ಚಾಮರಾಜನಗರ: ನಗರಸಭಾ ವ್ಯಾಪ್ತಿಯಲ್ಲಿ ಹಸಿರು ಪಟಾಕಿಗಳ ಹೊರತು ಇತರೆ ಪಟಾಕಿಗಳ ಮಾರಾಟ ಹಾಗೂ ಬಳಕೆಯನ್ನು ನಿಷೇಧಿಸಲಾಗಿದೆ ಎಂದು ನಗರಸಭೆ ತಿಳಿಸಿದೆ. ದೀಪಾವಳಿ ಹಬ್ಬದಂದು ಪಟಾಕಿಗಳನ್ನು ಸಿಡಿಸುವುದರಿಂದ ವಾಯು ಮಾಲಿನ್ಯ ಹೆಚ್ಚಾಗುವುದಲ್ಲದೇ, ಶಬ್ದ ಮಾಲಿನ್ಯ ಉಂಟಾಗಿ ಮನುಷ್ಯ ಮತ್ತು ಜೀವ ಸಂಕುಲದ ಆರೋಗ್ಯದ ಮೇಲೆ ತೀವ್ರ ಪರಿಣಾಮ ಉಂಟಾಗುತ್ತಿದೆ. 2018ರ ರಾಷ್ಟ್ರೀಯ ಹಸಿರು ಪ್ರಾಧಿಕಾರದ ಆದೇಶದಂತೆ ಸಿಎಸ್‌ಐಸಿ-ಎನ್‌ಇಇಆರ್‌ಐ ಶಿಫಾರಸ್ಸು ಮಾಡಿದ ಹಸಿರು ಪಟಾಕಿಗಳನ್ನು ಮಾತ್ರ ಉಪಯೋಗಿಸುವಂತೆ ಸರ್ವೋಚ್ಛ ನ್ಯಾಯಾಲಯವು ಸ್ಪಷ್ಟ ನಿರ್ದೇಶನ ನೀಡಿರುವ ಹಿನ್ನೆಲೆಯಲ್ಲಿ ಇತರೆ ಪಟಾಕಿಗಳ ಮಾರಾಟ ಹಾಗೂ ಬಳಕೆಯನ್ನು ನಿಷೇಧಿಸಲಾಗಿದೆ. ಪಟಾಕಿಗಳ ಪ್ಯಾಕೇಟ್ ಮೇಲೆ ಹಸಿರು ಪಟಾಕಿಯ ಚಿನ್ಹೆ ಹಾಗೂ ಕ್ಯೂಆರ್ ಕೋಡ್ ಸಹ ಇರುತ್ತದೆ. ಸಾರ್ವಜನಿಕರು ಇದನ್ನು ಗಮನಿಸಿ ಹಸಿರು ಪಟಾಕಿಗಳನ್ನು ಖರೀದಿಸಬೇಕು ಹಾಗೂ ಬಳಸುವಾಗ ಯಾವುದೇ ಪ್ರಾಣಿ, ಪಕ್ಷಿಗಳು, ಮಕ್ಕಳು ಮತ್ತು ವೃದ್ದರಿಗೆ ತೊಂದರೆಯಾಗದಂತೆ ಬಳಸಬೇಕು. ನಿಷೇಧಿತ ಪಟಾಕಿಗಳ ಮಾರಾಟ ಕಂಡು ಬಂದಲ್ಲಿ ಅಂತಹ ಪಟಾಕಿಗಳನ್ನು ವಶಪಡಿಸಿಕೊಳ್ಳಲಾಗುವುದು ಮತ್ತು ನಿಯಮಗಳನ್ವಯ ಕಾನೂನು ಕ್ರಮ ಕೈಗೊಳ್ಳಲಾಗುವುದು. ಆಸ್ಪತ್ರೆಗಳು ಹಾಗೂ ಶಿಕ್ಷಣ ಸಂಸ್ಥೆಗಳ ಸುತ್ತಮುತ್ತಲಿನ ಹಾಗೂ ಇನ್ನಾವುದೇ ನಿಷೇಧಿತ ಪ್ರದೇಶದಲ್ಲಿ ಪಟಾಕಿಗಳನ್ನು ಸ್ಪೋಟಿಸುವಂತಿಲ್ಲ. ಹಬ್ಬದ ಸಮಯದಲ್ಲಿ ರಾತ್ರಿ 8ರಿಂದ 10 ಗಂಟೆಯವರೆಗೆ ಮಾತ್ರ ಹಸಿರು ಪಟಾಕಿಗಳನ್ನು ಬಳಸಲು ಅವಕಾಶ ನೀಡಿದ್ದು, ಉಳಿದ ಸಮಯದಲ್ಲಿ ಪಟಾಕಿಗಳ ಬಳಕೆಯನ್ನು ನಿಷೇಧಿಸಲಾಗಿದೆ ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.-------------------