪಕ್ಷದ ಕೆಲವು ಹಿರಿಯ ನಾಯಕರು ಬದಲಾವಣೆ ಬಯಸಿದ್ದಾರಲ್ಲ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ವಿಜಯೇಂದ್ರ, ‘ಹಿರಿಯರು ಅಪೇಕ್ಷೆ ಪಡುತ್ತಿರುವುದು ತಪ್ಪಲ್ಲ. ಪಕ್ಷದ ಹೈಕಮಾಂಡ್ ಎಲ್ಲವನ್ನೂ ನೋಡಿ ತೀರ್ಮಾನ ಮಾಡುತ್ತದೆ. ಪಕ್ಷದ ಹೈಕಮಾಂಡ್ ನನ್ನನ್ನು ರಾಜ್ಯಾಧ್ಯಕ್ಷನನ್ನಾಗಿ ಮಾಡಿದ್ದು ಪಕ್ಷ ಸಂಘಟನೆಗಾಗಿ ಹೊರತು ಮುಖ್ಯಮಂತ್ರಿ ಆಗಲಿ ಎಂದಲ್ಲ. ನಾನು ನನ್ನ ಕೆಲಸ ಮಾಡಿಕೊಂಡು ಹೊರಟಿದ್ದೇನೆ” ’ ಎಂದು ಹೇಳಿದರು.