ಸಾರಾಂಶ
ಡೆತ್ ನೋಟ್ ಬರೆದಿಟ್ಟು ವಿಶ್ವೇಶ್ವರಯ್ಯ ನಾಲೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಿರೇಮರಳಿ ಗ್ರಾಮದಲ್ಲಿ ನಡೆದಿದೆ.
ಪಾಂಡವಪುರ : ಡೆತ್ ನೋಟ್ ಬರೆದಿಟ್ಟು ವಿಶ್ವೇಶ್ವರಯ್ಯ ನಾಲೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಿರೇಮರಳಿ ಗ್ರಾಮದಲ್ಲಿ ನಡೆದಿದೆ. ಪಟ್ಟಣದ ಕಸಬಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷ, ಹಾಲಿ ನಿರ್ದೇಶಕ ಹಿರೇಮರಳಿ ಗ್ರಾಮದ ಸ್ನೇಹಲೋಕ ಚಲುವರಾಜು (47) ಗುರುವಾರ ವಿಸಿ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡರು.
ಮೃತ ಚಲವರಾಜು ಸಾಯುವ ಮುನ್ನ ಡೆಟ್‌ನೋಟ್ ಬರೆದಿಟ್ಟಿದ್ದು, ಅದರಲ್ಲಿ ಯಾರೋ ಮಾಡಿತ ತಪ್ಪಿಗೆ ನನ್ನ ಸಾವು. ನನ್ನ ಮನವಿ ನನ್ನ ಅಪ್ಪ, ಅಮ್ಮ, ಹೆಂಡತಿ, ಮಕ್ಕಳನ್ನು ಕೈಬಿಡಬೇಡಿ. ನಿಮ್ಮ ಮಕ್ಕಳಂತೆ ಸಹಾಯ ಮಾಡಿ ಎಂದು ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮೃತ ದೇಹವು ಮಂಡ್ಯ ತಾಲೂಕಿನ ಯಲಿಯೂರು ಗ್ರಾಮದ ಬಳಿಯಲ್ಲಿ ವಿಸಿ ನಾಲೆಯಲ್ಲಿ ಶುಕ್ರವಾರ ಬೆಳಗ್ಗೆ ದೊರೆತಿದೆ. ಮಂಡ್ಯ ಮಿಮ್ಸ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ವಾರಸ್ಸುದಾರರಿಗೆ ಒಪ್ಪಿಸಿದ್ದಾರೆ. ಮಾಜಿ ಸಚಿವ ಸಿ.ಎಸ್. ಪುಟ್ಟರಾಜು ಅವರು ಮಂಡ್ಯ ಮಿಮ್ಸ್ ಆಸ್ಪತ್ರೆಯಲ್ಲಿಯೇ ಅಂತಿಮ ದರ್ಶನಪಡೆದು ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದರು.
ಮೃತರಿಗೆ ಪತ್ನಿ, ಗಂಡು-ಹೆಣ್ಣು ಮಕ್ಕಳಿದ್ದಾರೆ. ಶುಕ್ರವಾರ ಸಂಜೆ ಹಿರೇಮರಳಿ ಗ್ರಾಮದಲ್ಲಿ ಅಂತ್ಯಸಂಸ್ಕಾರ ನಡೆಯಿತು. ಘಟನೆ ಸಂಬಂಧ ಮೇಲುಕೋಟೆ ಕ್ಷೇತ್ರ ವ್ಯಾಪ್ತಿಯ ಮಂಡ್ಯ ಶಿವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೈಕ್ ಡಿಕ್ಕಿ: ಗಾಯಗೊಂಡಿದ್ದ ಉಪ ತಹಸೀಲ್ದಾರ್ ಸಾವು
ಮಳವಳ್ಳಿ: ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಬಳಿ ಕಳೆದ ಅ.19ರಂದು ರಸ್ತೆ ದಾಟುತ್ತಿದ್ದ ವೇಳೆ ಬೈಕ್ ಡಿಕ್ಕಿಯಾಗಿ ಗಾಯಗೊಂಡಿದ್ದ ಉಪ ತಹಸೀಲ್ದಾರ್ ಚಿಕಿತ್ಸೆ ಫಲಕಾರಿಯಾಗದೇ ಗುರುವಾರ ಮೃತಪಟ್ಟಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಬೀರೂರು ಮೂಲದ ಎನ್.ಟಿ.ಸುನೀಲ್ (55) ಅವರು ಹಲಗೂರು ಉಪ ತಹಸೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಕಳೆದ ಅ.19ರಂದು ರಾತ್ರಿ 9.30ರ ಸಮಯದಲ್ಲಿ ಕೊಳ್ಳೇಗಾಲ ರಸ್ತೆ ಸಾರ್ವಜನಿಕ ಆಸ್ಪತ್ರೆ ಬಳಿ ನಡೆದುಕೊಂಡು ರಸ್ತೆಯ ದಾಟುತ್ತಿದ್ದಾಗ ಬೈಕ್ ಡಿಕ್ಕಿ ಹೊಡೆದಿತ್ತು. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಗುರುವಾರ ರಾತ್ರಿ ಮೃತಪಟ್ಟಿದ್ದಾರೆ. ಈ ಸಂಬಂಧ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.