ಸಾರಾಂಶ
ಬೆಂಗಳೂರು : ಖಾಸಗಿ ಬಸ್‌ವೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಸವಾರನ ಮೇಲೆ ಅದೇ ಬಸ್‌ನ ಚಕ್ರ ಹರಿದು ಆತ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಕೆ.ಆರ್.ಪುರ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ದೇವರಬೀಸನಹಳ್ಳಿ ನಿವಾಸಿ ಮಲ್ಲಪ್ಪ(26) ಮೃತ ಸವಾರ. ಭಾನುವಾರ ರಾತ್ರಿ ಸುಮಾರು 9.30ಕ್ಕೆ ಕೆ.ಆರ್.ಪುರ ರೈಲು ನಿಲ್ದಾಣದ ಬಳಿ ಈ ದುರ್ಘಟನೆ ನಡೆದಿದೆ.
ಕಲಬುರಗಿ ಮೂಲದ ಮಲ್ಲಪ್ಪ ವೃತ್ತಿಯಲ್ಲಿ ಜೆಸಿಬಿ ಆಪರೇಟರ್ ಆಗಿದ್ದು, ದೇವರಬೀಸನಹಳ್ಳಿಯಲ್ಲಿ ನೆಲೆಸಿದ್ದರು. ಭಾನುವಾರ ರಾತ್ರಿ ಯಲಹಂಕದಲ್ಲಿ ಸ್ನೇಹಿತರನ್ನು ಭೇಟಿಯಾಗಿ ದ್ವಿಚಕ್ರ ವಾಹನದಲ್ಲಿ ವಾಪಾಸ್ ಮನೆ ಕಡೆಗೆ ಹೊರಟ್ಟಿದ್ದರು. ಕೆ.ಆರ್.ಪುರ ರೈಲು ನಿಲ್ದಾಣದ ಬಳಿ ತೆರಳುವಾಗ ವೇಗವಾಗಿ ಬಂದ ಖಾಸಗಿ ಬಸ್‌ವೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ದ್ವಿಚಕ್ರ ವಾಹನ ಸಹಿತ ರಸ್ತೆಗೆ ಬಿದ್ದ ಸವಾರ ಮಲ್ಲಪ್ಪನ ಮೇಲೆ ಅದೇ ಬಸ್‌ನ ಚಕ್ರ ಉರುಳಿದ ಪರಿಣಾಮ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ ಸಂಚಾರ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ಕಾರಣವಾದ ಖಾಸಗಿ ಬಸ್‌ನ ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. ಈ ಸಂಬಂಧ ಕೆ.ಆರ್.ಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಬೈಕ್ ನಿಯಂತ್ರಣ ತಪ್ಪಿ ಅಪಘಾತ: ಖಾಸಗಿ ಕಂಪನಿ ಉದ್ಯೋಗಿ ಸಾವು
ಕನ್ನಡಪ್ರಭ ವಾರ್ತೆ ಬೆಂಗಳೂರು
ದ್ವಿಚಕ್ರ ವಾಹನ ನಿಯಂತ್ರಣ ತಪ್ಪಿ ರಸ್ತೆಗೆ ಉರುಳಿ ಬಿದ್ದ ಪರಿಣಾಮ ಸವಾರ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿರುವ ಘಟನೆ ಎಲೆಕ್ಟ್ರಾನಿಕ್ ಸಿಟಿ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಕಾಳೇನ ಅಗ್ರಹಾರ ನಿವಾಸಿ ಶ್ರೀಶೈಲ ಕುಮಾರ್(36) ಮೃತ ಸವಾರ. ಭಾನುವಾರ ತಡರಾತ್ರಿ ಸುಮಾರು 12.30ರ ಹೊತ್ತಿಗೆ ಬೇಗೂರು-ಕೊಪ್ಪ ರಸ್ತೆಯ ಮೈಲಸಂದ್ರದ ಬಳಿ ಈ ಘಟನೆ ನಡೆದಿದೆ.
ಬೆಳಗಾವಿ ಮೂಲದ ಶ್ರೀಶೈಲ ಅವರು ಕಾಳೇನ ಅಗ್ರಹಾರದಲ್ಲಿ ನೆಲೆಸಿದ್ದರು. ನಗರದ ಖಾಸಗಿ ಕಂಪನಿಯೊಂದರ ಉದ್ಯೋಗಿಯಾಗಿದ್ದರು. ಭಾನುವಾರ ತಡರಾತ್ರಿ ದ್ವಿಚಕ್ರ ವಾಹನದಲ್ಲಿ ಬರುವಾಗ ಮೈಲಸಂದ್ರದ ಬಳಿ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದಿದ್ದಾರೆ. ಈ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಸವಾರ ಶ್ರೀಶೈಲನನ್ನು ಸ್ಥಳೀಯರು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಿಸದೆ ಶ್ರೀಶೈಲ ಮುಂಜಾನೆ ಮೃತಪಟ್ಟಿದ್ದಾರೆ. ಈ ಸಂಬಂಧ ಎಲೆಕ್ಟ್ರಾನಿಕ್ ಸಿಟಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರಸ್ತೆ ಬಿದ್ದ ಬೈಕ್: ಸವಾರ ಸಾವುಕನ್ನಡಪ್ರಭ ವಾರ್ತೆ ಬೆಂಗಳೂರುವೇಗವಾಗಿ ದ್ವಿಚಕ್ರ ವಾಹನ ವಾಹನ ಚಲಾಯಿಸುವಾಗ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದು ಸವಾರ ಮೃತಪಟ್ಟಿರುವ ಘಟನೆ ಹೆಬ್ಬಾಳ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮನೋರಾಯನಪಾಳ್ಯ ನಿವಾಸಿ ಸುಮನ್ ಪ್ರಭಾತ್(21) ಮೃತ ಸವಾರ. ಸೋಮವಾರ ಮಧ್ಯರಾತ್ರಿ ಸುಮಾರು 1.30ಕ್ಕೆ ಹೆಬ್ಬಾಳದ ಲುಂಬಿನಿ ಗಾರ್ಡನ್ ಬಳಿ ಈ ದುರ್ಘಟನೆ ನಡೆದಿದೆ.ವಾಣಿಜ್ಯ ಪದವೀಧರನಾದ ಸುಮನ್ ಭಾನುವಾರ ರಾತ್ರಿ ಸ್ನೇಹಿತನ ಭೇಟಿಯಾಗಿ ಮುಂಜಾನೆ ದ್ವಿಚಕ್ರ ವಾಹನದಲ್ಲಿ ಮನೆ ಕಡೆಗೆ ಹೊರಟಿದ್ದಾನೆ. ಹೊರವರ್ತುಲ ರಸ್ತೆಯ ಲುಂಬಿನಿ ಗಾರ್ಡನ್ ಬಳಿ ವೇಗವಾಗಿ ದ್ವಿಚಕ್ರ ವಾಹನ ಚಲಾಯಿಸುವಾಗ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ. ಬಳಿಕ ದಾರಿಹೋಕರು ಗಾಯಾಳುವನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಪರೀಕ್ಷಿಸಿದ ವೈದ್ಯರು ಮಾರ್ಗ ಮಧ್ಯೆಯೇ ಸುಮನ್ ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ.
ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ ಸಂಚಾರ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಅತಿವೇಗ ಹಾಗೂ ನಿರ್ಲಕ್ಷ್ಯದ ಚಾಲನೆಯೇ ಅಪಘಾತಕ್ಕೆ ಕಾರಣ ಎಂಬುದು ಮೇಲ್ನೊಟಕ್ಕೆ ಕಂಡು ಬಂದಿದೆ. ಹೆಬ್ಬಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.