ಮಂಡ್ಯದಲ್ಲಿ ಮೈತ್ರಿ ಅಭ್ಯರ್ಥಿಯನ್ನು ಗೆಲ್ಲಿಸಿ: ಮಾಜಿ ಸಿಎಂ ಕುಮಾರಸ್ವಾಮಿ

KannadaprabhaNewsNetwork | Published : Mar 7, 2024 1:51 AM

ಸಾರಾಂಶ

ಚುನಾವಣೆಯಲ್ಲಿ ಯಾರು ಅಭ್ಯರ್ಥಿಯಾಗುತ್ತಾರೆ ಎನ್ನುವುದು ಮುಖ್ಯವಲ್ಲ. ಬಿಜೆಪಿ ಜಿಲ್ಲಾ ನಾಯಕರು ಮತ್ತು ರಾಜ್ಯ ನಾಯಕರ ಸಲಹೆ ಪಡೆದು ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುವುದು. ಮೈತ್ರಿ ಅಭ್ಯರ್ಥಿ ಗೆಲುವೇ ನಮಗೆ ಬಹಳ ಮುಖ್ಯ. ನಾನು ಯಾರ ಹೆಸರನ್ನು ಘೋಷಣೆ ಮಾಡುತ್ತೇನೆಯೋ ಅವರ ಪರವಾಗಿ ಕೆಲಸ ಮಾಡಬೇಕು. ಹಿಂದಿನ ಘಟನೆಗಳಿಂದ ಪಾಠ ಕಲಿಯಬೇಕು. ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕು.

ಕನ್ನಡಪ್ರಭ ವಾರ್ತೆ ಮಂಡ್ಯಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್- ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸುವುದನ್ನೇ ಗುರಿಯಾಗಿಸಿಕೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಜಿಲ್ಲಾ ನಾಯಕರಿಗೆ ಸೂಚಿಸಿದರು.

ಬುಧವಾರ ಬೆಂಗಳೂರಿನ ಜೆ.ಪಿ.ನಗರ ನಿವಾಸದಲ್ಲಿ ಲೋಕಸಭಾ ಚುನಾವಣೆ ಸಂಬಂಧ ಕರೆದಿದ್ದ ಜಿಲ್ಲಾಮಟ್ಟದ ನಾಯಕರ ಸಭೆ ನಡೆಸಿ ಮಾತನಾಡಿ, ಚುನಾವಣೆಯಲ್ಲಿ ಯಾರು ಅಭ್ಯರ್ಥಿಯಾಗುತ್ತಾರೆ ಎನ್ನುವುದು ಮುಖ್ಯವಲ್ಲ. ಬಿಜೆಪಿ ಜಿಲ್ಲಾ ನಾಯಕರು ಮತ್ತು ರಾಜ್ಯ ನಾಯಕರ ಸಲಹೆ ಪಡೆದು ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುವುದು. ಮೈತ್ರಿ ಅಭ್ಯರ್ಥಿ ಗೆಲುವೇ ನಮಗೆ ಬಹಳ ಮುಖ್ಯ. ನಾನು ಯಾರ ಹೆಸರನ್ನು ಘೋಷಣೆ ಮಾಡುತ್ತೇನೆಯೋ ಅವರ ಪರವಾಗಿ ಕೆಲಸ ಮಾಡಬೇಕು. ಹಿಂದಿನ ಘಟನೆಗಳಿಂದ ಪಾಠ ಕಲಿಯಬೇಕು. ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕು ಎಂದು ತಾಕೀತು ಮಾಡಿದರು.

ಪಕ್ಷಕ್ಕೆ, ಚುನಾವಣೆ ಗೆಲುವಿಗೆ ಹಾನಿ ಆಗುವಂತಹ ಯಾವುದೇ ಕೆಲಸವನ್ನು ಯಾರೂ ಮಾಡಬಾರದು. ಯಾವ ಕಾರಣಕ್ಕೂ ಮೈತ್ರಿ ಧರ್ಮವನ್ನು ಮೀರಬಾರದು ಎಂದು ಸ್ಪಷ್ಟವಾಗಿ ತಿಳಿಸಿದರು.

ಇದೇ ವೇಳೆ ಜಿಲ್ಲಾ ನಾಯಕರು ನೀಡಿದ ಹಲವಾರು ಸಲಹೆಗಳನ್ನು ಆಲಿಸಿದ ಕುಮಾರಸ್ವಾಮಿ, ಚುನಾವಣೆ ಸಂಬಂಧ ಮಹತ್ವದ ಸೂಚನೆ ನಾಯಕರಿಗೆ ನೀಡಿದರು. ಅಲ್ಲದೇ, ಈ ಕ್ಷಣದಿಂದಲೇ ಚುನಾವಣಾ ಕಾರ್ಯ ಚಟುವಟಿಕೆ ಚುರುಕುಗೊಳಿಸುವಂತೆ ಸಲಹೆ ನೀಡಿದರು.

ಜಿಲ್ಲೆಯೊಳಗಿನ ರಾಜಕೀಯ ಸ್ಥಿತಿಗತಿಗಳ ಕುರಿತಂತೆ ಜಿಲ್ಲಾ ನಾಯಕರಿಂದ ಮಾಹಿತಿ ಪಡೆದುಕೊಂಡ ಕುಮಾರಸ್ವಾಮಿ ಮೈತ್ರಿ ನಂತರ ಜಿಲ್ಲೆಯೊಳಗಿನ ರಾಜಕೀಯ ಪರಿಸ್ಥಿತಿಗಳ ಕುರಿತು ನಾಯಕರಿಂದ ಮಾಹಿತಿ ಪಡೆದುಕೊಂಡರು. ಮೈತ್ರಿ ಆಗಿರುವ ಕಾರಣ ಬಿಜೆಪಿ ಮುಖಂಡರು, ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಚುನಾವಣೆಯಲ್ಲಿ ತೊಡಗಬೇಕು ಎಂದರು.

ಮಾಜಿ ಸಚಿವರಾದ ಸಿ.ಎಸ್.ಪುಟ್ಟರಾಜು, ಡಿ.ಸಿ.ತಮ್ಮಣ್ಣ, ಮಾಜಿ ಶಾಸಕರಾದ ಸುರೇಶ್ ಗೌಡ, ರವೀಂದ್ರ ಶ್ರೀಕಂಠಯ್ಯ, ಡಾ.ಅನ್ನದಾನಿ, ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ, ಜಿಲ್ಲಾಧ್ಯಕ್ಷ ರಮೇಶ್ ಅವರು ಭಾಗವಹಿಸಿದ್ನರು.

Share this article