ತಲೆ ಮೇಲೆ ಕಲ್ಲು ಎತ್ತಿಹಾಕಿ ವ್ಯಕ್ತಿ ಕೊಲೆ

| Published : Sep 25 2024, 12:51 AM IST

ಸಾರಾಂಶ

ನಿರ್ಮಾಣ ಹಂತದ ಕಟ್ಟಡದಲ್ಲಿ ಕಾರ್ಮಿಕನ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿಕೊಡಿರುವ ಘಟನೆ ನಡೆದಿದೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ನಿರ್ಮಾಣ ಹಂತದ ಕಟ್ಟಡದಲ್ಲಿ ಕಾರ್ಮಿಕನ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿಕೊಡಿರುವ ಘಟನೆ ಹನುಮಂತನಗರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಮುನೇಶ್ವರ ಬ್ಲಾಕ್‌ ನಿವಾಸಿ ಅಜಿತ್‌(30) ಕೊಲೆಯಾದ ದುರ್ದೈವಿ. ಮಂಗಳವಾರ ಮಧ್ಯಾಹ್ನ ಸುಮಾರು 2.30ಕ್ಕೆ ಹನುಮಂತನಗರ ಸಮೀಪದ ಶ್ರೀನಗರ ಬಸ್‌ ನಿಲ್ದಾಣದ ಬಳಿಯ ನಿರ್ಮಾಣ ಹಂತದ ಕಟ್ಟಡದಲ್ಲಿ ಈ ಘಟನೆ ನಡೆದಿದೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಕ್ಷುಲ್ಲಕ ಕಾರಣಕ್ಕೆ ಪರಿಚಿತರೇ ಅಜಿತ್‌ನನ್ನು ಕೊಲೆ ಮಾಡಿರುವ ಶಂಕೆ ಇದ್ದು, ತನಿಖೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಮಿಳುನಾಡು ಮೂಲದ ಅಜಿತ್‌ ಕಳೆದ ಆರು ತಿಂಗಳಿಂದ ಮುನೇಶ್ವರ ಬ್ಲಾಕ್‌ನಲ್ಲಿ ಚಿಕ್ಕ ಮನೆಯಲ್ಲಿ ನೆಲೆಸಿದ್ದ. ಈತನ ಪತ್ನಿ ಮತ್ತು ಮಗು ತಮಿಳುನಾಡಿನಲ್ಲಿ ನೆಲೆಸಿದ್ದಾರೆ. ಅಜಿತ್‌ ಶ್ರೀನಗರ, ಮುನೇಶ್ವರ ಬ್ಲಾಕ್‌, ಹನುಮಂತನಗರ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಲ್ಲಿ ದಿನಗೂಲಿ ಮಾಡಿಕೊಂಡು ಜೀವನ ದೂಡುತ್ತಿದ್ದ. ಎಷ್ಟೋ ಬಾರಿ ಕೆಲಸ ಮಾಡುವ ಸ್ಥಳಗಳಲ್ಲೇ ರಾತ್ರಿ ಮಲಗುತ್ತಿದ್ದ ಎಂದು ತಿಳಿದು ಬಂದಿದೆ.

ನಿರ್ಮಾಣ ಹಂತದ ಕಟ್ಟಡದಲ್ಲಿ ಕೊಲೆ:

ಮಂಗಳವಾರ ಮಧ್ಯಾಹ್ನ ಶ್ರೀನಗರ ಬಸ್‌ ನಿಲ್ದಾಣ ಸಮೀಪದ ನಿರ್ಮಾಣ ಹಂತದ ಕಟ್ಟಡದಲ್ಲಿ ಅಜಿತ್‌ ತಲೆ ಮೇಲೆ ದುಷ್ಕರ್ಮಿಗಳು ಕಲ್ಲು ಎತ್ತಿಹಾಕಿ ಕೊಲೆ ಮಾಡಿದ್ದಾರೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಅಜಿತ್‌ನನ್ನು ನೋಡಿದ ಕಾರ್ಮಿಕರು ನೀಡಿದ ಮಾಹಿತಿ ಮೇರೆಗೆ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲಿಸಿದ್ದಾರೆ. ಮೃತ ಅಜಿತ್‌ನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ತಮಿಳುನಾಡಿನಲ್ಲಿರುವ ಮೃತನ ಕುಟುಂಬಕ್ಕೆ ಮಾಹಿತಿ ನೀಡಲಾಗಿದೆ. ಹನುಮಂತನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.