ಕಾನೂನು ಸಮರ ಬೇಡವೆಂದು ಇಷ್ಟು ದಿನ ಸುಮ್ಮನಿದ್ದೆವು: ಸಿದ್ದರಾಮಯ್ಯ

KannadaprabhaNewsNetwork |  
Published : Mar 24, 2024, 01:30 AM ISTUpdated : Mar 24, 2024, 08:17 AM IST
Siddaramaiah

ಸಾರಾಂಶ

ಕೇಂದ್ರ ಸರ್ಕಾರದಿಂದ ನಮ್ಮ ಪಾಲಿನ ಪರಿಹಾರ ಬರುತ್ತದೆ ಎಂದು ಕಾದು ಕಾದು ಸಾಕಾಗಿ ಬೇರೆ ದಾರಿಯಿಲ್ಲದೆ ಸುಪ್ರೀಂಕೋರ್ಟ್ ಮೊರೆ ಹೋದೆವು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ಕೇಂದ್ರ ಸರ್ಕಾರದಿಂದ ನಮ್ಮ ಪಾಲಿನ ಪರಿಹಾರ ಬರುತ್ತದೆ ಎಂದು ಕಾದು ಕಾದು ಸಾಕಾಗಿ ಬೇರೆ ದಾರಿಯಿಲ್ಲದೆ ಸುಪ್ರೀಂಕೋರ್ಟ್ ಮೊರೆ ಹೋದೆವು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಶನಿವಾರ ತುರ್ತು ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ನಮಗೆ ಕಾನೂನು ಮೊರೆ ಹೋಗುವುದು ಇಷ್ಟ ಇರಲಿಲ್ಲ. ಆದರೆ ನಾವು ಕಾನೂನು ಮೊರೆ ಹೋಗುವ ಅನಿವಾರ್ಯತೆಯನ್ನು ಕೇಂದ್ರ ಸರ್ಕಾರ ಸೃಷ್ಟಿಸಿದೆ. 

ರಾಜ್ಯಕ್ಕೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ (ಎನ್‌ಡಿಆರ್‌ಎಫ್‌)ಯನ್ನು ತಕ್ಷಣ ಬಿಡುಗಡೆಗೊಳಿಸಲು ಕೇಂದ್ರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸುಪ್ರೀಂಕೋರ್ಟ್ ಬಾಗಿಲು ಬಡಿದಿದ್ದೇವೆ. ಸಂವಿಧಾನದ ಪರಿಚ್ಛೇದ 32ರ ಅಡಿಯಲ್ಲಿ ನಾವು ನಮ್ಮ ಕಾನೂನುಬದ್ಧ ಹಕ್ಕನ್ನು ಚಲಾಯಿಸಿದ್ದೇವೆ ಎಂದು ತಿಳಿಸಿದರು.

ಬರದ ಸಂದರ್ಭದಲ್ಲಿ, ತುರ್ತು ಸಂದರ್ಭಗಳಲ್ಲಿ ಜನರಿಗೆ ತುರ್ತಾಗಿ ಸ್ಪಂದಿಸಬೇಕು ಎನ್ನುವ ಉದ್ದೇಶದಿಂದಲೇ ವಿಪತ್ತು ನಿರ್ವಹಣಾ ಕಾನೂನು ಮಾಡಲಾಗಿದೆ. 

ಆದರೆ ಇದುವರೆಗೂ ಕೇಂದ್ರ ಕಾನೂನುಬದ್ದವಾಗಿ ನಮಗೆ ಬರಬೇಕಾದ ಹಣದಲ್ಲಿ ಒಂದೇ ಒಂದು ಪೈಸೆಯನ್ನೂ ಕೊಟ್ಟಿಲ್ಲ. ನಾವು ಒಕ್ಕೂಟ ವ್ಯವಸ್ಥೆಯಲ್ಲಿ ಇದ್ದೇವೆ. 

ರಾಜ್ಯದ 240 ತಾಲ್ಲೂಕುಗಳಲ್ಲಿ 223 ತಾಲ್ಲೂಕುಗಳನ್ನು ಬರಪೀಡಿತ ಅಂತ ಘೋಷಿಸಿದ್ದೇವೆ. ನಾಲ್ಕು ಬಾರಿ ಮೌಲ್ಯಮಾಪನ ಮಾಡಿದ್ದೇವೆ. 48 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಕೃಷಿ ಬೆಳೆ ನಷ್ಟ ಆಗಿದೆ. 

3 ಬಾರಿ ಸತತವಾಗಿ ಕೇಂದ್ರಕ್ಕೆ ಮನವಿ ಪತ್ರ ಬರೆದೆವು. ಇದುವರೆಗೂ ಕೇಂದ್ರ ಸರ್ಕಾರ ರಾಜ್ಯದ ಪಾಲಿನಲ್ಲಿ ನಯಾ ಪೈಸೆಯನ್ನೂ ಕೊಟ್ಟಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಿಯಮಾವಳಿ ಪ್ರಕಾರ ರಾಜ್ಯ ಸರ್ಕಾರ ಮನವಿ ಮಾಡಿದ ವಾರದಲ್ಲಿ ಕೇಂದ್ರದ ತಂಡ ಬರಬೇಕು. ಆದರೆ, ಅಕ್ಟೋಬರ್‌ನಲ್ಲಿ ಕೇಂದ್ರ ತಂಡ ರಾಜ್ಯಕ್ಕೆ ಬಂದು‌ ಪರಿಶೀಲನೆ ನಡೆಸಿ ಕೇಂದ್ರಕ್ಕೆ ವರದಿ ನೀಡಿದೆ. 

ಈ ವರದಿ ಕೊಟ್ಟ ಒಂದು ತಿಂಗಳಲ್ಲಿ ರಾಜ್ಯಕ್ಕೆ ಬರ ಪರಿಹಾರ ಕೊಡವ ಬಗ್ಗೆ ತೀರ್ಮಾನ ತೆಗೆದುಕೊಳ್ಳಬೇಕು ಎನ್ನುವುದು ನಿಯಮ. ಆದರೆ, ಇದುವರೆಗೂ ಕೇಂದ್ರ ರಾಜ್ಯದ ಜನರಿಗೆ ಸ್ಪಂದಿಸಿಲ್ಲ ಎಂದು ತಿಳಿಸಿದ ಸಿದ್ದರಾಮಯ್ಯ ಅವರು ಎನ್‌ಡಿಆರ್‌ಎಫ್‌ ನಿಯಮಾವಳಿಗಳನ್ನು ವಿವರಿಸಿದರು.

ಕೇಂದ್ರ ತಂಡ ವರದಿ ಕೊಟ್ಟರೂ ನಮಗೆ ಕೇಂದ್ರ ಸರ್ಕಾರ ಸ್ಪಂದಿಸದಿದ್ದಾಗ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ದೆಹಲಿಗೆ ಹೋದರು. ಆದರೆ, ಕೇಂದ್ರ ಸಚಿವರ ಭೇಟಿಗೆ ಅವಕಾಶವನ್ನೇ ಕೊಡಲಿಲ್ಲ. 

ಬಳಿಕ ಡಿ.19 ರಂದು ನಾನು ಮತ್ತು ಕೃಷ್ಣಬೈರೇಗೌಡ ಅವರು ಮತ್ತೆ ದೆಹಲಿಗೆ ಹೋಗಿ ಪ್ರಧಾನಮಂತ್ರಿಗಳಿಗೆ ಭೇಟಿ ಮಾಡಿ ಮನವಿ ಮಾಡಿದೆವು. ನಂತರ ಡಿ.20 ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಮನವಿ ಮಾಡಿದೆವು. ಆದರೂ ನಮಗೆ ಪರಿಹಾರ ಕೊಡಲಿಲ್ಲ.

ಬಳಿಕ ನಾನು ಬೆಂಗಳೂರಿನಲ್ಲೇ ಪ್ರಧಾನಿ ಮೋದಿಯವರನ್ನು‌ ಖುದ್ದಾಗಿ ಭೇಟಿ ಮಾಡಿ ಮನವಿ ಮಾಡಿದೆ. ಆದರೂ ಪರಿಹಾರ ಸಿಗಲಿಲ್ಲ ಎಂದು ಸಿದ್ದರಾಮಯ್ಯ ಬೇಸರ ಹೊರಹಾಕಿದರು.

ಕೇಂದ್ರದಿಂದ ನಯಾಪೈಸೆ ಬಿಡುಗಡೆ ಆಗದಿದ್ದಾಗ 327 ಕೋಟಿ ರು. ಕುಡಿಯುವ ನೀರಿಗೆ, 40 ಕೋಟಿ ರು. ಮೇವಿಗೆ, ರೈತರಿಗೆ 650 ಕೋಟಿ ರು. ಹೀಗೆ ಒಟ್ಟು 1017 ಕೋಟಿ ರು. ಬಿಡುಗಡೆ ಮಾಡಿದೆವು. 

ಜಿಲ್ಲಾಧಿಕಾರಿಗಳ ಬಳಿ ಇನ್ನೂ 800 ಕೋಟಿ ರು. ಹಣ ಬರನಿರ್ವಹಣೆ ಉದ್ದೇಶಕ್ಕಾಗಿಯೇ ಮೀಸಲಿಡಲಾಗಿದೆ. ಬರ ನಿರ್ವಹಣೆ ಕುರಿತಾಗಿ ಅಧಿಕಾರಿಗಳಿಗೆ ಸ್ಪಷ್ಡ ಸೂಚನೆಗಳನ್ನು ನೀಡಲಾಗಿದೆ ಎಂದರು.

4663 ಕೋಟಿ ರು. ಇನ್‌ಪುಟ್ ಸಬ್ಸಿಡಿಗೆ ಹಣ ಬೇಕು. ಕಾಯ್ದೆ ಪ್ರಕಾರ ಇಂಥ ಸನ್ನಿವೇಶದಲ್ಲಿ ತಡ ಮಾಡದೆ ಹಣ ಬಿಡುಗಡೆ ಆಗಬೇಕಿತ್ತು. ಆದರೆ ಐದು ತಿಂಗಳಾದರೂ ನಮಗೆ ಎನ್‌ಡಿಆರ್‌ಎಫ್‌ ನಿಧಿ ಬಂದೇ ಇಲ್ಲ. 

ನಮ್ಮ ನಾಡಿಗೆ, ನಮ್ಮ ನಾಡಿನ ಜನರಿಗೆ ಆಗಿರುವ ಅನ್ಯಾಯವನ್ನು ಸರಿಮಾಡಿ ಎಂದು ನಿಧಿ ಕೊಡಿ ಎಂದು ಮೇಲಿಂದ ಮೇಲೆ ಮನವಿ ಮಾಡಿ ಎಲ್ಲಾ ರೀತಿಯಲ್ಲೂ ಬೇಡಿಕೆ ಸಲ್ಲಿಸಿದರೂ ಪ್ರಯೋಜನ ಆಗಲಿಲ್ಲ. 

ಇವತ್ತು ಕೊಡುತ್ತಾರೆ, ನಾಳೆ ಕೊಡುತ್ತಾರೆ, ಇವತ್ತು ಬರುತ್ತೆ, ನಾಳೆ ಬರುತ್ತೆ ಅಂತ ಐದು ತಿಂಗಳು ಕಾದಿದ್ದಾಯ್ತು. ನಮಗೆ ಬೇರೆ ಇರಲಿಲ್ಲ ಎಂದು ಹೇಳಿದರು.

ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ಈ ಸಂದರ್ಭ ಉಪಸ್ಥಿತರಿದ್ದು ಕೇಂದ್ರದಿಂದ ಎನ್‌ಡಿಆರ್‌ಎಫ್‌ ಪರಿಹಾರ ಪಡೆಯಲು ಇದುವರೆಗೂ ರಾಜ್ಯ ಸರ್ಕಾರ ಮಾಡಿದ ಪ್ರಯತ್ನಗಳನ್ನು ವಿವರಿಸಿದರು.

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.

Recommended Stories

ಬಂಗಾಳ ಅಂತಿಮ ಮತಪಟ್ಟಿ ಬಿಡುಗಡೆ : 63 ಲಕ್ಷ ಹೆಸರು ಡಿಲೀಟ್‌
ಕಾಂಗ್ರೆಸ್‌ ಈಗ ಮುಸ್ಲಿಂ ಲೀಗ್‌ - ಮಾವೋವಾದಿ ಆಗಿದೆ : ಮೋದಿ ವಾಗ್ದಾಳಿ