ಸಾರಾಂಶ
ಬೆಂಗಳೂರು : ದೇವಸ್ಥಾನಗಳು, ಮನೆ ಎದುರು ನಿಲುಗಡೆ ಮಾಡಿದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ಬಸವನಗುಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಶಿವಮೊಗ್ಗ ಮೂಲದ ಪ್ರಸನ್ನ(33) ಬಂಧಿತ. ಆರೋಪಿಯಿಂದ ₹3 ಲಕ್ಷ ಮೌಲ್ಯದ ಐದು ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಲಾಗಿದೆ. ಇತ್ತೀಚೆಗೆ ಬಸವನಗುಡಿಯ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನದ ಎದುರು ವ್ಯಕ್ತಿಯೊಬ್ಬರು ನಿಲುಗಡೆ ಮಾಡಿದ್ದ ದ್ವಿಚಕ್ರ ವಾಹನ ಕಳ್ಳತನವಾಗಿತ್ತು. ಈ ಸಂಬಂಧ ದಾಖಲಾದ ದೂರಿನ ಮೇರೆಗೆ ತನಿಖೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಆರೋಪಿ ಪ್ರಸನ್ನ ವೃತ್ತಿಪರ ಕಳ್ಳನಾಗಿದ್ದಾನೆ. ಮೋಜು-ಮಸ್ತಿಗೆ ಸುಲಭವಾಗಿ ಹಣ ಗಳಿಸುವ ಉದ್ದೇಶದಿಂದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ. ಈ ಹಿಂದೆ ಹಲವು ಬಾರಿ ಬಂಧನಕ್ಕೆ ಒಳಗಾಗಿ ಜೈಲು ಸೇರಿದ್ದ. ಜಾಮೀನು ಪಡೆದು ಹೊರಗೆ ಬಂದ ಬಳಿಕವೂ ಕಳವು ಕೃತ್ಯ ಮುಂದುವರೆಸಿದ್ದ ಎಂಬುದು ವಿಚಾರಣೆಯಿಂದ ತಿಳಿದು ಬಂದಿದೆ.
ಆರೋಪಿಯು ವಿಚಾರಣೆ ವೇಳೆ ನೀಡಿದ ಮಾಹಿತಿ ಮೇರೆಗೆ ಚಿಕ್ಕಮಾವಳ್ಳಿ ಖಾಲಿ ಜಾಗದಲ್ಲಿ ನಿಲುಗಡೆ ಮಾಡಿದ್ದ ನಾಲ್ಕು ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಲಾಗಿದೆ. ಈತನ ಬಂಧನದಿಂದ ಬಸವನಗುಡಿ ಬ್ಯಾಟರಾಯನಪುರ ಠಾಣೆಯಲ್ಲಿ ದಾಖಲಾಗಿದ್ದ ತಲಾ ಒಂದು ದ್ವಿಚಕ್ರ ವಾಹನ ಕಳವು ಪ್ರಕರಣಗಳು ಪತ್ತೆಯಾಗಿವೆ. ಸದ್ಯ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದು, ತನಿಖೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.