ಲೈಂಗಿಕ ದೌರ್ಜನ್ಯ ಕೇಸಲ್ಲಿ ರೇವಣ್ಣಗೆ 1 ದಿನ ಬೇಲ್‌

| Published : May 17 2024, 10:14 AM IST

HD Revanna Prisoner No 4567

ಸಾರಾಂಶ

ಶಾಸಕ ಎಚ್‌.ಡಿ.ರೇವಣ್ಣ ಅವರಿಗೆ   ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಷರತ್ತುಬದ್ಧ ಮಧ್ಯಂತರ ಜಾಮೀನು ನೀಡಿ ವಿಚಾರಣೆಯನ್ನು  ಮುಂದೂಡಿದೆ.

ಬೆಂಗಳೂರು :  ಲೈಂಗಿಕ ದೌರ್ಜನ್ಯಕ್ಕೊಳಗಾದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಜಾಮೀನು ಪಡೆದ ಜೆಡಿಎಸ್ ಶಾಸಕ ಎಚ್‌.ಡಿ.ರೇವಣ್ಣ ಅವರಿಗೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿಯೂ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಷರತ್ತುಬದ್ಧ ಮಧ್ಯಂತರ ಜಾಮೀನು ನೀಡಿ ವಿಚಾರಣೆಯನ್ನು ಶುಕ್ರವಾರಕ್ಕೆ ಮುಂದೂಡಿದೆ.

ಹೊಳೇನರಸಿಪುರದಲ್ಲಿ ದಾಖಲಾದ ಪ್ರಕರಣ ಸಂಬಂಧ ನ್ಯಾಯಾಲಯವು ಗುರುವಾರ ಜಾಮೀನು ಅರ್ಜಿ ವಿಚಾರಣೆ ನಡೆಸಿತು. ಶುಕ್ರವಾರ ಮಧ್ಯಾಹ್ನದವರೆಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.

ವಾದ-ಪ್ರತಿವಾದ ಆಲಿಸಿದ ಬಳಿಕ ನ್ಯಾಯಾಲಯವು ರೇವಣ್ಣ ಅವರಿಗೆ ಐದು ಲಕ್ಷ ರು. ಬಾಂಡ್, ಇಬ್ಬರ ಶ್ಯೂರಿಟಿ ಹಾಗೂ ಎಸ್ಐಟಿ ತನಿಖೆಗೆ ಸಹಕರಿಸಬೇಕು ಎಂದು ಷರತ್ತುವಿಧಿಸಿ ಜಾಮೀನು ಮಂಜೂರು ಮಾಡಿದೆ. ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಧ್ಯಂತರ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದ ರೇವಣ್ಣ, ಜಾಮೀನುಸಹಿತ ಪ್ರಕರಣ ಇದಾಗಿರುವುದರಿಂದ ಖುದ್ದು ನ್ಯಾಯಾಲಯ ಮುಂದೆ ಹಾಜರಾದರು. ರೇವಣ್ಣ ಪರ ವಕೀಲರು ವಾದ ಮಂಡಿಸಿ ತಮ್ಮ ಕಕ್ಷಿದಾರರು ಎಸ್ಐಟಿ ತನಿಖೆಗೆ ಸಹಕರಿಸಲಿದ್ದು, ಮಧ್ಯಂತರ ಜಾಮೀನು ಮಂಜೂರು ಮಾಡುವಂತೆ ಮನವಿ ಮಾಡಿದರು. ಅಲ್ಲದೇ, ಈಗಾಗಲೇ ಅಪಹರಣ ಪ್ರಕರಣದಲ್ಲಿ ರೇವಣ್ಣನ ಬಂಧಿತರಾಗಿದ್ದಾಗ ಎಸ್ಐಟಿ ಅಧಿಕಾರಿಗಳು ಈ ಪ್ರಕರಣದ ಬಗ್ಗೆ ವಿಚಾರಣೆ ನಡೆಸದೆ ಈಗ ಪೊಲೀಸ್ ವಶಕ್ಕೆ ಕೇಳುತ್ತಿರುವುದು ಸರಿಯಲ್ಲ ಎಂದು ಆಕ್ಷೇಪಿಸಿದರು.

ಇದಕ್ಕೆ ಎಸ್ಐಟಿಯು ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ ಮಧ್ಯಾಹ್ನಕ್ಕೆ ವಿಚಾರಣೆ ಮುಂದೂಡಿತು. ಎಸ್ಐಟಿ ಪರ ವಕೀಲೆ ಜಯ್ನಾ ಕೊಠಾರಿ ಪ್ರತಿವಾದ ಮಂಡಿಸಿ, ಆರೋಪಿಯು ಪೊಲೀಸರ ಮುಂದೆ ಸ್ವಯಂಪ್ರೇರಿತವಾಗಿ ಹಾಜರಾಗಿ ಶರಣಾಗಬೇಕು. ಆರೋಪಿ ತುಂಬಾ ಪ್ರಭಾವಿಯಾಗಿದ್ದಾರೆ. ಗುರುವಾರ ಬೆಳಗ್ಗೆ ಹಾಜರಾಗಿ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಆದರೆ, ಈಗ ನ್ಯಾಯಾಲಯದ ಮುಂದೆ ಶರಣಾಗಲು ತಯಾರಿಲ್ಲ ಎಂದರೆ ಹೇಗೆ ಸಾಧ್ಯ? ಇಲ್ಲೇ ಎಲ್ಲೋ ಕಾರಿನಲ್ಲಿ ಇರಬೇಕು. ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಬೇಕು ಎಂದರು.

ನ್ಯಾಯಾಲಯದ ಮುಂದೆ ಹಾಜರಾಗುವಂತೆ ರೇವಣ್ಣ ಅವರಿಗೆ ಆದೇಶಿಸಿ ಕೆಲ ಕಾಲ ವಿಚಾರಣೆ ಮುಂದೂಡಿತು. ನ್ಯಾಯಾಲಯದ ಸೂಚನೆ ಮೇರೆಗೆ ಅಣತಿಯಂತೆ ರೇವಣ್ಣ ಹಾಜರಾದರು. ವಾದ-ಪ್ರತಿವಾದ ಆಲಿಸಿದ ಬಳಿಕ ಮಧ್ಯಂತರ ಜಾಮೀನು ನೀಡಿ ವಿಚಾರಣೆಯನ್ನು ಶುಕ್ರವಾರಕ್ಕೆ ಮುಂದೂಡಲಾಯಿತು.