ಸಾರಾಂಶ
ಬೆಂಗಳೂರು : ನಕಲಿ ಜಾತಿ ಪ್ರಮಾಣ ಪತ್ರ ಪಡೆದವರ ವಿರುದ್ಧ ಜಿಲ್ಲಾ ಜಾತಿ ಪರಿಶೀಲನಾ ಸಮಿತಿ ಶಿಫಾರಸ್ಸು ಮಾಡದೆ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯ ಕಾನೂನು ಕ್ರಮ ಜರುಗಿಸಲಾಗದು ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.
ನಕಲಿ ಜಾತಿ ಪ್ರಮಾಣ ಪ್ರಮಾಣ ಪತ್ರ ಪಡೆದು ಸರ್ಕಾರಿ ಉದ್ಯೋಗ ಗಿಟ್ಟಿಸಿಕೊಂಡ ಆರೋಪ ಸಂಬಂಧ ಕೇಂದ್ರ ಶಿಪ್ಪಿಂಗ್ ಸಚಿವಾಲಯದಲ್ಲಿ ಸಹಾಯಕ ಲೈಟ್ ಕೀಪರ್ ಆಗಿ ಸೇವೆ ಸಲ್ಲಿಸುತ್ತಿದ್ದ ಎ.ಎಸ್. ಪಳನಿ ಎಂಬುವವರ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದುಪಡಿಸಿದ ನ್ಯಾಯಮೂರ್ತಿ ಹೇಮಂತ್ ಚಂದನ ಗೌಡರ ಅವರ ಪೀಠ ಈ ಸ್ಪಷ್ಟನೆ ನೀಡಿದೆ.
ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪಂಗಡಗಳು ಹಾಗೂ ಇತರೆ ಹಿಂದುಳಿದ ವರ್ಗಗಳ (ಮೀಸಲಾತಿ ಮತ್ತು ನೇಮಕಾತಿ ಇತರೆ) ಅಧಿನಿಯಮ 1992ರ ನಿಯಮ 7ರ ಪ್ರಕಾರ ನಕಲಿ ಜಾತಿ ಪ್ರಮಾಣ ಪತ್ರ ಪಡೆದವರ ವಿರುದ್ಧ ಕ್ರಮ ಜರುಗಿಸಲು ಜಿಲ್ಲಾ ಜಾತಿ ಪರಿಶೀಲನಾ ಸಮಿತಿ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯಕ್ಕೆ ಶಿಫಾರಸು ಮಾಡಬೇಕು. ಆ ಬಳಿಕವೇ ಜಾರಿ ನಿರ್ದೇಶನಾಲಯ ಆರೋಪಿತರ ವಿರುದ್ಧ ಕಾನೂನು ಕ್ರಮ ಜರುಗಿಸಲು ಮುಂದಾಗಬೇಕು ಎಂದು ಪೀಠ ಹೇಳಿದೆ.
ಈ ಪ್ರಕರಣದಲ್ಲಿ ಅಕ್ರಮವಾಗಿ ಜಾತಿ ಪ್ರಮಾಣ ಪತ್ರ ಪಡೆದ ಸಂಬಂಧ ಅರ್ಜಿದಾರರ ವಿರುದ್ಧ ಕಾನೂನು ಕ್ರಮ ಜರುಗಿಸಲು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು ಶಿಫಾರಸು ಮಾಡಿದ್ದಾರೆ. ಆದ್ದರಿಂದ ಜಾರಿ ನಿರ್ದೇಶನಾಲಯ ದಾಖಲಿಸಿರುವ ಎಫ್‌ಐಆರ್ ಮತ್ತು ಅದರ ಆಧಾರದಲ್ಲಿ ದಾಖಲಿಸಿರುವ ಆರೋಪ ಪಟ್ಟಿ ರದ್ದುಪಡಿಸಲಾಗುತ್ತಿದೆ ಎಂದು ನ್ಯಾಯಪೀಠ ಆದೇಶದಲ್ಲಿ ತಿಳಿಸಿದೆ.
ಪ್ರಕರಣದ ವಿವರ: ಅರ್ಜಿದಾರರಾದ ಪಳನಿ ಅವರು ಮೊದಲಿಯಾರ್ ಸಮುದಾಯಕ್ಕೆ ಸೇರಿದವರು. ಸರ್ಕಾರದ ಪ್ರಾಧಿಕಾರಗಳಿಗೆ ತಪ್ಪು ಮಾಹಿತಿ ನೀಡಿ ಪರಿಶಿಷ್ಟ ಪಂಗಡಕ್ಕೆ ಸೇರಿದ ವಾಲ್ಮೀಕಿ ಸಮುದಾಯಕ್ಕೆ ಸೇರಿದವರು ಎಂದು ತಿಳಿಸಿ ಜಾತಿ ಪ್ರಮಾಣ ಪತ್ರ ಪಡೆದುಕೊಂಡಿದ್ದರು. ಇದೇ ಪ್ರಮಾಣ ಪತ್ರವನ್ನು ನೀಡಿ ಶಿಪ್ಪಿಂಗ್ ಮತ್ತು ಸಾರಿಗೆ ಸಚಿವಾಲಯದಲ್ಲಿ ಲೈಟ್ ಕೀಪರ್ ಆಗಿ ಸೇವೆಗೆ ಸೇರಿಕೊಂಡಿದ್ದರು.
ನಂತರ ಈ ಜಾತಿ ಪ್ರಮಾಣ ಪತ್ರವನ್ನು ತಹಸೀಲ್ದಾರ್ ರದ್ದುಪಡಿಸಿದ್ದರು. ಅದನ್ನು ಪ್ರಶ್ನಿಸಿ ಪಳನಿ ಮೇಲ್ಮನವಿ ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣಾ ಹಂತದಲ್ಲಿರುವಾಗಲೇ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯ ಅರ್ಜಿದಾರರ ವಿರುದ್ಧ ಕೆ.ಆರ್. ಪುರ ಪೊಲೀಸ್ ಠಾಣೆಗೆ ದೂರು ನೀಡಿತ್ತು. ಅದನ್ನು ಆಧರಿಸಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದರು. ತನಿಖೆ ಪೂರ್ಣಗೊಳಿಸಿ ವಿಚಾರಣಾ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದರು. ಅದನ್ನು ಪ್ರಶ್ನಿಸಿ ಅರ್ಜಿದಾರರು ಹೈಕೋರ್ಟ್ ಮೆಟ್ಟಿಲೇರಿದ್ದರು.