ಸಾರಾಂಶ
ಹೋಳಿ ಹಬ್ಬದ ಊಟ ಸೇವಿಸಿ ವಸತಿ ನಿಲಯದ ಓರ್ವ ವಿದ್ಯಾರ್ಥಿ ಸಾವನ್ನಪ್ಪಿ, 29 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಭಾನುವಾರ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕಾಗೇಪುರದಲ್ಲಿ ನಡೆದಿದೆ.
ಮಳವಳ್ಳಿ(ಮಂಡ್ಯ) : ಹೋಳಿ ಹಬ್ಬದ ಊಟ ಸೇವಿಸಿ ವಸತಿ ನಿಲಯದ ಓರ್ವ ವಿದ್ಯಾರ್ಥಿ ಸಾವನ್ನಪ್ಪಿ, 29 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಭಾನುವಾರ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕಾಗೇಪುರದಲ್ಲಿ ನಡೆದಿದೆ.
ಇಲ್ಲಿನ ಗೋಕುಲ ವಿದ್ಯಾ ಸಂಸ್ಥೆ ವಿದ್ಯಾರ್ಥಿ, ಮೇಘಾಲಯದ ಕೇರ್ಲಾಂಗ್ (14) ಮೃತ ವಿದ್ಯಾರ್ಥಿ. ಅಸ್ವಸ್ಥಗೊಂಡಿರುವ ವಿದ್ಯಾರ್ಥಿಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಮಳವಳ್ಳಿ ತಾಲೂಕಿನ ಭೂಗತಹಳ್ಳಿ ಸಮೀಪದ ಸಮುದಾಯ ಭವನವೊಂದರಲ್ಲಿ ಸಮುದಾಯವೊಂದು ಹೋಳಿ ಆಚರಣೆ ಮಾಡಿ ಉಳಿದ ಊಟವನ್ನು ಕಾಗೇಪುರದ ಗೋಕುಲ ವಿದ್ಯಾಸಂಸ್ಥೆಗೆ ನೀಡಿದ್ದರು.
ಊಟ ಸೇವಿಸಿದ 30 ವಿದ್ಯಾರ್ಥಿಗಳು ವಾಂತಿ ಭೇದಿಯಿಂದ ಅಸ್ವಸ್ಥಗೊಂಡಿದ್ದಾರೆ. ತಕ್ಷಣ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮತ್ತೆ ಹೆಚ್ಚಿನ ಚಿಕಿತ್ಸೆಗಾಗಿ ಭಾನುವಾರ ಎಲ್ಲಾ ವಿದ್ಯಾರ್ಥಿಗಳನ್ನು ತಾಲೂಕಿನ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪೈಕಿ ಓರ್ವ ವಿದ್ಯಾರ್ಥಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ.